ಬೆಂಗಳೂರು: ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಮೇ 21 ರಂದು ಹಮ್ಮಿಕೊಳ್ಳಲಾಗಿರುವ ಬೃಹತ್ ಪ್ರತಿಭಟನೆಯ ಕುರಿತು ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಜಗಳ, ತಳ್ಳಾಟ ನಡೆದು ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಘಟನೆ ಬೆಂಗಳೂರಿನ ಕೆಪಿಸಿಸಿ (KPCC) ಕಚೇರಿಯಲ್ಲಿ ನಡೆದಿದೆ. ಯುವ ಕಾಂಗ್ರೆಸ್‌ನ (Youth Congress) ಎರಡು ಬಣಗಳ ನಡುವಿನ ಭಿನ್ನಾಭಿಪ್ರಾಯ ಬೀದಿಗೆ ಬಂದಿದ್ದು, ಸಭೆ ಕಾರ್ಯಕರ್ತರ ನಡುವಿನ ರಣರಂಗವಾಗಿ ಮಾರ್ಪಟ್ಟಿದೆ.
ರಾಷ್ಟ್ರೀಯ ಯುವ ಕಾಂಗ್ರೆಸ್ ನಿನ್ನೆ ಹಲವು ಮಂದಿ ಪದಾಧಿಕಾರಿಗಳನ್ನು ಅವರ ಸ್ಥಾನದಿಂದ ತೆಗೆದುಹಾಕಿತ್ತು. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಇಂದು, ಸೋಮವಾರ (ಮೇ 18) ಯುವ ಕಾಂಗ್ರೆಸ್ ಪದಾಧಿಕಾರಿಗಳ ನಡುವೆ ವಾಗ್ವಾದ ನಡೆದಿದೆ ಎನ್ನಲಾಗಿದ್ದು, ಇದು ವಿಕೋಪಕ್ಕೆ ಹೋಗಿ ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ.
ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ಪ್ರತಿಭಟನೆ ಸಂಬಂಧ ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಮತ್ತು ಅಧ್ಯಕ್ಷ ಮಂಜುನಾಥ್ ಗೌಡ ಬೆಂಬಲಿಗರ ನಡುವೆ ಜಗಳ ನಡೆದಿದೆ ಎನ್ನಲಾಗಿದ್ದು, ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗತೊಡಗಿದೆ.
ರಾಷ್ಟ್ರೀಯ ಯುವ ಕಾಂಗ್ರೆಸ್ ಆದೇಶದ ಮೇರೆಗೆ ಯುವ ಕಾಂಗ್ರೆಸ್ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಅವರನ್ನು ಇತ್ತೀಚೆಗಷ್ಟೇ ಅವರ ಸ್ಥಾನದಿಂದ ತೆಗೆದುಹಾಕಲಾಗಿತ್ತು. ಕೆಪಿಸಿಸಿಯಲ್ಲಿ ನಡೆದ ಸಭೆಯಲ್ಲಿ ಈ ಕ್ರಮದ ವಿರುದ್ಧ ದೀಪಿಕಾ ರೆಡ್ಡಿ ಬೆಂಬಲಿಗರ ಆಕ್ರೋಶ ಸ್ಫೋಟಗೊಂಡಿದೆ.
ಸಭೆ ಆರಂಭವಾಗುತ್ತಿದ್ದಂತೆ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಗೌಡ ಹಾಗೂ ಮಾಜಿ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಅವರ ಬೆಂಬಲಿಗರ ನಡುವೆ ಮಾತಿನ ಚಕಮಕಿ ಶುರುವಾಗಿದೆ. ದೀಪಿಕಾ ರೆಡ್ಡಿ ಅವರನ್ನು ಸ್ಥಾನದಿಂದ ಕೈಬಿಟ್ಟ ಕ್ರಮಕ್ಕೆ ಅವರು ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಮಂಜುನಾಥ ಗೌಡ ಬೆಂಬಲಿಗರಿಂದ ಇದಕ್ಕೆ ಪ್ರತಿರೋಧ ವ್ಯಕ್ತವಾಗಿದೆ. ಮಾತಿಗೆ ಮಾತು ಬೆಳೆದು ಎರಡೂ ಬಣಗಳ ಕಾರ್ಯಕರ್ತರು ಪರಸ್ಪರ ತಳ್ಳಾಟ, ನೂಕಾಟ ನಡೆಸಿದ್ದಾರೆ. ಎರಡು ಬಣದವರು ನಂತರ ಕೈಕೈ ಮಿಲಾಯಿಸುವ ಹಂತಕ್ಕೆ ಹೋಗಿದ್ದಾರೆ. ಕೊನೆಗೆ ಅಲ್ಲಿದ್ದ ಹಿರಿಯ ನಾಯಕರು ಕಾರ್ಯಕರ್ತರಯ ಎರಡೂ ಬಣದವರನ್ನು ಸಮಾಧಾನಪಡಿಸಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ