ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಲಾಗಿದೆ.
ಆಂತರಿಕ ಶಿಸ್ತು ಕಾಪಾಡುವ ನಿಟ್ಟಿನಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕಾಂಗ್ರೆಸ್ ಪಕ್ಷದ (INC) ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿ ಆದೇಶಿಸಿದ್ದಾರೆ.
ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ನಡೆಸಿದ ಪಕ್ಷ ವಿರೋಧಿ ಚಟುವಟಿಕೆಗಳ ಹಿನ್ನೆಲೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (INC) ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಎಂದು ಅಧಿಕೃತ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇತ್ತೀಚೆಗೆ ನಡೆದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಸಂದರ್ಭದಲ್ಲಿ ಅಬ್ದುಲ್ ಜಬ್ಬಾರ್ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧವಾಗಿ ಕೆಲಸ ಮಾಡಿದ್ದಾರೆ ಮತ್ತು ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದವು. ಈ ಸಂಬಂಧ ಕೆಪಿಸಿಸಿ ಶಿಸ್ತು ಸಮಿತಿಗೆ ದೂರುಗಳು ಸಲ್ಲಿಕೆಯಾಗಿದ್ದವು. ಈ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಈ ಮೂಲಕ ಚುನಾವಣಾ ಸಂದರ್ಭದಲ್ಲಿ ಪಕ್ಷದ ನಿರ್ಧಾರಗಳನ್ನು ಮೀರಿ ನಡೆಯುವವರಿಗೆ ಕಾಂಗ್ರೆಸ್ ಎಚ್ಚರಿಕೆಯ ಸಂದೇಶ ರವಾನಿಸಿದೆ.


ನಿಮ್ಮ ಕಾಮೆಂಟ್ ಬರೆಯಿರಿ