ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.
ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ, ರಾಜ್ಯದ ಕರಾವಳಿ ಕರ್ನಾಟಕದ ಕೆಲ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ಒಳನಾಡು ಜಿಲ್ಲೆಗಳಲ್ಲಿ ಏಪ್ರಿಲ್ 29ರಿಂದ ಮೇ 1ರ ವರೆಗೆ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಈ ವೇಳೆ ಗಾಳಿಯ ವೇಗವು ಗಂಟೆಗೆ 40-50 ಕಿ.ಮೀ. ತಲುಪುವ ಸಾಧ್ಯತೆಯಿದ್ದು, ಆಲಿಕಲ್ಲು ಮಳೆಯಾಗುವ ಸಂಭವವಿದೆ.
ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ಕೊಡಗು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಮೂರು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ವಿಜಯನಗರ ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಈ ವೇಳೆ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಲವಾದ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಮೇ 2 ರಂದು ಸಹ ಈ ಭಾಗದಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಾಳಿಯ ವೇಗ ಗಂಟೆಗೆ 30 ರಿಂದ 40 ಕಿ.ಮೀ ಇರಲಿದೆ.


ನಿಮ್ಮ ಕಾಮೆಂಟ್ ಬರೆಯಿರಿ