ಬಸ್-ಬೈಕ್ ಡಿಕ್ಕಿ: ಹೊತ್ತಿ ಉರಿದ ಬಸ್ ; ಬೈಕ್‌ ಸವಾರ ಸಜೀವ ದಹನ

ವಿಜಯಪುರ: ಜಿಲ್ಲೆಯ ಸಿಂದಗಿ ತಾಲೂಕಿನ ಕನ್ನೊಳ್ಳಿ ಟೋಲ್‌ಗೇಟ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸಜೀವ ದಹನಗೊಂಡು ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ.
ಮಾಹಿತಿಯ ಪ್ರಕಾರ, ರಾಷ್ಟ್ರೀಯ ಹೆದ್ದಾರಿಯ ಕನ್ನೊಳ್ಳಿ ಟೋಲ್ ಪ್ಲಾಜಾ ಬಳಿ ವೇಗವಾಗಿ ಸಾಗುತ್ತಿದ್ದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಬಸ್ಸಿನೊಳಗೆ ಸಿಲುಕಿಕೊಂಡಿದೆ. ಇದರಿಂದ ತಕ್ಷಣವೇ ಬೆಂಕಿ ಹೊತ್ತಿಕೊಂಡಿದೆ. ಬೈಕ್ ಸವಾರ ಸಿಂದಗಿಯ ಅಭಿಷೇಕ ಸಾಹೇಬಗೌಡ ನಾಗರಹಳ್ಳಿ (19) ಬಸ್ಸಿನೊಳಗೆ ಸಿಲುಕಿಕೊಂಡಿದ್ದರಿಂದ ಸಜೀವ ದಹನಗೊಂಡಿದ್ದಾನೆ ಎಂದು ತಿಳಿದಬಂದಿದೆ.
ಬೆಂಕಿ ವೇಗವಾಗಿ ಹರಡಿ, ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಪ್ರಯಾಣಿಕರು ತಕ್ಷಣವೇ ಹೊರಬಂದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಧಾವಿಸಿ ಬೆಂಕಿಯನ್ನು ನಿಯಂತ್ರಿಸಿದ್ದಾರೆ. ಈ ಸಂಬಂಧ ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement