ಬೆಂಗಳೂರಿನಲ್ಲಿ ಘೋರ ದುರಂತ: ಮಳೆಯಿಂದಾಗಿ ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ಸಾವು

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬುಧವಾರ ಸಂಜೆ ಆರ್ಭಟಿಸಿದ ಭೀಮರೂಪಿ ಮಳೆ ಭೀಕರ ದುರಂತಕ್ಕೆ ಕಾರಣವಾಗಿದೆ. ನಗರದ ಹೃದಯಭಾಗದಲ್ಲಿರುವ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿದು ಮಳೆಗಾಗಿ ಆಶ್ರಯ ಪಡೆದಿದ್ದ ಆರು ವರ್ಷದ ಮಗು ಸೇರಿದಂತೆ ಒಟ್ಟು ಏಳು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಬುಧವಾರ ಸಂಜೆ ಬೆಂಗಳೂರಿನಲ್ಲಿ ಬಿರುಗಾಳಿ, ಗುಡುಗು ಮತ್ತು ಆಲಿಕಲ್ಲು ಸಹಿತ ಭಾರಿ ಮಳೆ ಸುರಿದಿದೆ. ಈ ಸಂದರ್ಭದಲ್ಲಿ ರಸ್ತೆ ಬದಿಯ ವ್ಯಾಪಾರಿಗಳು ಮತ್ತು ದಾರಿಹೋಕರು ಮಳೆಯಿಂದ ರಕ್ಷಿಸಿಕೊಳ್ಳಲು ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆಯ ಬಳಿ ನಿಂತಿದ್ದರು. ಮಳೆಯ ಒತ್ತಡ ಹಾಗೂ ಗೋಡೆಯ ಒಳಗಡೆ ಸುರಿಯಲಾಗಿದ್ದ ಮಣ್ಣಿನ ಭಾರ ತಾಳಲಾರದೆ ಗೋಡೆ ದಿಢೀರನೆ ಕುಸಿದಿದೆ. ಪರಿಣಾಮವಾಗಿ ಗೋಡೆಯ ಕೆಳಗೆ ಸಿಲುಕಿದ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ದುರಂತದಲ್ಲಿ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಪೈಕಿ ಕೇರಳದ ರಾಮಮಂಗಲಂ ಮೂಲದ ಸ್ಮಿತಾ ಮತ್ತು ಲತಾ ಎಂಬ ಇಬ್ಬರು ಮಹಿಳೆಯರು ಸೇರಿದ್ದಾರೆ. ಇವರು ಕುಡುಂಬಶ್ರೀ ಸಂಘಟನೆಯ ಅಧ್ಯಯನ ಪ್ರವಾಸದ ಭಾಗವಾಗಿ ಬೆಂಗಳೂರಿಗೆ ಬಂದಿದ್ದರು ಎಂದು ತಿಳಿದುಬಂದಿದೆ.
ದುರಂತಕ್ಕೆ ಕಾರಣವೇನು?
ಆಸ್ಪತ್ರೆಯ ಆವರಣದೊಳಗೆ ಕಾಮಗಾರಿ ನಡೆಯುತ್ತಿದ್ದು, ಗುತ್ತಿಗೆದಾರರು ಕಾಂಪೌಂಡ್ ಗೋಡೆಯ ಪಕ್ಕದಲ್ಲೇ ಮಣ್ಣನ್ನು ರಾಶಿ ಹಾಕಿದ್ದರು. ಮಳೆ ನೀರು ಸೇರಿದಾಗ ಮಣ್ಣಿನ ಒತ್ತಡ ಹೆಚ್ಚಾಗಿ ಗೋಡೆ ಕುಸಿದಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈ ಬಗ್ಗೆ ಅಧಿಕಾರಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ.
ಬೆಂಗಳೂರು ನಗರದ ಮೆಜೆಸ್ಟಿಕ್, ಶಾಂತಿನಗರ, ಕೋರಮಂಗಲ, ವಿಧಾನಸೌಧ, ಶಿವಾಜಿನಗರ, ಚಾಮರಾಜಪೇಟೆ ಸೇರಿದಂತೆ ನಗರದ ಬಹುತೇಕ ಎಲ್ಲ ಪ್ರದೇಶಗಳಲ್ಲಿ ಭಾರೀ ಮಳೆ ಸುರಿದಿದೆ.
ಸ್ಥಳಕ್ಕೆ ಮುಖ್ಯಮಂತ್ರಿ ಭೇಟಿ – 5 ಲಕ್ಷ ರೂ. ಪರಿಹಾರ ಘೋಷಣೆ:
ದುರಂತದ ವಿಷಯ ತಿಳಿಯುತ್ತಿದ್ದಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿದ ಅವರು, “ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಪ್ರಕಟಿಸಿದರು. ಗಾಯಾಳುಗಳಿಗೆ ಉಚಿತ ಚಿಕಿತ್ಸೆ ನೀಡಲು ವೈದ್ಯರಿಗೆ ಸೂಚಿಸಲಾಗಿದೆ ಎಂದರು. ಘಟನೆಗೆ ಇಂಜಿನಿಯರ್‌ಗಳ ನಿರ್ಲಕ್ಷ್ಯ ಕಾರಣವೇ ಎಂಬ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು,” ಎಂದು ಭರವಸೆ ನೀಡಿದರು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಕೂಡ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement