
ಬೆಂಗಳೂರು: ದೇಶದ ಹಲವು ಭಾಗಗಳಲ್ಲಿ ಸುಮಾರು ಎರಡು ವಾರಗಳ ಮುಂಗಾರು ಮಳೆ ಕೈಕೊಟ್ಟ ನಂತರ ಈಗ ನೈಋತ್ಯ ಮಾನ್ಸೂನ್ ಪುನರುಜ್ಜೀವನದ ಲಕ್ಷಣಗಳನ್ನು ತೋರಿಸುತ್ತಿದೆ.
ರಾಜ್ಯದಲ್ಲಿ ಮುಂಗಾರು ಮಾರುತಗಳು ದಿನದಿಂದ ದಿನಕ್ಕೆ ಚುರುಕಾಗುತ್ತಿದ್ದು, ಹಲವು ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗಲು ವಾತಾವರಣ ಪೂರಕವಾಗಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಮುಂಬರುವ ದಿನಗಳಲ್ಲಿ ಕರಾವಳಿ ತೀರ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.
ಕರ್ನಾಟಕದ ಕರಾವಳಿಯಲ್ಲಿ ಜೂನ್ 21 ರಿಂದ ಜೂನ್ 25 ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ಇದೆ, ಉತ್ತರ ಮತ್ತು ದಕ್ಷಿಣ ಒಳನಾಡಿನ ಕರ್ನಾಟಕದಲ್ಲಿ ಜೂನ್ 22 ಮತ್ತು 23 ರಂದು ತೀವ್ರ ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಗಾಳಿಯ ವೇಗವೂ ಗಣನೀಯವಾಗಿ ಹೆಚ್ಚಾಗಲಿದ್ದು, ಜೂನ್ 21 ರಿಂದ ಕೆಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹವಾಮಾನ ಇಲಾಖೆ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ತಿಳಿಸಲಾಗಿದೆ.
ಹಲವು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’:
ಬಲವಾದ ಗಾಳಿ ಹಾಗೂ ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಜೂನ್ 21 ರಿಂದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ, ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ನೀಡಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳಿಲ್ಲಿ ಜೋರಾಗಿ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಉತ್ತರ ಕರ್ನಾಟಕದಲ್ಲಿ ಗುಡುಗು-ಮಿಂಚಿನ ಅಬ್ಬರ:
ಉತ್ತರ ಕರ್ನಾಟಕದ ಬೀದರ, ಕಲಬುರಗಿ, ಯಾದಗಿರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಈ ಭಾಗದಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಿರುಸಾದ ಗಾಳಿ ಬೀಸಲಿದ್ದು, ಗುಡುಗು ಮತ್ತು ಮಿಂಚಿನ ಅಬ್ಬರವಿರಲಿದೆ.
ಧಾರವಾಡ, ಗದಗ, ಹಾವೇ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಮಾತ್ರ ಹಗುರವಾದ ತುಂತುರು ಮಳೆಯಾಗಬಹುದು. ಈ ಜಿಲ್ಲೆಗಳಲ್ಲಿ ಸೆಕೆ ಮತ್ತು ಉಷ್ಣಾಂಶದಿಂದ ಕೂಡಿದ ಹವಾಮಾನ ಇರಲಿದೆ ಎಂದು ತಿಳಿಸಲಾಗಿದೆ.
ಬೆಂಗಳೂರಿನಲ್ಲಿ ಹಗಲಿನ ವೇಳೆಯಲ್ಲಿ ಶೇ. 40 ರಷ್ಟು ಮಳೆಯಾಗುವ ಸಾಧ್ಯತೆಯಿದ್ದರೆ, ಸಂಜೆ ಮತ್ತು ರಾತ್ರಿಯ ವೇಳೆಗೆ ಇದು ಶೇ. 65 ಕ್ಕೆ ಏರಿಕೆಯಾಗಲಿದೆ. ನಗರದ ಹಲವೆಡೆ ಹಗುರವಾದ ಜಿಟಿಜಿಟಿ ಮಳೆಯಾಗಲಿದ್ದು, ಸಂಜೆಯ ವೇಳೆಗೆ ಎಂ.ಜಿ. ರಸ್ತೆ, ವೈಟ್ಫೀಲ್ಡ್, ಎಲೆಕ್ಟ್ರಾನಿಕ್ ಸಿಟಿ, ಜಯನಗರ ಮತ್ತು ಯಶವಂತಪುರ ಮುಂತಾದ ಪ್ರಮುಖ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನು ರಾತ್ರಿ ವೇಳೆಗೆ ತಂಪಾದ ಗಾಳಿ ಬೀಸಲಿದ್ದು, ತಾಪಮಾನದಲ್ಲಿ ಇಳಿಕೆಯಾಗಿ ಬೆಂಗಳೂರಿಗರಿಗೆ ಆಹ್ಲಾದಕರ ವಾತಾವರಣ ನಿರ್ಮಾಣವಾಗಲಿದೆ.



ನಿಮ್ಮ ಕಾಮೆಂಟ್ ಬರೆಯಿರಿ