ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ತೀವ್ರ ಕುತೂಹಲ ಮತ್ತು ಊಹಾಪೋಹಗಳಿಗೆ ತೆರೆ ಬಿದ್ದಿದೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆ ಬೆನ್ನಲ್ಲೇ ತಾವೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಿದ್ದರಾಮಯ್ಯ ಅವರು ಗುರುವಾರ ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳ ಮುಂದೆ ಅಧಿಕೃತವಾಗಿ ಪ್ರಕಟಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಂತಾಗಿದೆ.
ಗುರುವಾರ ಬೆಳಿಗ್ಗೆ ಬೆಂಗಳೂರಿನ ತಮ್ಮ ಅಧಿಕೃತ ನಿವಾಸದಲ್ಲಿ ಹಮ್ಮಿಕೊಂಡಿದ್ದ ಉಪಾಹಾರ ಕೂಟದಲ್ಲಿ ಸಚಿವರನ್ನು ಉದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, “ಹೈಕಮಾಂಡ್ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಮುಂದಿನ ಉತ್ತರಾಧಿಕಾರಿಯ ಬಗ್ಗೆ ಪಕ್ಷದ ನಾಯಕತ್ವವೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ” ಎಂದು ತಿಳಿಸಿದ್ದಾರೆ. ಇಂದು ಮಧ್ಯಾಹ್ನ 3ಗಂಟೆಗೆ ರಾಜಭವನಕ್ಕೆ ತೆರಳಿ ಅಧಿಕೃತವಾಗಿ ರಾಜೀನಾಮೆ ನೀಡುವುದಾಗಿ ಪ್ರಕಟಿಸಿದ್ದಾರೆ.ಇದಕ್ಕೂ ಮೊದಲು ಸಿದ್ದರಾಮಯ್ಯ ನಿವಾಸ ಕಾವೇರಿಯಲ್ಲಿ ಬ್ರೇಕ್ಫಾಸ್ಟ್ ಸಭೆಗೆ ಆಗಮಿಸಿದ ಡಿಸಿಎಂ ಡಿಕೆ ಶಿವಕುಮಾರ ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು.
ಯಾರೇ ಸಿಎಂ ಆದರೂ ನನ್ನ ಪೂರ್ಣ ಸಹಕಾರ:
“ಹೈಕಮಾಂಡ್ ಯಾರನ್ನು ಮುಂದಿನ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡುತ್ತದೆಯೋ, ಅವರಿಗೆ ನನ್ನ ಕಡೆಯಿಂದ ಸಂಪೂರ್ಣ ಸಹಕಾರ ಇರಲಿದೆ” ಎಂದು 77 ವರ್ಷದ ಹಿರಿಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಈ ಉಪಾಹಾರ ಕೂಟದಲ್ಲಿ ಮುಂದಿನ ಮುಖ್ಯಮಂತ್ರಿ ರೇಸ್ನಲ್ಲಿ ಮುಂಚೂಣಿಯಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸೇರಿದಂತೆ ಹಲವು ಪ್ರಮುಖ ಸಚಿವರು ಉಪಸ್ಥಿತರಿದ್ದರು.
ರಾಜಭವನಕ್ಕೆ ಸಿದ್ದರಾಮಯ್ಯ: ಆದರೆ ರಾಜ್ಯಪಾಲರು ಬೆಂಗಳೂರಿನಲ್ಲಿಲ್ಲ!
ಸಿದ್ದರಾಮಯ್ಯ ಅವರು ಇಂದು (ಗುರುವಾರ) ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಅಧಿಕೃತವಾಗಿ ರಾಜೀನಾಮೆ ಪತ್ರ ಸಲ್ಲಿಸಲು ಸಮಯ ಕೋರಿದ್ದರು. ಆದರೆ, ರಾಜಭವನದ ಮೂಲಗಳ ಪ್ರಕಾರ, ರಾಜ್ಯಪಾಲರು ವೈಯಕ್ತಿಕ ಕಾರಣಗಳಿಗಾಗಿ ಇಂದೋರ್ಗೆ ದಿಢೀರ್ ಪ್ರಯಾಣ ಬೆಳೆಸಿದ್ದು, ಸದ್ಯ ಬೆಂಗಳೂರಿನಲ್ಲಿ ಲಭ್ಯವಿಲ್ಲ ಎಂದು ತಿಳಿದುಬಂದಿದೆ.
ಕಳೆದ ಮಂಗಳವಾರ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ ಇಬ್ಬರನ್ನೂ ದೆಹಲಿಗೆ ಕರೆಯಿಸಿಕೊಂಡಿದ್ದ ಕಾಂಗ್ರೆಸ್ ಕೇಂದ್ರ ನಾಯಕತ್ವ, ಎಐಸಿಸಿ ಪ್ರಧಾನ ಕಚೇರಿಯಲ್ಲಿ ಸರಣಿ ಸಭೆಗಳನ್ನು ನಡೆಸಿತ್ತು. ಲೋಕಸಭೆಯ ವಿಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ ಮತ್ತು ಎಐಸಿಸಿ ಕರ್ನಾಟಕ ಉಸ್ತುವಾರಿ ರಣದೀಪ ಸಿಂಗ್ ಸುರ್ಜೇವಾಲಾ ಈ ಸಭೆಗಳ ನೇತೃತ್ವ ವಹಿಸಿದ್ದರು.
ಮೂಲಗಳ ಪ್ರಕಾರ, ರಾಹುಲ್ ಗಾಂಧಿ ಅವರೇ ನೇರವಾಗಿ ಸಂದೇಶ ನೀಡಿದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ರಾಜೀನಾಮೆಗೆ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. “ರಾಹುಲ್ ಗಾಂಧಿ ಅವರು ವೈಯಕ್ತಿಕವಾಗಿ ಕೇಳಿಕೊಂಡರೆ ನಾನು ಸ್ಥಾನ ಬಿಟ್ಟುಕೊಡಲು ಸಿದ್ಧ” ಎಂದು ಸಿದ್ದರಾಮಯ್ಯ ಈ ಹಿಂದೆ ಹಲವು ಬಾರಿ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.
ಸಿದ್ದರಾಮಯ್ಯಗೆ ಕೇಂದ್ರದಲ್ಲಿ ದೊಡ್ಡ ಜವಾಬ್ದಾರಿ, ರಾಜ್ಯಸಭಾ ಸೀಟಿನ ಆಫರ್?
ವರದಿಗಳ ಪ್ರಕಾರ, ಅಧಿಕಾರ ಹಸ್ತಾಂತರ ಪ್ರಕ್ರಿಯೆಯ ಭಾಗವಾಗಿ ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ಕೇಂದ್ರ ಕಾಂಗ್ರೆಸ್ನಲ್ಲಿ ಪ್ರಮುಖ ಜವಾಬ್ದಾರಿ ಹಾಗೂ ರಾಜ್ಯಸಭಾ ಸ್ಥಾನದ ಆಫರ್ ನೀಡಿದೆ. ಆದರೆ ಸಿದ್ದರಾಮಯ್ಯ ಈ ಪ್ರಸ್ತಾಪವನ್ನು ತಕ್ಷಣವೇ ಒಪ್ಪಿಕೊಂಡಿಲ್ಲ ಎನ್ನಲಾಗಿದೆ.
ಮೇ 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತ ಗಳಿಸಿದಾಗಿನಿಂದ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ ನಡುವೆ ಮುಖ್ಯಮಂತ್ರಿ ಸ್ಥಾನಕ್ಕಾಗಿ ತೀವ್ರ ಪೈಪೋಟಿ ನಡೆದಿತ್ತು. ಆಗ ಹೈಕಮಾಂಡ್ ಉಭಯ ನಾಯಕರನ್ನು ಮನವೊಲಿಸಿ, ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಪಟ್ಟ ಹಾಗೂ ಡಿ.ಕೆ. ಶಿವಕುಮಾರ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಿ ಒಳ ಒಪ್ಪಂದದ ಸೂತ್ರ ಸಿದ್ಧಪಡಿಸಿತ್ತು. ಅದರಂತೆಯೇ ಈಗ ನಾಯಕತ್ವ ಬದಲಾವಣೆ ಆಗುತ್ತಿದೆ ಎಂಬ ಚರ್ಚೆಗಳು ನಡೆದಿವೆ.
ಆದಾಗ್ಯೂ, ಎಐಸಿಸಿ ಉಸ್ತುವಾರಿ ರಣದೀಪ ಸಿಂಗ್ ಸುರ್ಜೇವಾಲಾ ಅವರು ಬುಧವಾರವಷ್ಟೇ ಪ್ರತಿಕ್ರಿಯಿಸಿ, “ಕಾಂಗ್ರೆಸ್ ಅಧಿಕೃತವಾಗಿ ಯಾವುದೇ ಶಾಸಕಾಂಗ ಪಕ್ಷದ (CLP) ಸಭೆ ಕರೆದಿಲ್ಲ ಮತ್ತು ಯಾವುದೇ ಅಧಿಕೃತ ನಿರ್ಧಾರ ಪ್ರಕಟಿಸಿಲ್ಲ. ಮಾಧ್ಯಮಗಳು ಊಹಾಪೋಹಗಳನ್ನು ಹರಡಬಾರದು” ಎಂದು ವಿನಂತಿಸಿದ್ದರು. ಆದರೆ ಇಂದು, ಗುರುವಾರ ಬೆಳಿಗ್ಗೆ ಸಿದ್ದರಾಮಯ್ಯ ಅವರೇ ಸ್ವತಃ ರಾಜೀನಾಮೆಯ ನಿರ್ಧಾರ ಪ್ರಕಟಿಸುವ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
ಇದಕ್ಕೂ ಮೊದಲು ಸಿಎಂ ಸಿದ್ದರಾಮಯ್ಯ ನಿವಾಸ ಕಾವೇರಿಯಲ್ಲಿ ಬ್ರೇಕ್ಫಾಸ್ಟ್ ಸಭೆಗೆ ಡಿಸಿಎಂ ಡಿಕೆ ಶಿವಕುಮಾರ್ ಆಗಮಿಸಿದರು. ಇದೇ ವೇಳೆ, ಸಿಎಂ ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು.


ನಿಮ್ಮ ಕಾಮೆಂಟ್ ಬರೆಯಿರಿ