ಬೆಂಗಳೂರು : ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಸೋಮವಾರ ಒಂದೇ ಕುಟುಂಬದ ಮೂವರು ಬರ್ಬರವಾಗಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಲಿವ್-ಇನ್ ರಿಲೇಷನ್‌ಶಿಪ್‌ಗೆ (Live In Relationship) ಪೋಷಕರು ವಿರೋಧ ವ್ಯಕ್ತಪಡಿಸಿದ ಕಾರಣ ಹಿರಿಯ ಮಗಳು ತನ್ನ ಪ್ರಿಯಕರನೊಂದಿಗೆ ಸೇರಿ ಹೆತ್ತ ತಂದೆ-ತಾಯಿ ಹಾಗೂ ತಂಗಿಯನ್ನೇ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿದ್ದಾಳೆ ಎಂದು ಆರೋಪಿಸಲಾಗಿದೆ.
ಮೃತರನ್ನು ಸೋಮಸುಂದರ (55), ಅವರ ಪತ್ನಿ ಮುತ್ತುಲಕ್ಷ್ಮಿ (48) ಮತ್ತು ಅವರ ಕಿರಿಯ ಪುತ್ರಿ ಸುಪ್ರಿಯಾ (20) ಎಂದು ಗುರುತಿಸಲಾಗಿದೆ. ಮೂವರನ್ನೂ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದ್ದು, ಈ ದಾರುಣ ಘಟನೆಯ ಬಳಿಕ ದಂಪತಿಯ ಹಿರಿಯ ಮಗಳು ಶ್ವೇತಾ ಹಾಗೂ ಆಕೆಯ ಪ್ರಿಯಕರ ತಲೆಮರೆಸಿಕೊಂಡಿದ್ದು, ಪೊಲೀಸರು ಇವರಿಗಾಗಿ ತೀವ್ರ ಹುಡುಕಾಟ ನಡೆಸಿದ್ದಾರೆ.
ಘಟನೆಯ ಹಿನ್ನೆಲೆ:
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಶ್ವೇತಾ ಮತ್ತು ಕೆನ್ನೆತ್ ಕಳೆದ ಎರಡು ತಿಂಗಳುಗಳಿಂದ ಸೀಗೇಹಳ್ಳಿಯ ಧಾಮ್ನಿಕಾ ಲೇಔಟ್‌ನಲ್ಲಿರುವ ‘ಸಾಯಿ ಗ್ರೀನ್ ಅಪಾರ್ಟ್‌ಮೆಂಟ್’ನ ಬಾಡಿಗೆ ಫ್ಲಾಟ್ ಒಂದರಲ್ಲಿ ಒಟ್ಟಿಗೆ ವಾಸಿಸುತ್ತಿದ್ದರು. ಆದರೆ, ಇವರ ಪ್ರೀತಿ ಮತ್ತು ಲಿವ್-ಇನ್ ಸಂಬಂಧಕ್ಕೆ ಶ್ವೇತಾ ಕುಟುಂಬದವರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಇದೇ ಕಾರಣಕ್ಕೆ ಕುಟುಂಬದಲ್ಲಿ ಆಗಾಗ್ಗೆ ಜಗಳಗಳು ನಡೆಯುತ್ತಿದ್ದವು ಎನ್ನಲಾಗಿದೆ.
ಮಗಳಿಗೆ ಬುದ್ಧಿವಾದ ಹೇಳಿ ಮನೆಗೆ ವಾಪಸ್ ಕರೆದುಕೊಂಡು ಹೋಗಲು ಸೋಮಸುಂದರ ಅವರು ಪತ್ನಿ ಮತ್ತು ಕಿರಿಯ ಮಗಳೊಂದಿಗೆ ಸಿಗೇಹಳ್ಳಿಯ ಡಾಮ್ನಿಕದ ಲೇಔಟ್‌ನಲ್ಲಿರುವ ‘ಸಾಯಿ ಗ್ರೀನ್ ಅಪಾರ್ಟ್‌ಮೆಂಟ್’ಗೆ ಭಾನುವಾರ ಸಂಜೆ ಬಂದಿದ್ದರು ಎನ್ನಲಾಗಿದೆ. ಈ ವೇಳೆ ಪೋಷಕರು ಹಾಗೂ ಶ್ವೇತಾ-ಕೆನತ್ ಜೋಡಿ ನಡುವೆ ತೀವ್ರ ಗಲಾಟೆ ನಡೆದಿದೆ. ಜಗಳ ವಿಕೋಪಕ್ಕೆ ಹೋದಾಗ, ಶ್ವೇತಾ ಮತ್ತು ಆಕೆಯ ಪ್ರಿಯಕರ ಸೇರಿ ಮೂವರಿಗೂ ಚಾಕುವಿನಿಂದ ಮನಬಂದಂತೆ ಇರಿದು ಕೊಲೆ ಮಾಡಿದ್ದಾರೆ ಎಂದು ಶಂಕಿಸಲಾಗಿದೆ.
ವರದಿ ಪ್ರಕಾರ, ತೀವ್ರವಾಗಿ ಗಾಯಗೊಂಡಿದ್ದ ತಂದೆ ಸೋಮಸುಂದರ ಹೇಗೋಮನೆಯಿಂದ ಹೊರಗೆ ಬಂದು ಅಪಾರ್ಟ್‌ಮೆಂಟ್‌ನ ಮೆಟ್ಟಿಲುಗಳ ಮೇಲೆ ರಕ್ತದ ಮಡುವಿನಲ್ಲಿ ಬಿದ್ದಿದ್ದಿದ್ದಾರೆ. ಇವರನ್ನು ನೋಡಿ ಸ್ಥಳೀಯರು ತಕ್ಷಣವೇ ‘ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಹೊಯ್ಸಳ ಸಿಬ್ಬಂದಿ ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದಾರೆ. ಆದರೆ ಆಸ್ಪತ್ರೆಗೆ ತಲುಪುವ ಮಾರ್ಗಮಧ್ಯೆ ತೀವ್ರ ರಕ್ತಸ್ರಾವದಿಂದ ಅವರು ಕೊನೆಯುಸಿರೆಳೆದಿದ್ದಾರೆ.
ತನಿಖೆ ಚುರುಕುಗೊಳಿಸಿದ ಪೊಲೀಸರು:
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಈಸ್ಟ್ ಪಾಯಿಂಟ್ ಆಸ್ಪತ್ರೆಗೆ ರವಾನಿಸಲಾಗಿದೆ. ಆರೋಪಿಗಳ ಪತ್ತೆಗಾಗಿ ಈಗಾಗಲೇ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪ್ರತ್ಯೇಕ ಪೊಲೀಸ್ ತಂಡಗಳನ್ನು ರಚಿಸಿ ತೀವ್ರ ಹುಡುಕಾಟ ಆರಂಭಿಸಲಾಗಿದೆ. ಆರೋಪಿಗಳ ಬಂಧನದ ನಂತರ ಹಾಗೂ ತನಿಖೆ ಮುಂದುವರಿದಂತೆ ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಸದ್ಯ ಕೊಲೆ ನಡೆಸಿ ಪರಾರಿಯಾಗಿರುವ ಪ್ರಿಯಕರ ಹಾಗೂ ಹಿರಿಯ ಮಗಳು ಶ್ವೇತಾ ಪತ್ತೆಗಾಗಿ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ