ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ, ಜಿಲ್ಲಾ ಪರಿಷತ್ ಮಾಜಿ ಅಧ್ಯಕ್ಷ ರಮಾನಂದ ನಾಯಕ ನಿಧನ

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ, ಜನಪರ ಹೋರಾಟಗಾರ ಹಾಗೂ ಜಿಲ್ಲಾ ಪರಿಷತ್‌ನ ಪ್ರಥಮ ಅಧ್ಯಕ್ಷರಾಗಿದ್ದ ರಮಾನಂದ ನಾಯಕ ಹಿಚ್ಕಡ (78) ಅವರು ಗುರುವಾರ ಬೆಳಿಗ್ಗೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ ಅಪಾರಬಂಧು ಬಳಗದವರನ್ನು ಅಗಲಿದ್ದಾರೆ. ಸಜ್ಜನಿಕೆ, ಸರಳತೆ ಹಾಗೂ ಜನಪರ ನಿಲುವಿನ ಮೂಲಕ ಜಿಲ್ಲೆಯ ಜನರ ಮನಸ್ಸಿನಲ್ಲಿ ಅವರು ವಿಶೇಷ ಸ್ಥಾನ ಪಡೆದಿದ್ದರು. ಹುಬ್ಬಳ್ಳಿ-ಅಂಕೋಲಾ ರೈಲ್ವೆ ಹೋರಾಟ ಸಮಿತಿಯ ಅಧ್ಯಕ್ಷರಾಗಿ ಸುಮಾರು ಎರಡೂವರೆ ದಶಕಗಳ ಕಾಲ ಹುಬ್ಬಳ್ಳಿ-ಅಂಕೋಲಾ ನಡುವೆ ರೈಲು ಮಾರ್ಗ ನಿರ್ಮಾಣಕ್ಕೆ ಹಲವಾರು ಹೋರಾಟಗಳಲ್ಲಿ ಭಾಗಿಯಾಗಿದ್ದರು.

ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆಯವರ ಆಪ್ತರಾಗಿ ಜನತಾ ಪರಿವಾರದಿಂದ ತಮ್ಮ ರಾಜಕೀಯ ಜೀವನ ಆರಂಭಿಸಿದ್ದ ಅವರು ಉತ್ತರ ಕನ್ನಡ ಜಿಲ್ಲಾ ಪರಿಷತ್ ಅಧ್ಯಕ್ಷರಾಗಿ ದಕ್ಷ ಆಡಳಿತ ನೀಡಿದ್ದರು.ಪ್ರಸಕ್ತ ಕಾಂಗ್ರೆಸ್ ಪಕ್ಷದ ಸಕ್ರಿಯ ನಾಯಕರಾಗಿ ಗುರುತಿಸಿಕೊಂಡಿದ್ದ ಅವರು ಕಾರವಾರ- ಅಂಕೋಲಾ ವಿಧಾನಸಭಾ ಕ್ಷೇತ್ರದಲ್ಲಿ ಒಮ್ಮೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಹ ಸ್ಪರ್ಧೆ ಮಾಡಿದ್ದರು. ಆದರೆ ಪಕ್ಷ ರಾಜಕೀಯವನ್ನು ಮೀರಿ ಎಲ್ಲ ಪಕ್ಷಗಳ ನಾಯಕರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದ ಅವರು ಅಜಾತಶತ್ರುವಾಗಿದ್ದರು.

ಪ್ರಮುಖ ಸುದ್ದಿ :-   ಕರ್ನಾಟಕ ವಿಧಾನ ಪರಿಷತ್‌ ಚುನಾವಣೆ: ಬಿಜೆಪಿ-ಜೆಡಿಎಸ್ ಶಾಸಕರ ‘ಅಡ್ಡ ಮತದಾನ ’ ಕಾಂಗ್ರೆಸ್ ಕೈ ಹಿಡಿದದ್ದು ಹೇಗೆ ?

ರಾಜಕೀಯವಾಗಿ ಎಲ್ಲ ಪಕ್ಷದವರಿಂದ ಗೌರವಕ್ಕೆ ಪಾತ್ರರಾಗಿದ್ದ ಇವರು ಧಾರ್ಮಿಕ, ಸಹಕಾರಿ,ಶೈಕ್ಷಣಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ಅಪಾರ ಕೊಡುಗೆ ನೀಡಿದ್ದಾರೆ. ಹಲವಾರು ಸಾಮಾಜಿಕ ಸಂಸ್ಥೆಗಳೊಂದಿಗೆ ತೊಡಗಿಸಿಕೊಂಡು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿದ್ದರು.
ರಮಾನಂದ ನಾಯಕ ಅವರ ನಿಧನಕ್ಕೆ ವಿವಿಧ ರಾಜಕೀಯ ಪಕ್ಷಗಳ ನಾಯಕರು, ಗಣ್ಯರು ಹಾಗೂ ಸಾವಿರಾರು ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಸಜ್ಜನ ನಾಯಕನನ್ನು ಕಳೆದುಕೊಂಡಿದೆ ಎಂದು ಕಂಬನಿ ಮಿಡಿದಿದ್ದಾರೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement