
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 28ರ ಗುರುವಾರದಂದು ಭೇಟಿಯಾಗಲು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರ ಸಮಯಾವಕಾಶ ಕೋರಿದ್ದಾರೆ ಎಂದು ಮುಖ್ಯಮಂತ್ರಿ ಕಾರ್ಯಾಲಯದ (ಸಿಎಂಒ) ಉನ್ನತ ಮೂಲಗಳನ್ನು ಉಲ್ಲೇಖಿಸಿದ ವರದಿಯೊಂದು ಬುಧವಾರ ತಿಳಿಸಿವೆ.
ಮುಖ್ಯಮಂತ್ರಿಗಳು ರಾಜ್ಯಪಾಲರನ್ನು ಭೇಟಿ ಮಾಡಲು ಗುರುವಾರ ಸಮಯ ಕೇಳಿದ್ದಾರೆ,” ಎಂದು ಸಿದ್ದರಾಮಯ್ಯ ಅವರಿಗೆ ಅತ್ಯಂತ ಆಪ್ತರಾಗಿರುವ ಉನ್ನತ ಮೂಲವೊಂದು ಖಚಿತಪಡಿಸಿದೆ ಎಂದುವರದಿ ಹೇಳಿದೆ. ಮುಂದಿನ ಎರಡು ದಿನಗಳಲ್ಲಿ ರಾಜ್ಯದಲ್ಲಿ ದೊಡ್ಡ ರಾಜಕೀಯ ಬದಲಾವಣೆಯಾಗಲಿದ್ದು, ಗುರುವಾರವೇ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬ ವದಂತಿಗಳ ಮಧ್ಯೆ ಅವರು ರಾಜ್ಯಪಾಲರ ಭೇಟಿಗೆ ಸಮಯಾವಕಾಶ ಕೋರಿರುವುದು ಗಮನಾರ್ಹವಾಗಿದೆ.

ಶಿವಕುಮಾರಗೆ ದಾರಿ ಮಾಡಿಕೊಡಲಿದ್ದಾರೆಯೇ ಸಿದ್ದರಾಮಯ್ಯ?
ಕಾಂಗ್ರೆಸ್ ವಲಯದ ಮೂಲಗಳ ಪ್ರಕಾರ, ಸಿದ್ದರಾಮಯ್ಯ ಅವರು ರಾಜ್ಯಪಾಲ ಗೆಹ್ಲೋಟ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸುವ ಸಾಧ್ಯತೆಯಿದೆ. ಮುಂದಿನ ತಿಂಗಳು ನಡೆಯಲಿರುವ ರಾಜ್ಯಸಭಾ ಚುನಾವಣೆ ಮುಗಿದ ತಕ್ಷಣವೇ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲು ಹೈಕಮಾಂಡ್ ನಿರ್ಧರಿಸಿದೆ ಎನ್ನಲಾಗಿದೆ. ಇದೇ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಅಗ್ರ ನಾಯಕರಾದ ರಾಹುಲ್ ಗಾಂಧಿ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ ಅವರೊಂದಿಗೆ ಜಂಟಿಯಾಗಿ ಹಾಗೂ ಪ್ರತ್ಯೇಕವಾಗಿ ಗಂಟೆಗಳ ಕಾಲ ಸುದೀರ್ಘ ಚರ್ಚೆ ನಡೆಸಿದ್ದಾರೆ.
ಹೈಕಮಾಂಡ್ ಆಫರ್‌ಗೆ ಒಪ್ಪದ ಸಿಎಂ..?
77 ವರ್ಷದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಯಬೇಕು ಎಂದು ಡಿ.ಕೆ. ಶಿವಕುಮಾರ ಬಣ ತೀವ್ರ ಒತ್ತಡ ಹೇರುತ್ತಿದೆ ಎಂದು ಮೂಲಗಳು ತಿಳಿಸಿವೆ. ಸಿದ್ದರಾಮಯ್ಯ ಅವರಿಗೆ ಕೇಂದ್ರ ರಾಜಕಾರಣದಲ್ಲಿ ಪ್ರಮುಖ ಜವಾಬ್ದಾರಿ ನೀಡುವ ಹಾಗೂ ರಾಜ್ಯಸಭಾ ಸ್ಥಾನವನ್ನು ನೀಡುವ ಆಫರ್ ಅನ್ನು ಹೈಕಮಾಂಡ್ ಮುಂದಿಟ್ಟಿದೆ. ಆದರೆ, ಸಿದ್ದರಾಮಯ್ಯ ಅವರು ಈ ಸೂತ್ರವನ್ನು ಒಪ್ಪಿಕೊಂಡಿಲ್ಲ ಎಂದು ಹೇಳಲಾಗಿದೆ.
2023ರ ‘ಒಪ್ಪಂದ’ವೇ ನಾಯಕತ್ವ ಕಗ್ಗಂಟಿಗೆ ಕಾರಣ
ರಾಜ್ಯ ಕಾಂಗ್ರೆಸ್‌ನ ಈ ನಾಯಕತ್ವದ ಕಗ್ಗಂಟಿಗೆ ಮೂಲ ಕಾರಣ 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ನೀಡಲಾಗಿದ್ದ “ಭರವಸೆ” ಎನ್ನಲಾಗಿದೆ. ಅಂದು ಮಾಡಿಕೊಳ್ಳಲಾಗಿದ್ದ ಅಧಿಕಾರ ಹಂಚಿಕೆ ಸೂತ್ರದ ಪ್ರಕಾರ, ಮೊದಲ ಎರಡೂವರೆ ವರ್ಷಗಳ ಕಾಲ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಆಡಳಿತ ನಡೆಸಲಿದ್ದಾರೆ ಮತ್ತು ಉಳಿದ ಅವಧಿಗೆ ಡಿ.ಕೆ. ಶಿವಕುಮಾರ ಅವರಿಗೆ ಅಧಿಕಾರ ಹಸ್ತಾಂತರಿಸಲಿದ್ದಾರೆ ಎಂದು ಶಿವಕುಮಾರ ಬೆಂಬಲಿಗರು ಪ್ರತಿಪಾದಿಸುತ್ತಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ