ಭಟ್ಕಳ: ನದಿ ದುರಂತ ; ಸಾವಿನ ಸಂಖ್ಯೆ 11ಕ್ಕೆ ಏರಿಕೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಅಳ್ವೆಕೋಡಿ ಸಮುದ್ರ ತೀರ ಪ್ರದೇಶದಲ್ಲಿ ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.
ಕಪ್ಪೆಚಿಪ್ಪು (ಚಪ್ಪೆಕಲ್ಲು) ಆರಿಸಲು ಒಟ್ಟು 14 ಮಂದಿ ನದಿಗೆ ಇಳಿದಿದ್ದ ವೇಳೆ ನೀರಿನ ರಭಸಕ್ಕೆ ಸಿಲುಕಿ ಮುಳುಗಿದ್ದರು. ಈ ಪೈಕಿ ಮೊದಲಿಗೆ 8 ಮಂದಿ ಶವ ಪತ್ತೆಯಾಗಿತ್ತು, ನಂತರ ಇಬ್ಬರ ಮೃತದೇಹ ಪತ್ತೆಯಾಗಿತ್ತು. ನಾಪತ್ತೆಯಾಗಿದ್ದ ಮಾದೇವ ನಾಯ್ಕ ಅವರ ಮೃತದೇಹ ಇಂದು, ಸೋಮವಾರ ಪತ್ತೆಯಾಗಿದೆ. ಎನ್‌ಡಿಆರ್‌ಎಫ್‌, ಈಶ್ವರ ಮಲ್ಪೆ ತಂಡ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಮೃತದೇಹವನ್ನು ಪತ್ತೆ ಮಾಡಿ ಹೊರತೆಗೆಯಲಾಗಿದೆ. ಇದಕ್ಕೆ ಸ್ಥಳೀಯ ಮೀನುಗಾರರು ಸಾಥ್ ಕೊಟ್ಟಿದ್ದರು.

ಮಾದೇವ ನಾಯ್ಕ ಅವರ ಮೃತದೇಹ ತಟ್ಟೆಹಕ್ಕಲು ನದಿಯ ಅಳವೆ ಪ್ರದೇಶದಲ್ಲಿ ಪತ್ತೆಯಾಗಿದೆ.
ಈ ಘಟನೆಯಲ್ಲಿ ಪಡುಶಿರಾಲಿ ಬೆಂಗ್ರೆಯ ಲಕ್ಷ್ಮಿ ಮಹಾದೇವ ನಾಯ್ಕ (42), ಶಾರದಾಹೊಳೆಯ ​ಉಮೇಶ ನಾಯ್ಕ (30), ​ಲಕ್ಷ್ಮಿ ನಾಯ್ಕ (30), ಲಕ್ಷ್ಮಿ ಅಣ್ಣಪ್ಪ ನಾಯ್ಕ (60), ​ಲಕ್ಷ್ಮಿ ಶಿವರಾಮ ನಾಯ್ಕ (49) , ​ಜ್ಯೋತಿ ನಾಗಪ್ಪ ನಾಯ್ಕ (34), ​ಮಾಲತಿ ನಾಯ್ಕ (38), ​ಮಾಸ್ತಮ್ಮ ನಾಯ್ಕ ಸೇರಿ 11 ಮಂದಿ ಮೃತರಾಗಿದ್ದಾರೆ. ಮೂವರು ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ.
ಕಳೆದ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ನದಿಯಲ್ಲಿ ನೀರಿನ ಹರಿವು ತೀವ್ರವಾಗಿತ್ತು. ಇದರೊಂದಿಗೆ ಸಮುದ್ರದ ಅಲೆಗಳ ಅಬ್ಬರವೂ ಹೆಚ್ಚಾಗಿದ್ದರಿಂದ ಹೊಳೆಯಲ್ಲಿ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿ ನೀರಿನ ರಭಸಕ್ಕೆ ಸಿಲುಕಿ ಮುಳುಗಿ ದುರಂತ ಸಂಭವಿಸಿದೆ.

ಪ್ರಧಾನಿ ಮೋದಿಯಿಂದ ಪರಿಹಾರ ಘೋಷಣೆ
ಭೀಕರ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಹಾಗೂ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ(PMNRF)ಯಿಂದ ತಲಾ 2 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು,ಗಾಯಾಳುಗಳಿಗೆ ತಲಾ 50 ಸಾವಿರ ರೂ. ನೆರವು ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ. “ಕರ್ನಾಟಕದ ಕಾರವಾರ ಜಿಲ್ಲೆಯಲ್ಲಿ ನಡೆದ ಘಟನೆಯನ್ನು ಕೇಳಿ ತೀವ್ರ ನೋವುಂಟಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ” ಎಂದು ಪ್ರಧಾನಿ ಹೇಳಿದ್ದಾರೆ.
ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement