ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಕುತೂಹಲ ಕೆರಳಿಸಿದ್ದ ನಾಯಕತ್ವ ಬದಲಾವಣೆಯ ಹೈಡ್ರಾಮಾಕ್ಕೆ ಕೊನೆಗೂ ತೆರೆ ಬಿದ್ದಿದೆ. ಮೂರು ವರ್ಷಗಳ ಕಾಲ ಕಾಂಗ್ರೆಸ್ ಸರ್ಕಾರದ ನೇತೃತ್ವ ವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಅಧಿಕೃತವಾಗಿ ನಿರ್ಧರಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯ ಮೇರೆಗೆ ಅವರು ಹಿರಿಯ ನಾಯಕ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಅಧಿಕಾರದ ಚುಕ್ಕಾಣಿ ಹಸ್ತಾಂತರಿಸಲಿದ್ದಾರೆ.
ಗುರುವಾರ ಬೆಳಿಗ್ಗೆ ತಮ್ಮ ಅಧಿಕೃತ ನಿವಾಸದಲ್ಲಿ ಹಮ್ಮಿಕೊಂಡಿದ್ದ ಸಚಿವರು ಹಾಗೂ ಶಾಸಕರ ಉಪಾಹಾರ ಕೂಟದಲ್ಲಿ ಸಿದ್ದರಾಮಯ್ಯ ಅವರು ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಹಾಗೂ ಗುರುವಾರ ಮಧ್ಯಾಹ್ನ 2:30 ಕ್ಕೆ ಲೋಕಭವನಕ್ಕೆ ಭೇಟಿ ನೀಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಂದ ನೇರ ಸಂದೇಶ ಬಂದ ಬೆನ್ನಲ್ಲೇ ಸಿದ್ದರಾಮಯ್ಯ ಅವರು ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಮೂಲಗಳು ತಿಳಿಸಿವೆ. “ಲೋಕಸಭೆಯ ವಿಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರು ಸೂಚಿಸಿದರೆ ನಾನು ತಕ್ಷಣವೇ ಸ್ಥಾನದಿಂದ ಕೆಳಗಿಳಿಯುತ್ತೇನೆ” ಎಂದು ಸಿದ್ದರಾಮಯ್ಯ ಈ ಹಿಂದೆ ಹಲವು ಬಾರಿ ಹೇಳಿದ್ದರು. ಅದರಂತೆಯೇ ಹೈಕಮಾಂಡ್ ಆದೇಶವನ್ನು ಪಾಲಿಸಿರುವ ಅವರು, ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಮತ್ತು ಶಾಸಕರಿಗೆ ಪರಿಸ್ಥಿತಿಯನ್ನು ವಿವರಿಸಿದ್ದಾರೆ. ಕೇಂದ್ರ ರಾಜಕಾರಣಕ್ಕೆ ಪ್ರವೇಶಿಸುವಂತೆ ತಮಗೆ ಹೈಕಮಾಂಡ್ ಸೂಚಿಸಿದೆ ಎಂದು ಅವರು ಸಭೆಯಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.
ಡಿಕೆಶಿಗೆ ಸಿದ್ದರಾಮಯ್ಯ ಬೆಂಬಲ, ಒಗ್ಗಟ್ಟಿನ ಮಂತ್ರ
ಉಪಾಹಾರ ಕೂಟದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರೂ ಉಪಸ್ಥಿತರಿದ್ದರು. ಈ ವೇಳೆ ಸಿದ್ದರಾಮಯ್ಯ ಅವರು, ಮುಂದಿನ ಮುಖ್ಯಮಂತ್ರಿಯಾಗಲಿರುವ ಡಿ.ಕೆ. ಶಿವಕುಮಾರ್ ಅವರಿಗೆ ಎಲ್ಲರೂ ಸಂಪೂರ್ಣ ಬೆಂಬಲ ನೀಡಬೇಕು ಎಂದು ಕೋರಿದರು.
ಈ ಬೆಳವಣಿಗೆಯ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್ ತನ್ನ ಅಧಿಕೃತ ‘X’ (ಟ್ವಿಟರ್) ಖಾತೆಯಲ್ಲಿ, ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ ಒಟ್ಟಿಗಿರುವ ಫೋಟೋ ಹಂಚಿಕೊಂಡು, “ಆ ದಿನ, ಈ ದಿನ, ಎಂದೆಂದಿಗೂ… ಒಗ್ಗಟ್ಟೇ ನಮ್ಮ ಬಲ! ಜನಸೇವೆಯೇ ನಮ್ಮ ನಿರಂತರ ಸಂಕಲ್ಪ!” ಎಂದು ಪೋಸ್ಟ್ ಮಾಡುವ ಮೂಲಕ ಪಕ್ಷದಲ್ಲಿ ಯಾವುದೇ ಭಿನ್ನಮತವಿಲ್ಲ ಎಂಬ ಸಂದೇಶ ರವಾನಿಸಿದೆ.
ರಾಜೀನಾಮೆ ಸಲ್ಲಿಕೆಗಾಗಿ ಸಿದ್ದರಾಮಯ್ಯ ಅವರು ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅವರ ಭೇಟಿಗೆ ಸಮಯ ಕೋರಿದ್ದಾರೆ. ಅವರು ಗುರುವಾರ ಮಧ್ಯಾಹ್ನ 2:30 ಕ್ಕೆ ಲೋಕಸಭವನಕ್ಕೆ ಭೇಟಿ ನೀಡಿ ರಾಜೀನಾಮೆ ಸಲ್ಲಿಸಿದ ನಂತರ ಮಧ್ಯಾಹ್ನ 3.00 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ದೆಹಲಿಯಲ್ಲಿ ನಡೆದಿದ್ದ ಬಿರುಸಿನ ಚಟುವಟಿಕೆ
ಕಳೆದ ಮಂಗಳವಾರವಷ್ಟೇ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ ಅವರನ್ನು ದೆಹಲಿಗೆ ಮುಖಂಡರು ಕರೆಸಿಕೊಂಡಿದ್ದರು. ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪಕ್ಷದ ಸಂಘಟನಾ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ ಮತ್ತು ರಾಜ್ಯ ಉಸ್ತುವಾರಿ ರಣದೀಪ ಸಿಂಗ್ ಸುರ್ಜೇವಾಲಾ ಸಮ್ಮುಖದಲ್ಲಿ ಸುದೀರ್ಘ ಸರಣಿ ಸಭೆಗಳು ನಡೆದಿದ್ದವು. ಈ ಸಭೆಯಲ್ಲೇ ಅಧಿಕಾರ ಹಸ್ತಾಂತರದ ಅಂತಿಮ ನಿರ್ಧಾರ ಕೈಗೊಳ್ಳಲಾಗಿತ್ತು. ಪ್ರಸ್ತುತ ವೇಣುಗೋಪಾಲ ಹಾಗೂ ಸುರ್ಜೇವಾಲಾ ಅವರು ಬೆಂಗಳೂರಿನಲ್ಲೇ ಮೊಕ್ಕಾಂ ಹೂಡಿದ್ದು, ಸುಗಮ ಅಧಿಕಾರ ಹಸ್ತಾಂತರದ ಪ್ರಕ್ರಿಯೆಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.
2.5 ವರ್ಷಗಳ ಒಪ್ಪಂದದ ಸೂತ್ರ
2023 ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತ ಗಳಿಸಿದಾಗ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ ಮುಖ್ಯಮಂತ್ರಿ ಸ್ಥಾನಕ್ಕಾಗಿ ತೀವ್ರ ಪೈಪೋಟಿ ನಡೆದಿತ್ತು. ಆಗ ಹೈಕಮಾಂಡ್ “ಎರಡೂವರೆ ವರ್ಷಗಳ ಅವಧಿಯ ಅಧಿಕಾರ ಹಂಚಿಕೆ ಸೂತ್ರ” (Rotational CM Formula) ವನ್ನು ಸಿದ್ಧಪಡಿಸಿ, ಮೊದಲ ಅವಧಿಗೆ ಸಿದ್ದರಾಮಯ್ಯ ಅವರಿಗೆ ಪಟ್ಟ ಕಟ್ಟಿತ್ತು. ಈಗ ಆ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಒಪ್ಪಂದದಂತೆ ಡಿ.ಕೆ. ಶಿವಕುಮಾರ ಅವರಿಗೆ ಈಗ ಮುಖ್ಯಮಂತ್ರಿ ಹುದ್ದೆಯನ್ನು ನೀಡಲಾಗುತ್ತಿದೆ ಎನ್ನಲಾಗಿದೆ.
ಕೇಂದ್ರದ ಆಫರ್ ತಿರಸ್ಕರಿಸಿದ ಸಿದ್ದರಾಮಯ್ಯ?
ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ರಾಜ್ಯಸಭಾ ಸ್ಥಾನ ನೀಡಿ ಕೇಂದ್ರ ರಾಜಕಾರಣದಲ್ಲಿ ದೊಡ್ಡ ಜವಾಬ್ದಾರಿ ನೀಡಲು ಮುಂದಾಗಿತ್ತು. ಆದರೆ, ಸದ್ಯಕ್ಕೆ ಸಿದ್ದರಾಮಯ್ಯ ಅವರು ರಾಜ್ಯಸಭಾ ಸದಸ್ಯತ್ವದ ಪ್ರಸ್ತಾಪವನ್ನು ನಿರಾಕರಿಸಿದ್ದು, ಕರ್ನಾಟಕ ವಿಧಾನಸಭೆಯ ಶಾಸಕರಾಗಿಯೇ ಮುಂದುವರಿದು ರಾಜ್ಯ ರಾಜಕಾರಣದಲ್ಲೇ ಸಕ್ರಿಯರಾಗಿರಲು ಬಯಸಿದ್ದಾರೆ ಎಂದು ನಂಬಲರ್ಹ ಮೂಲಗಳು ತಿಳಿಸಿವೆ.
ಸಂಭ್ರಮ-ಪ್ರತಿಭಟನೆ
ಸಿದ್ದರಾಮಯ್ಯ ಅವರ ಅಧಿಕೃತ ಪ್ರಕಟಣೆ ಹೊರಬೀಳುತ್ತಿದ್ದಂತೆ ಬೆಂಗಳೂರು, ರಾಮನಗರ ಸೇರಿದಂತೆ ರಾಜ್ಯದ ವಿವಿಧೆಡೆ ಡಿ.ಕೆ. ಶಿವಕುಮಾರ್ ಅಭಿಮಾನಿಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಭರ್ಜರಿ ಸಂಭ್ರಮಾಚರಣೆ ಆರಂಭಿಸಿದ್ದಾರೆ. ಇನ್ನೊಂದೆಡೆ, ಬುಧವಾರವಷ್ಟೇ ಸಿದ್ದರಾಮಯ್ಯ ಅವರ ಬೆಂಬಲಿಗರು ನಾಯಕತ್ವ ಬದಲಾವಣೆಯನ್ನು ವಿರೋಧಿಸಿ ಅವರ ನಿವಾಸದ ಎದುರು ಪ್ರತಿಭಟನೆ ನಡೆಸಿದ್ದನ್ನೂ ಇಲ್ಲಿ ಸ್ಮರಿಸಬಹುದು.


ನಿಮ್ಮ ಕಾಮೆಂಟ್ ಬರೆಯಿರಿ