
ಬೆಂಗಳೂರು : ಡೀಸೆಲ್ ದರ ಏರಿಕೆ ಹಿನ್ನೆಲೆಯಲ್ಲಿ ಬಸ್ ಪ್ರಯಾಣ ದರ ಹೆಚ್ಚಳ ಮಾಡಲು ಸಾರಿಗೆ ನಿಗಮಗಳು ಪ್ರಸ್ತಾವನೆ ಸಲ್ಲಿಸಿದ್ದು, ಸಾರ್ವಜನಿಕರ ಹಿತದೃಷ್ಟಿ ಮತ್ತು ಸಾರಿಗೆ ನಿಗಮಗಳು ಉಳಿಯಬೇಕು. ಇವೆರಡನ್ನೂ ಪರಿಗಣಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಾಸಗಿ ಹಾಗೂ ಸರಕಾರಿ ಸಾರಿಗೆ ನಿಗಮದ ಡಿಪೋಗಳಲ್ಲಿನ ಡೀಸೆಲ್ ಬೆಲೆಯಲ್ಲಿ ಸುಮಾರು 40 ರೂಪಾಯಿಯಷ್ಟು ವ್ಯತ್ಯಾಸವಿದೆ. ಈ ವ್ಯತ್ಯಾಸ ಗಾಬರಿಯಾಗುವಂತಹದ್ದು. ಈ ಬೆಲೆ ವ್ಯತ್ಯಾಸದಿಂದಾಗಿ ಖಾಸಗಿ ಸಾರಿಗೆ ಬಸ್‌ಗಳ ನಿರ್ವಾಹಕರು ಡಿಪೋ ಬಿಟ್ಟು, ಸಾರ್ವಜನಿಕ ಪೆಟ್ರೋಲ್ ಬಂಕ್‌ಗಳಿಂದ ಡೀಸೆಲ್ ಹಾಕಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ವರದಿ ಕೇಳಿದ್ದೇನೆ ಎಂದು ತಿಳಿಸಿದರು.

ಡೀಸೆಲ್ ಬೆಲೆ ಹೆಚ್ಚಾದರೆ ಟಿಕೆಟ್ ಬೆಲೆ ಹೆಚ್ಚಳ ಆಗಬೇಕು ಎಂದು ಈ ಹಿಂದೆ ತೀರ್ಮಾನ ಮಾಡಲಾಗಿತ್ತು. ಈ ಬಗ್ಗೆ ಮತ್ತೊಮ್ಮೆ ಪರಿಶೀಲನೆ ಮಾಡಬೇಕು. ದೇಶದಲ್ಲಿ ಇಂಧನ ಉಳಿತಾಯಕ್ಕಾಗಿ ಪ್ರಧಾನಿಯವರು ಸಾರ್ವಜನಿಕ ಸಾರಿಗೆ ಬಳಕೆ ಮಾಡುವಂತೆ ಕರೆ ನೀಡಿದ್ದನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರ ತೆಗೆದುಕೊಳ್ಳಲಾಗುವುದು. ಸಾರಿಗೆ ಸಂಸ್ಥೆಗಳು ಉಳಿಯಬೇಕು. ಜನರಿಗೂ ಅನುಕೂಲವಾಗಬೇಕು. ಜನರ ಹಿತ ದೃಷ್ಟಿಯಲ್ಲಿಟ್ಟುಕೊಂಡು ತೀರ್ಮಾನ ಮಾಡಲಾಗವುದು ಎಂದು ಹೇಳಿದರು.
620 ಹೊಸ ಬಸ್ ಖರೀದಿ
ಗ್ರಾಮೀಣ ಸಾರಿಗೆ ವ್ಯವಸ್ಥೆಗೆ ಬಲತುಂಬುವ ಕ್ರಮವಾಗಿ ಒಟ್ಟು 235 ಕೋಟಿ ರೂ. ವೆಚ್ಚದಲ್ಲಿ 620 ಹೊಸ ಬಸ್‌ಗಳನ್ನು ಖರೀದಿ ಮಾಡಲು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆ ನಿರ್ಧರಿಸಿತು. ಈ ಪೈಕಿ 220 ಹೊಸ ಬಸ್‌ಗಳನ್ನು ವಾಯುವ್ಯ ಸಾರಿಗೆ ಸಂಸ್ಥೆಗೆ ನೀಡಲಾಗುತ್ತಿದೆ. ಅಲ್ಲದೆ, ಪಿಎಂ ಇ-ಬಸ್ ಸೇವಾ ಯೋಜನೆಯಡಿ 112 ಕೋಟಿ ರೂ. ವೆಚ್ಚದಲ್ಲಿ ಕೆಎಸ್‌ಆರ್‌ಟಿಸಿ, ವಾಯುವ್ಯ ಸಾರಿಗೆ ಸಂಸ್ಥೆ ಮತ್ತು ಈಶಾನ್ಯ ಸಾರಿಗೆ ಸಂಸ್ಥೆ ಈ ಮೂರು ನಿಗಮಗಳ ವ್ಯಾಪ್ತಿಯ 10 ನಗರಗಳ ಒಟ್ಟು 11 ಸ್ಥಳಗಳಲ್ಲಿ ಎಲೆಕ್ಟ್ರಿಕ್ ಬಸ್ ಘಟಕಗಳನ್ನು ನಿರ್ಮಾಣ ಮಾಡುವ ಪ್ರಸ್ತಾವನೆಗೆ ಸಂಪುಟ ಅನುಮೋದನೆ ನೀಡಿದೆ ಎಂದರು.


ನಿಮ್ಮ ಕಾಮೆಂಟ್ ಬರೆಯಿರಿ