ಬೆಂಗಳೂರು: ಮಕ್ಕಳಲ್ಲಿ ಹೆಚ್ಚುತ್ತಿರುವ ಡಿಜಿಟಲ್ ವ್ಯಸನವನ್ನು ನಿಯಂತ್ರಿಸಲು ಶಿಕ್ಷಣ ಇಲಾಖೆ ಹೊಸ ಕ್ರಮ ಕೈಗೊಂಡಿದ್ದು, ಇನ್ಮುಂದೆ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪ್ರತಿದಿನ 10 ರಿಂದ 15 ನಿಮಿಷಗಳ ಕಾಲ ಪತ್ರಿಕೆ ಓದುವುದನ್ನು ಕಡ್ಡಾಯಗೊಳಿಸಿದೆ.
ಡಿಜಿಟಲ್ ಯುಗದಲ್ಲಿ ಮಕ್ಕಳು ಮೊಬೈಲ್ ಫೋನ್, ಸಾಮಾಜಿಕ ಜಾಲತಾಣಗಳು ಮತ್ತು ಇಂಟರ್ನೆಟ್ ವ್ಯಸನಕ್ಕೆ ತುತ್ತಾಗುತ್ತಿರುವುದನ್ನು ಗಮನಿಸಿದ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು (KSCPCR) ಈ ಬಗ್ಗೆ ಶಿಫಾರಸು ಮಾಡಿತ್ತು. ಇದರ ಆಧಾರದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇದಕ್ಕೆ ಅನುಮೋದನೆ ನೀಡಿದ್ದಾರೆ. ಈ ನೂತನ ನಿಯಮವು ಮಕ್ಕಳನ್ನು ಬಾಹ್ಯ ಜಗತ್ತಿನ ವಿದ್ಯಮಾನಗಳೊಂದಿಗೆ ಸಂಪರ್ಕಿಸಲು ಮತ್ತು ಅವರಲ್ಲಿ ಓದುವ ಆಸಕ್ತಿ ಮೂಡಿಸಲು ಸಹಕಾರಿಯಾಗಲಿದೆ ಎಂದು ಶಿಕ್ಷಣ ಇಲಾಖೆ ವಿಶ್ವಾಸ ವ್ಯಕ್ತಪಡಿಸಿದೆ.
ಶಿಕ್ಷಣ ಇಲಾಖೆಯ ಆದೇಶದಂತೆ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳಿಗೂ ಈ ನಿಯಮ ಅನ್ವಯಿಸುತ್ತದೆ. ಅಲ್ಲದೆ, ವಸತಿ ಶಾಲೆಗಳು, ಮೊರಾರ್ಜಿ ದೇಸಾಯಿ ಸೇರಿದಂತೆ ಎಲ್ಲಾ ಹಾಸ್ಟೆಲ್‌ಗಳಲ್ಲೂ ಇದು ಕಡ್ಡಾಯವಾಗಿದೆ.
ಪ್ರತಿದಿನ ಬೆಳಗಿನ ಪ್ರಾರ್ಥನೆಯ ನಂತರ ಕನಿಷ್ಠ 10 ರಿಂದ 15 ನಿಮಿಷಗಳ ಕಾಲ ವಿದ್ಯಾರ್ಥಿಗಳು ಕನ್ನಡ ದಿನಪತ್ರಿಕೆಯನ್ನು ಓದಬೇಕು. ಈ ಸಮಯದಲ್ಲಿ ಪತ್ರಿಕಾ ವಾಚನಕ್ಕೆ ಪ್ರತ್ಯೇಕ ಕಾಲಾವಕಾಶವನ್ನು ವೇಳಾಪಟ್ಟಿಯಲ್ಲಿ ನಮೂದಿಸಬೇಕು. ವಿದ್ಯಾರ್ಥಿಗಳು ತಮ್ಮ ಇಷ್ಟದ ಯಾವುದೇ ಕನ್ನಡ ದಿನಪತ್ರಿಕೆಯಾದರೂ ಆರಿಸಿಕೊಳ್ಳಬಹುದು ಎಂದು ತಿಳಿಸಲಾಗಿದೆ.
ರಾಜ್ಯ ಸರ್ಕಾರ ಈಗಾಗಲೇ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳ ಬಳಕೆಯನ್ನು ನಿಷೇಧಿಸುವ ಬಗ್ಗೆ ಬಜೆಟ್‌ನಲ್ಲಿ ಘೋಷಿಸಿದೆ.


ನಿಮ್ಮ ಕಾಮೆಂಟ್ ಬರೆಯಿರಿ