ವಿಡಿಯೋ | ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿರುವ ಕಾಂಗ್ರೆಸ್‌ ಸರ್ಕಾರದ ನಾಯಕತ್ವ ಬದಲಾವಣೆಯ ಬೆಳವಣಿಗೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ರಾಜ್ಯದ ಹೊರಗಿರುವ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಇಂದು ರಾತ್ರಿ ಮರಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರೊಂದಿಗೆ ರಾಜಭವನಕ್ಕೆ ತೆರಳಿದ ಸಿದ್ದರಾಮಯ್ಯ, ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭು ಶಂಕರ ಅವರಿಗೆ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದರು.
ರಾಜಭವನದಲ್ಲಿ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಕಾಂಗ್ರೆಸ್ ಹೈಕಮಾಂಡ್ ಸೂಚನೆಯ ಮೇರೆಗೆ ಈ ನಿರ್ಧಾರ ಕೈಗೊಂಡಿರುವುದಾಗಿ ಸ್ಪಷ್ಟಪಡಿಸಿದರು.

“ನನ್ನ ರಾಜೀನಾಮೆಯನ್ನು ರಾಜ್ಯಪಾಲರ ಕಚೇರಿಗೆ ಸಲ್ಲಿಸಿದ್ದೇನೆ. ರಾಜ್ಯಪಾಲರು ಸದ್ಯ ಇಲ್ಲಿಲ್ಲ, ಅವರು ಇಂದು ರಾತ್ರಿ ಹಿಂತಿರುಗಲಿದ್ದಾರೆ. ಆದ್ದರಿಂದ ಅವರ ಕಚೇರಿಗೆ ರಾಜೀನಾಮೆ ಪತ್ರ ನೀಡಲಾಗಿದೆ. ಹೈಕಮಾಂಡ್ ಸೂಚನೆ ನೀಡಿದ ತಕ್ಷಣವೇ ನಾನು ಕೆಳಗಿಳಿಯುವುದಾಗಿ ಮೊದಲೇ ಹೇಳಿದ್ದೆ. ಅದರಂತೆ ಇಂದು ರಾಜೀನಾಮೆ ನೀಡಿದ್ದೇನೆ. ನಮ್ಮ ಪಕ್ಷವು ಪೂರ್ಣ ಬಹುಮತವನ್ನು ಹೊಂದಿರುವುದರಿಂದ, ರಾಜ್ಯಪಾಲರು ಸಂವಿಧಾನಬದ್ಧವಾಗಿ ನನ್ನ ರಾಜೀನಾಮೆಯನ್ನು ಅಂಗೀಕರಿಸಿ, ಹೊಸ ಸರ್ಕಾರ ರಚನೆಗೆ ಅವಕಾಶ ನೀಡಲಿದ್ದಾರೆ ಎಂಬ ಸಂಪೂರ್ಣ ವಿಶ್ವಾಸ ನನಗಿದೆ ಎಂದು ಅವರು ಹೇಳಿದರು.
ಮೂಲಗಳ ಪ್ರಕಾರ ರಾಜ್ಯಪಾಲರು ಇಂದು ರಾತ್ರಿ 7:30ಕ್ಕೆ ಬೆಂಗಳೂರಿಗೆ ಮರಳುವ ಸಾಧ್ಯತೆಯಿದೆ. ಹೀಗಾಗಿ ರಾಜ್ಯಪಾಲರು ಮರಳಿದ ಬಳಿಕವಷ್ಟೇ ರಾಜೀನಾಮೆ ಅಂಗೀಕಾರದ ಔಪಚಾರಿಕ ಪ್ರಕ್ರಿಯೆಗಳು ಪೂರ್ಣಗೊಳ್ಳಲಿವೆ. ರಾಜೀನಾಮೆ ಪತ್ರವನ್ನು ಕಾರ್ಯದರ್ಶಿಗಳು ಸ್ವೀಕರಿಸಿದ್ದರೂ, ಸಂವಿಧಾನದ ನಿಯಮಾವಳಿಗಳ ಪ್ರಕಾರ ರಾಜ್ಯಪಾಲರು ಖುದ್ದಾಗಿ ಸಹಿ ಮಾಡಿದ ಬಳಿಕವೇ ರಾಜೀನಾಮೆ ಅಧಿಕೃತವಾಗಿ ಅಂಗೀಕಾರವಾಗಲಿದೆ.

ಪ್ರಮುಖ ಸುದ್ದಿ :-   8 ವರ್ಷಗಳ ಪ್ರೇಮದಲ್ಲಿ ಬಿರುಕು ; ಯುವತಿ ಆತ್ಮಹತ್ಯೆ, ಮೃತದೇಹಕ್ಕೆ ಪ್ರಿಯಕರ ಮಂಗಳಸೂತ್ರ ಕಟ್ಟಬೇಕು ಎಂದು ಕುಟುಂಬಸ್ಥರ ಪಟ್ಟು...

ಕಾಂಗ್ರೆಸ್ ನಾಯಕತ್ವಕ್ಕೆ ಕೃತಜ್ಞತೆ ಸಲ್ಲಿಸಿದ ಸಿದ್ದರಾಮಯ್ಯ
ತಮಗೆ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಕಾಂಗ್ರೆಸ್ ಅಗ್ರ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಿದ್ದರಾಮಯ್ಯ ಕೃತಜ್ಞತೆಗಳನ್ನು ಸಲ್ಲಿಸಿದರು.
“ನಾನು 2006 ರಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರಿದೆ. ಅಂದಿನಿಂದ ಇಂದಿನವರೆಗೆ ಪಕ್ಷದ ಎಲ್ಲಾ ಕಾರ್ಯಕರ್ತರು, ನಾಯಕರು, ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರು ನನಗೆ ಅಪಾರ ಪ್ರೀತಿ ಮತ್ತು ಬೆಂಬಲವನ್ನು ನೀಡಿದ್ದಾರೆ. ನನಗೆ ದೊಡ್ಡ ಜವಾಬ್ದಾರಿಗಳನ್ನು ನೀಡಿದ ಎಲ್ಲರಿಗೂ ಧನ್ಯವಾದಗಳು” ಎಂದು ಭಾವುಕರಾಗಿ ನುಡಿದರು.

ರಾಹುಲ್ ಗಾಂಧಿ ಭೇಟಿ: ಶನಿವಾರ ಸಿಎಲ್‌ಪಿ ಸಭೆ?
ಮೂಲಗಳ ಪ್ರಕಾರ, ಸಿದ್ದರಾಮಯ್ಯ ಇಂದು (ಗುರುವಾರ) ತಡವಾಗಿ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಲಿದ್ದಾರೆ. ಈ ವೇಳೆ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆ ನಡೆಸುವ ಕುರಿತು ಮಹತ್ವದ ಚರ್ಚೆ ನಡೆಯಲಿದೆ. ಶನಿವಾರ (ಮೇ 30) ಶಾಸಕಾಂಗ ಪಕ್ಷದ ಸಭೆ ನಡೆಯುವ ಸಾಧ್ಯತೆಯಿದ್ದು, ಪ್ರಸ್ತುತ ವಾರಾಂತ್ಯದೊಳಗೆ ನೂತನ ಮುಖ್ಯಮಂತ್ರಿಯ ಪ್ರಮಾಣವಚನ ಕಾರ್ಯಕ್ರಮ ನಿಗದಿಯಾಗಲಿದೆ. ಭಾನುವಾರ (ಮೇ 31)ನೂತನ ಸಿಎಂ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ದಟ್ಟವಾಗಿದೆ.
ಈ ಸಮಾರಂಭದಲ್ಲಿ ರಾಹುಲ್ ಗಾಂಧಿ ಅವರೂ ಭಾಗವಹಿಸಲಿದ್ದಾರೆ ಎಂದು ಹೇಳಲಾಗುತ್ತಿದೆಯಾದರೂ, ಹೊಸ ಸಂಪುಟದಲ್ಲಿ ಎಷ್ಟು ಮಂದಿ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬುದು ಇನ್ನಷ್ಟೇ ಅಂತಿಮವಾಗಬೇಕಿದೆ.

ಪ್ರಮುಖ ಸುದ್ದಿ :-   ಮತದಾರರ ಪಟ್ಟಿಯಿಂದ ಹೆಸರು ತೆಗೆದ ಮಾತ್ರಕ್ಕೆ ಪೌರತ್ವ ರದ್ದಾಗುವುದಿಲ್ಲ : ಸುಪ್ರೀಂ ಕೋರ್ಟ್

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅಧಿಕಾರ ವಹಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಲಾಗುತ್ತಿದ್ದು, ಅವರು ಸಿಎಂ ಆಗಲಿದ್ದಾರೆ ಎಂಬ ಸುದ್ದಿ ಹೊರಬೀಳುತ್ತಿದ್ದಂತೆ, ಬುಧವಾರ ರಾಮನಗರದಲ್ಲಿ ಅವರ ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿ ಹಂಚಿ, ಜೈಕಾರ ಕೂಗುವ ಮೂಲಕ ಸಂಭ್ರಮಾಚರಣೆ ನಡೆಸಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ದಿನದಿಂದಲೂ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ ನಡುವೆ “2.5 ವರ್ಷಗಳ ಅಧಿಕಾರ ಹಂಚಿಕೆ ಸೂತ್ರ”ದ (ರೊಟೇಷನಲ್ ಸಿಎಂ) ಚರ್ಚೆ ರಾಜಕೀಯ ವಲಯದಲ್ಲಿ ತೀವ್ರವಾಗಿ ಕೇಳಿಬರುತ್ತಿತ್ತು. ಹೈಕಮಾಂಡ್ ಈ ಸೂತ್ರವನ್ನು ಅಧಿಕೃತವಾಗಿ ಎಲ್ಲೂ ಒಪ್ಪಿಕೊಳ್ಳದಿದ್ದರೂ, ಸಿದ್ದರಾಮಯ್ಯ ಅವರ ರಾಜೀನಾಮೆಯೊಂದಿಗೆ ಈಗ ಅದಕ್ಕೆ ಅಧಿಕೃತ ತೆರೆ ಬಿದ್ದಂತಾಗಿದೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement