ಬೆಂಗಳೂರು: ಭಾರತ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯ ಪ್ರಕಾರ, ಜೂನ್ 24 ರಿಂದ ಜೂನ್ 29ರ ವರೆಗೆ ಕರ್ನಾಟಕದಾದ್ಯಂತ ಮುಂಗಾರು ಮಳೆ ತೀವ್ರಗೊಳ್ಳುವ ಸಾಧ್ಯತೆಯಿದೆ. ಪ್ರಮುಖವಾಗಿ ಈ ಅವಧಿಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಹಾಗೂ ಅತ್ಯಂತ ಭಾರಿ ಮಳೆಯ ಆರೆಂಜ್ ಅಲರ್ಟ್ ನೀಡಲಾಗಿದೆ. ಹಾಗೂ ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಲವಾದ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 4 ದಿನವೂ ಅತಿ ಭಾರಿ ಮಳೆಯ ಮುನ್ಸೂಚನೆ ಇದೆ. ಜೂನ್ 24 ರಂದು ಉಡುಪಿ, ಉತ್ತರ ಕನ್ನಡದಲ್ಲಿ ಅತಿ ಭಾರಿ ಮಳೆಯ ಮುನ್ಸೂಚನೆ ಇರುವುದರಿಂದ ಆರೆಂಜ್ ಅಲರ್ಟ್ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಬೇರೆ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಮಮ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.
ಜೂನ್ 25 ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಚುರುಕು ಪಡೆಯಲಿದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಜೂನ್ 25 ರಿಂದ 27 ರವರೆಗೂ ಅತಿ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ. ನಂತರ ಯೆಲ್ಲೋ ಅಲರ್ಟ್ ಮುಂದುವರಿಯಲಿದೆ. ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಿಗೆ ಜೂನ್ 25, 26 ಹಾಗೂ ಜೂನ್ 27 ಕ್ಕೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಕರಾವಳಿಗೆ ಹೊಂದಿಕೊಂಡಿರುವ ಮಲೆನಾಡು ಜಿಲ್ಲೆಗಳಾದ ಜೂನ್ 24 ಮತ್ತು 25 ರಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಬೆಂಗಳೂರಲ್ಲಿ ಹಗುರದಿಂದ ಮಧ್ಯಮವಾಗಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.


ನಿಮ್ಮ ಕಾಮೆಂಟ್ ಬರೆಯಿರಿ