ಬೆಂಗಳೂರು : ರಾಜ್ಯದ ಹಲವೆಡೆ ಮೂರು ದಿನಗಳ(ಮೇ 10ರ ವರೆಗೆ) ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಜೋರಾದ ಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹೇಳಿದೆ.
ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಸಹಿತ ಮಳೆಯಾಗಲಿದೆ. ಬೆಂಗಳೂರಿನಲ್ಲೂ ಮಳೆಯಾಗುವ ಸಾಧ್ಯತೆಯಿದ್ದು, ತಾಪಮಾನದಲ್ಲಿ ಅಲ್ಪ ಇಳಿಕೆಯಾಗುವ ನಿರೀಕ್ಷೆಯಿದೆ ಎಂದು ಮಾಹಿತಿ ನೀಡಿದೆ. ಮಳೆಯ ಸಮಯದಲ್ಲಿ ಕೆಲವು ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹೇಳಿದೆ. ಉತ್ತರ ಒಳನಾಡಿನ ಬಹುತೇಕ ಕಡೆ ಗರಿಷ್ಠ ತಾಪಮಾನ ಮುಂದುವರಿಯಲಿದೆ ಎಂದು ಹೇಳಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಮೇ 8 ಮತ್ತು 9ರಂದು ಗುಡುಗು ಸಹಿತ ಮಳೆಯಾಗಲಿದೆ ಹಾಗೂ ಉತ್ತರ ಒಳನಾಡಿನ ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮೇ 8ರಂದು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯ ವರದಿ ತಿಳಿಸಿದೆ.
ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಭಾಗಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಮುಂದಿನ 24 ರಿಂದ 48 ಗಂಟೆಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.


ನಿಮ್ಮ ಕಾಮೆಂಟ್ ಬರೆಯಿರಿ