ನವದೆಹಲಿ : ಕೇಂದ್ರ ಸರ್ಕಾರದ ನೀತಿ ಆಯೋಗದ ನೂತನ ಉಪಾಧ್ಯಕ್ಷರಾಗಿ ಅಶೋಕಕುಮಾರ ಲಾಹಿರಿ ಅವರನ್ನು ನೇಮಕ ಮಾಡಲಾಗಿದೆ. ಹಾಲಿ ಉಪಾಧ್ಯಕ್ಷರಾಗಿದ್ದ ಸುಮನ್ ಬೆರಿ ಅವರ ಸ್ಥಾನಕ್ಕೆ ಲಾಹಿರಿ ಅವರನ್ನು ನೇಮಕ ಮಾಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕಾರ್ಯನಿರ್ವಹಿಸುವ ನೀತಿ ಆಯೋಗದಲ್ಲಿ ಉಪಾಧ್ಯಕ್ಷರ ಹುದ್ದೆ ಅತ್ಯಂತ ಮಹತ್ವದ್ದಾಗಿದೆ. ಸಂಸ್ಥೆಯ ನೀತಿ ರೂಪಣೆ, ಚಿಂತನೆ ಮತ್ತು ಶಿಫಾರಸುಗಳ ಪ್ರಮುಖ ಹೊಣೆಗಾರಿಕೆ ಉಪಾಧ್ಯಕ್ಷರ ಮೇಲಿದೆ.
ಇವರು ದೆಹಲಿ ಸ್ಕೂಲ್ ಆಫ್ ಎಕನಾಮಿಕ್ಸ್ನಲ್ಲಿ ಸ್ನಾತಕೋತ್ತರ ಪದವಿ ಮತ್ತು ಪಿಎಚ್ಡಿ ಪಡೆದಿದ್ದು, ಆರ್ಥಿಕ ನೀತಿ ರೂಪಣೆಯಲ್ಲಿ ಪರಿಣತರಾಗಿ ಗುರುತಿಸಿಕೊಂಡಿದ್ದಾರೆ. ಅಶೋಕಕುಮಾರ ಲಾಹಿರಿ ಅವರು ಖ್ಯಾತ ಅರ್ಥಶಾಸ್ತ್ರಜ್ಞರಾಗಿದ್ದು, ಆಡಳಿತ ಹಾಗೂ ಆರ್ಥಿಕ ಕ್ಷೇತ್ರದಲ್ಲಿ ದೀರ್ಘ ಅನುಭವ ಹೊಂದಿದ್ದು, ಈ ಹಿಂದೆ ಭಾರತ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದಾರೆ.
ಪಶ್ಚಿಮ ಬಂಗಾಳದ ಬಾಲೂರಘಾಟ್ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿಯೂ ಆಯ್ಕೆಯಾಗಿರುವ ಅವರು, 2002ರಿಂದ 2007ರ ವರೆಗೆ ಮಾಜಿ ಪ್ರಧಾನಿಗಳಾದ ಅಟಲ್ ಬಿಹಾರಿ ವಾಜಪೇಯಿ ಮತ್ತು ಮನಮೋಹನ್ ಸಿಂಗ್ ನೇತೃತ್ವದ ಸರ್ಕಾರಗಳಲ್ಲಿ ಮುಖ್ಯ ಆರ್ಥಿಕ ಸಲಹೆಗಾರರಾಗಿ ಕಾರ್ಯನಿರ್ವಹಿಸಿದ್ದರು. ಅಲ್ಲದೆ, ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕಿನಲ್ಲಿ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದು, 15ನೇ ಹಣಕಾಸು ಆಯೋಗದ ಸದಸ್ಯರಾಗಿದ್ದರು.
ನೀತಿ ಆಯೋಗವು ದೇಶದ ಅಭಿವೃದ್ಧಿಗೆ ಸಂಬಂಧಿಸಿದ ನೀತಿಗಳನ್ನು ರೂಪಿಸುವ ಪ್ರಮುಖ ವೇದಿಕೆಯಾಗಿದ್ದು, ಪ್ರಧಾನಮಂತ್ರಿಯವರು ಇದರ ಪದನಿಮಿತ್ತ ಅಧ್ಯಕ್ಷರಾಗಿರುತ್ತಾರೆ. ಉಪಾಧ್ಯಕ್ಷರನ್ನು ಪ್ರಧಾನಿಯವರೇ ನೇಮಕ ಮಾಡುತ್ತಾರೆ.


ನಿಮ್ಮ ಕಾಮೆಂಟ್ ಬರೆಯಿರಿ