ಧಾರವಾಡ : ಮಾಜಿ ಶಾಸಕನ ಪುತ್ರನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

ಧಾರವಾಡ : ಧಾರವಾಡ ಜಿಲ್ಲೆಯಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು, ವ್ಯಕ್ತಿಯೊಬ್ಬರ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ (Raju Bolashetty) ಅವರನ್ನ ಕೊಲೆ ಮಾಡಿ ಮೃತದೇಹ ಸಟ್ಟುಹಾಕಿರುವ ಶಂಕೆ ವ್ಯಕ್ತವಾಗಿದೆ. ಧಾರವಾಡದ ರಾಮಾಪುರ ಗ್ರಾಮದ ಬಳಿಯ ನಿರ್ಜನ ಪ್ರದೇಶದಲ್ಲಿ ಮಂಗಳವಾರ ಈ ಘಟನೆ ಬೆಳಕಿಗೆ ಬಂದಿದೆ.
ಧಾರವಾಡ ತಾಲ್ಲೂಕಿನ ರಾಮಪುರ ಗ್ರಾಮದ ಸಮೀಪವಿರುವ ರೈಲ್ವೆ ಹಳಿ ಹತ್ತಿರದ ಅರಣ್ಯ ಪ್ರದೇಶದಲ್ಲಿ ಇವರ ವ್ಯಾಗನ್-ಆರ್ (WagonR) ಕಾರು ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಜನರು ಬೆಳಿಗ್ಗೆ ಹೊಲಕ್ಕೆ ಹೋಗುವಾಗ ಸುಟ್ಟ ಸ್ಥಿತಿಯಲ್ಲಿದ್ದ ಕಾರನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತರನ್ನು ಬೈಲಹೊಂಗಲದ ಮಾಜಿ ಶಾಸಕ ಬಾಬೂರಾವ್ ಬೋಳಶೆಟ್ಟಿ ಅವರ ಪುತ್ರ ಎಂದು ಗುರುತಿಸಲಾಗಿದೆ.

ಬೆಳಗಾವಿ ಜಿಲ್ಲೆಯ ಬೈಲಹೊಂಗಲದ ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ (Baburao Bolashetty) ಅವರ ಪುತ್ರ ರಾಜು ಬೋಳಶೆಟ್ಟಿ (53) ಅವರ ಕಾರು ಇದಾಗಿದ್ದು, ಕಾರಿನಲ್ಲಿದ್ದ ಪತ್ತೆಯಾಗಿರುವ ಮೃತದೇಹ ಸಂಪೂರ್ಣ ಸುಟ್ಟು ಕರಕಲಾಗಿದೆ. ಈ ಮಧ್ಯೆ ಸೋಮವಾರದಿಂದ ರಾಜು ಬೋಳಶೆಟ್ಟಿ ಅವರು ನಾಪತ್ತೆಯಾಗಿರುವುದರಿಂದ ದುಷ್ಕರ್ಮಿಗಳು ರಾಜು ಬೋಳಶೆಟ್ಟಿ ಅವರನ್ನ ಕೊಲೆಗೈದು, ಕಾರಿನಲ್ಲಿ ಹಾಕಿ ಸುಟ್ಟುಹಾಕಿರಬಹುದೆಂಬ ಶಂಕೆ ವ್ಯಕ್ತವಾಗಿದೆ
ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಗುಂಜನ್ ಆರ್ಯ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಧಿವಿಜ್ಞಾನ ತಂಡ (FSL) ಮತ್ತು ಶ್ವಾನದಳವು ಸ್ಥಳದಿಂದ ಮಹತ್ವದ ಸುಳಿವುಗಳನ್ನು ಸಂಗ್ರಹಿಸಿವೆ.
ಪ್ರಸ್ತುತ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ನಿಗೂಢ ಸಾವಿನ ಬಗ್ಗೆ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ವಿಶೇಷ ತಂಡಗಳನ್ನು ರಚಿಸಲಾಗಿದೆ.

ಪ್ರಮುಖ ಸುದ್ದಿ :-   ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement