ಕಾರವಾರ : ಗೋವುಗಳನ್ನ ಕದಿಯಲು ಬಂದ ಕಳ್ಳರನ್ನ ತಡೆದು ವಿಚಾರಿಸುವಾಗ ಗೋವಿನ ಸಮೇತ ಕಾರನ್ನು ಬಿಟ್ಟು ಪರಾರಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಜಾಲಿ ಬಳಿಯ ತಲಗೇರಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಗೋವುಗಳನ್ನು ಬಿಳಿ ಬಣ್ಣದ ಸ್ವಿಫ್ಟ್ ಕಾರಿನಲ್ಲಿ ಕದ್ದೊಯ್ಯಲು ಯತ್ನಿಸುತ್ತಿದ್ದಾಗ ಗೋವುಗಳು ಕೂಗಿದ್ದು ಕೇಳಿ ಸ್ಥಳೀಯರಿಗೆ ಅನುಮಾನ ಬಂದಿದೆ. ತಕ್ಷಣವೇ ಕಾರ್ಪ್ರವೃತ್ತರಾದ ಅವರು ವಾಹನವನ್ನು ತಡೆದಿದ್ದಾರೆ. ಈ ವೇಳೆ ಆರೋಪಿಗಳು ಕಾರನ್ನು ಬಿಟ್ಟು ಪರಾರಿಯಾಗಿದ್ದು, ವಾಹನದಲ್ಲಿದ್ದ ಮೊಬೈಲ್ ಫೋನ್ ಸಿಕ್ಕಿದೆ.
ಆರೋಪಿಗಳು ನಕಲಿ ನಂಬರ್ ಪ್ಲೇಟ್ ಬಳಸಿ ಗುರುತು ಮರೆಮಾಚಲು ಯತ್ನಿಸಿದ್ದಾರೆ ಎನ್ನಲಾಗಿದೆ.
ಆರೋಪಿಗಳು ಸಮೀಪದ ಅರಣ್ಯ ಪ್ರದೇಶದಲ್ಲಿ ಅಡಗಿಕೊಂಡಿದ್ದರು. ನಂತರ ಪರಾರಿಯಾಗಲು ಮತ್ತೊಂದು ತಂಡವನ್ನು ಕರೆಸಿಕೊಂಡಿದ್ದು, ಈ ಬಗ್ಗೆ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ ನಂತರ ಅವರು ಬರುವಷ್ಟರಲ್ಲಿ ಬೈಕ್ ಸಹ ಬಿಟ್ಟು ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಸಾಕಿದ ಗೋವುಗಳನ್ನು ಕಳ್ಳತನ ಮಾಡಲು ಯತ್ನಿಸಿರುವುದಕ್ಕೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಪಿಗಳನ್ನು ಶೀಘ್ರವೇ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ