ಬೆಂಗಳೂರು: ನಗರದ ಹೊರವಲಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಾಲ್ಗೊಂಡಿದ್ದ ಕಾರ್ಯಕ್ರಮಕ್ಕೆ ತೆರಳುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕಗ್ಗಲಿಪುರ ಪೊಲೀಸ್ ಠಾಣೆ ವ್ಯಾಪ್ತಿಯ ತಾತಗುಣಿ ಬಳಿ ಪ್ರಧಾನಿ ಮೋದಿ ತೆರಳುವ ಮಾರ್ಗದ ಬಳಿ ನಿಯಮಿತ ಭದ್ರತಾ ತಪಾಸಣೆಯ ಸಮಯದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ, ಕಗ್ಗಲಿಪುರ ಬಳಿಯ ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ಕೇಂದ್ರದ 45ನೇ ಸಂಸ್ಥಾಪನಾ ದಿನಾಚಣೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದಾರೆ.
ಭಾನುವಾರ ಬೆಳಿಗ್ಗೆ, ತಪಾಸಣೆಯ ಸಮಯದಲ್ಲಿ, ಪ್ರಧಾನಿ ಮೋದಿ ಆಗಮಿಸಬೇಕಿದ್ದ ಸ್ಥಳದಿಂದ ಸುಮಾರು ಮೂರು ಕಿಲೋಮೀಟರ್ ದೂರದಲ್ಲಿ ಪಾದಚಾರಿ ಮಾರ್ಗದ ಬದಿಯಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿತ್ತು. ಅದರಲ್ಲಿ ಎರಡು ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ ಎಂದು ಹೇಳಲಾಗಿದೆ. ತಕ್ಷಣವೇ ಪೊಲೀಸರು, ಬಾಂಬ್ ನಿಷ್ಕ್ರಿಯ ದಳಗಳು ಮತ್ತು ವಿಧಿವಿಜ್ಞಾನ ಸಿಬ್ಬಂದಿ ಸ್ಫೋಟಕ ವಸ್ತುಗಳ ಪರಿಶೀಲನೆಗಾಗಿ ಸ್ಥಳಕ್ಕೆ ಧಾವಿಸಿದರು. ವಿಚಾರಣೆಗಾಗಿ ಒಬ್ಬ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ ಹಾಗೂ ಈ ಬಗ್ಗೆ ಹೆಚ್ಚಿನ ವಿಚಾರಣೆ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.


ನಿಮ್ಮ ಕಾಮೆಂಟ್ ಬರೆಯಿರಿ