
ಬೆಂಗಳೂರು : ಗ್ಯಾರೆಂಟಿ ಯೋಜನೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿರುವವರ ವಿರುದ್ಧ ಮತ್ತು ಅನರ್ಹ ಫಲಾನುಭವಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು, ಆದರೆ ಇದೇ ವೇಳೆ ಒಬ್ಬನೇ ಒಬ್ಬ ಅರ್ಹ ಫಲಾನುಭವಿಗಳಿಗೆ ತೊಂದರೆ ಆಗಬಾರದು ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಶುಕ್ರವಾರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಗ್ಯಾರೆಂಟಿ ಯೋಜನೆಗಳ ದುರ್ಬಳಕೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಐದು ಚುನಾವಣಾ ಪೂರ್ವ ಗ್ಯಾರಂಟಿಗಳನ್ನು ಪರಿಚಯಿಸಿದ ನಂತರ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಈ ವರ್ಷದ ಫೆಬ್ರವರಿ ವರೆಗೆ ರಾಜ್ಯ ಬಜೆಟ್ ಪ್ರಕಾರ 1,21,598 ಕೋಟಿ ರೂ ಗಳನ್ನು ಖರ್ಚು ಮಾಡಿದೆ.
ರಾಜ್ಯದ ಕಾಂಗ್ರೆಸ್ ಸರ್ಕಾರವು ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುವ ‘ಗೃಹ ಜ್ಯೋತಿ’ ಯೋಜನೆ, ಪ್ರತಿ ಕುಟುಂಬದ ಮಹಿಳೆಗೆ 2,000 ರೂ.ಗಳ ಭರವಸೆ ನೀಡುವ ‘ಗೃಹ ಲಕ್ಷ್ಮಿ’ ಯೋಜನೆ ಮತ್ತು ಬಿಪಿಎಲ್ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೆ ತಿಂಗಳಿಗೆ 10 ಕೆಜಿ ಅಕ್ಕಿ ನೀಡುವ ‘ಅನ್ನ ಭಾಗ್ಯ’, ಸರ್ಕಾರಿ ಬಸ್‌ಗಳಲ್ಲಿ ರಾಜ್ಯದೊಳಗೆ ಮಹಿಳೆಯರಿಗೆ ಉಚಿತ ಪ್ರಯಾಣ ಸೇರಿ 5 ಗ್ಯಾರೆಂಟಿ ಯೋಜನೆಗಳನ್ನು ಜಾರಿಗೊಳಿಸಿದೆ.

ಗೃಹ ಜ್ಯೋತಿ ಯೋಜನೆ ಜಾರಿಗೆ ತಂದಾಗ, ದೊಡ್ಡ ಪ್ರಮಾಣದ ದುರ್ಬಳಕೆಯಾಗದಂತೆ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಗಿದೆ. ಇತರ ಯೋಜನೆಗಳ ಅನುಷ್ಠಾನದಲ್ಲೂ ಇದೇ ಮುನ್ನೆಚ್ಚರಿಕೆ ವಹಿಸಿದ್ದರೆ ದುರ್ಬಳಕೆ ಪ್ರಮಾಣ ಕಡಿಮೆಯಾಗುತ್ತಿತ್ತು. ಮರಣ ಹೊಂದಿದ ಫಲಾನುಭವಿಗಳಿಗೂ ಗೃಹ ಲಕ್ಷ್ಮಿ ಹಣ ಜಮಾ ಮಾಡಲಾಗುತ್ತಿದೆ ಆದ್ದರಿಂದ ಇಂತಹ ದುರ್ಬಳಕೆಯನ್ನು ನಿಲ್ಲಿಸಬೇಕು. ಫಲಾನುಭವಿಗಳ ಖಾತೆಗೆ ಗೃಹ ಲಕ್ಷ್ಮಿ ಹಣ ಜಮಾ ಆದ ಕೂಡಲೇ ಅವರ ಮೊಬೈಲ್ ಫೋನ್‌ಗೆ ಧ್ವನಿ ಸಂದೇಶದ ಮೂಲಕ ದೃಢೀಕರಣವನ್ನು ಕಳುಹಿಸಬೇಕು ಎಂದು ಶಿವಕುಮಾರ ಅಧಿಕಾರಿಗಳಿಗೆ ಸೂಚಿಸಿದರು.
ಯೋಜನೆಗಳಿಗೆ ಲಿಂಕ್ ಮಾಡಲಾದ ಬ್ಯಾಂಕ್ ಖಾತೆಗಳು ಕರ್ನಾಟಕದೊಳಗೆ ಇರಬೇಕು ಎಂದು ನಿರ್ಧರಿಸಲಾಗಿದೆ. ಬೇರೆ ರಾಜ್ಯಗಳ ಖಾತೆಗಳಿಗೆ ಹಣ ವರ್ಗಾವಣೆಯಾಗುತ್ತಿರುವುದು ಕಂಡು ಬಂದಿದ್ದು, ಇಂತಹ ವ್ಯವಹಾರಗಳನ್ನು ನಿಲ್ಲಿಸಬೇಕು ಎಂದು ಅವರು ಸೂಚನೆ ನೀಡಿದರು.


ನಿಮ್ಮ ಕಾಮೆಂಟ್ ಬರೆಯಿರಿ