ದಾವಣಗೆರೆ: ಕರ್ನಾಟಕದಲ್ಲಿ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಸ್ಪರ್ಧಿಸಲು ಆಡಳಿತ ಕಾಂಗ್ರೆಸ್ ಪಕ್ಷದಲ್ಲಿ ಭಾರೀ ಪೈಪೋಟಿ ಎದುರಾಗಿದೆ. ಹಲವಾರು ಆಕಾಂಕ್ಷಿಗಳು ಟಿಕೆಟಿಗಾಗಿ ಲಾಬಿ ನಡೆಸಿದ್ದು, ಕಾಂಗ್ರೆಸ್ಸಿಗೆ ಟಿಕೆಟ್ ನೀಡುವುದೇ ತಲೆನೋವಾಗಿ ಪರಿಣಮಿಸಿದೆ. ಈ ನಡುವೆ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿರುವ ಎಸ್.ಎಸ್. ಮಲ್ಲಿಕಾರ್ಜುನ ಮತ್ತು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ದಂಪತಿಯ ಪುತ್ರ ಹಾಗೂ ದಿವಂಗತ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ ಶಾಮನೂರು ಟಿಕೆಟ್ ಘೋಷಣೆ ಮುನ್ನವೇ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಎರಡು ನಾಮಪತ್ರ ಸಲ್ಲಿಸಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ.
ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ನಡೆಯುವ ಉಪಚುನಾವಣೆಗೆ ಅವರ ಮೊಮ್ಮಗ ಸಮರ್ಥಶಾಮನೂರು ಅವರು ತಾಯಿ ಹಾಗೂ ಸಂಸದೆ ಡಾ ಪ್ರಭಾ ಜೊತೆಗೆ ಬರಿಗಾಲಿನಲ್ಲಿ ಮಹಾನಗರ ಪಾಲಿಕೆಗೆ ಆಗಮಿಸಿ ಚುನಾವಣಾಧಿಕಾರಿಗಳಿಗೆ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.
ಬಿ ಫಾರಂ ಇಲ್ಲದೆ ಕಾಂಗ್ರೆಸ್ ಅಭ್ಯರ್ಥಿ
ಸಮರ್ಥ ಅವರು ಬಿ ಫಾರಂ ಇಲ್ಲದೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಒಂದು ನಾಮಪತ್ರ ಸಲ್ಲಿಸಿದರೆ, ಇನ್ನೊಂದು ಪಕ್ಷೇತರ ಅಭ್ಯರ್ಥಿಯಾಗಿ ತಮ್ಮ ನಾಮಪತ್ರವನ್ನು ಸಲ್ಲಿಸಿದ್ದಾರೆ.
ಕಾಂಗ್ರೆಸ್ ಪಕ್ಷದಿಂದ ತಮಗೆ ಬಿ ಫಾರಂ ಸಿಗುವ ಸಂಪೂರ್ಣ ವಿಶ್ವಾಸವಿದೆ ಎಂದು ನಾಮಪತ್ರ ಸಲ್ಲಿಸಿದ ಬಳಿಕ ಮಾಧ್ಯಮಗಳಿಗೆ ಅವರು ತಿಳಿಸಿದರು. ಇಂದು ಶುಭ ಘಳಿಗೆ ಇರುವುದರಿಂದ ನಾನು ಇಂದು ನಾಮಪತ್ರ ಸಲ್ಲಿಸಿದ್ದೇನೆ, ಮತ್ತೊಮ್ಮೆ ಟಿಕೆಟ್ ಘೋಷಣೆಯಾದ ಬಳಿಕ ಕಾಂಗ್ರೆಸ್ ನಾಯಕರ ಜೊತೆ ಮತ್ತೊಮ್ಮೆ ಸಲ್ಲಿಸುವುದಾಗಿ ಅವರು ಶಾಮನೂರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಧ್ಯ ಕರ್ನಾಟಕದಲ್ಲಿ ವಿಶೇಷವಾಗಿ ದಾವಣೆಗೆರೆ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ನಮ್ಮ ತಾತ ಶಾಮನೂರು ಶಿವಶಂಕರಪ್ಪ ಕಟ್ಟಿದ್ದಾರೆ, ಮಧ್ಯಕರ್ನಾಟಕದಲ್ಲಿ ಅವರು ಪ್ರಭಾವಿ ನಾಯಕರಾಗಿದ್ದರು. ಆದ್ದರಿಂದ ನಾನು ಈ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ. ಮುಸ್ಲಿಂ ಸಮುದಾಯದ ಎಲ್ಲ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆ ಎದುರಿಸುತ್ತೇನೆ ಎಂದು ಅವರು ತಿಳಿಸಿದರು.
ಸಮರ್ಥಗೆ ಬಿ. ಫಾರಂ ಸಿಗುವ ವಿಶ್ವಾಸವಿದೆ. ಇಂದು ಶುಭ ದಿನವಾಗಿದ್ದರಿಂದ ನಾಮಪತ್ರ ಸಲ್ಲಿಸಲಾಗಿದೆ ಎಂದು ಬಿ.ಫಾರಂ ಸಿಕ್ಕ ನಂತರ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಾಗುತ್ತದೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ತಿಳಿಸಿದ್ದಾರೆ.
ಈ ಮಧ್ಯೆ ಕಾಂಗ್ರೆಸ್ಸಿನ ರಾಜ್ಯ ಉಸ್ತುವಾರಿ ರಣದೀಪ ಸಿಂಗ್ ಸುರ್ಜೇವಾಲ ಬೆಂಗಳೂರಿಗೆ ಆಗಮಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಜೊತೆ ಮಹತ್ವದ ಮಾತುಕತೆ ನಡೆಸಿದ್ದಾರೆ. ಸುದೀರ್ಘ ಮಾತುಕತೆ ನಡೆಸಿದ ಬಳಿಕ ಇಬ್ಬರೂ ನಾಯಕರು ತಮ್ಮ ಅಭಿಪ್ರಾಯ ತಿಳಿಸಿದ್ದು, ಅಂತಿಮವಾಗಿ ಒಂದೆರೆಡು ದಿನಗಳಲ್ಲಿ ಪಕ್ಷವು ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಿದೆ.


ನಿಮ್ಮ ಕಾಮೆಂಟ್ ಬರೆಯಿರಿ