ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ ಅವರಿಗೆ ಸಂಬಂಧಿಸಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಬುಧವಾರ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.
ಬೆಳಗಾವಿ, ಬೆಂಗಳೂರು, ಮೈಸೂರು ಹಾಗೂ ಹಾಸನ ಜಿಲ್ಲೆಯ ಅರಸೀಕೆರೆ ಸೇರಿದಂತೆ ಒಟ್ಟು ಆರು ಕಡೆಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ. ಗೋವಾ ಮತ್ತು ಬೆಂಗಳೂರಿನ ಇ.ಡಿ ಅಧಿಕಾರಿಗಳ ವಿಶೇಷ ತಂಡಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದು, ಬುಧವಾರ ಬೆಳ್ಳ ಬೆಳಿಗ್ಗೆ ವಿವಿಧ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿವೆ ಎಂದು ತಿಳಿದುಬಂದಿದೆ. ಇವರು ಲೋಕೋಪಯೋಗಿಸಚಿವ ಬಾಮೈದ ಎಂದು ಹೇಳಲಾಗಿದೆ.
ಲಭ್ಯ ಮಾಹಿತಿಯ ಪ್ರಕಾರ, ಬೆಂಗಳೂರಿನಲ್ಲಿರುವ ವೈ. ಮಂಜುನಾಥ ಅವರ ಅಪಾರ್ಟ್ಮೆಂಟ್ ಮೇಲೆ ದಾಳಿ ನಡೆಸಿದ ಅಧಿಕಾರಿಗಳು, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ದಾಳಿಯ ಸಮಯದಲ್ಲಿ ವೈ. ಮಂಜುನಾಥ ಇದ್ದರು ಎನ್ನಲಾಗಿದೆ.
ಇದೇ ವೇಳೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಐನಾಪುರ ಗ್ರಾಮದಲ್ಲಿರುವ ಸ್ನೇಹಿತನ ನಿವಾಸ, ಮೈಸೂರಿನಲ್ಲಿರುವ ಅವರ ಆಪ್ತ ಸ್ನೇಹಿತೆಯ ನಿವಾಸ, ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿರುವ ಅವರ ಆಪ್ತನ ಮನೆ ಮೇಲೆಯೂ ಇ.ಡಿ ಅಧಿಕಾರಿಗಳು ಶೋಧ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ವೈ. ಮಂಜುನಾಥ್ ಅವರು ಸಚಿವ ಸತೀಶ ಜಾರಕಿಹೊಳಿ ಅವರ ಸಹೋದರಿಯ ಗಡನಾಗಿದ್ದು, ಬಳ್ಳಾರಿ ಜಿಲ್ಲೆಯ ಮಾಜಿ ಸಂಸದ ದೇವೇಂದ್ರಪ್ಪ ಅವರ ಪುತ್ರರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇದು ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಸದ್ಯ ಇ.ಡಿ ಅಧಿಕಾರಿಗಳದಾಖಲೆಗಳ ಪರಿಶೀಲನೆ ನಡೆಸಿದ್ದು, ಅದು ಪೂರ್ಣಗೊಂಡ ಬಳಿಕ ಮತ್ತಷ್ಟು ಮಹತ್ವದ ಮಾಹಿತಿಗಳು ಬಹಿರಂಗವಾಗುವ ನಿರೀಕ್ಷೆ ಇದೆ.


ನಿಮ್ಮ ಕಾಮೆಂಟ್ ಬರೆಯಿರಿ