ಬೆಂಗಳೂರು : ಮುಂಗಾರು ಮಳೆಯ ಕೊರತೆಯ ನಡುವೆ ಕರ್ನಾಟಕದಾದ್ಯಂತ ಮುಂದಿನ 7 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇತ್ತೀಚಿನ ಮುನ್ಸೂಚನೆಯ ಪ್ರಕಾರ, ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಮತ್ತು ಜೋರಾದ ಗಾಳಿಯೊಂದಿಗೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಜೂನ್ 30ರ ನಂತರ ರಾಜ್ಯದ ಹಲವೆಡೆ ಮಳೆಯ ತೀವ್ರತೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಹೇಳಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 7 ದಿನಗಳ ಕಾಲ ನಿರಂತರ ಮಳೆಯಾಗಲಿದ್ದು, ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.
ಜೂನ್ 27 ಮತ್ತು ಜೂನ್ 28, 29, 30ರವರೆಗೆ ಭಾರಿ ಮಳೆಯಾಗಲಿದ್ದು, ಜೊತೆಗೆ ಗುಡುಗು, ಸಿಡಿಲು ಹಾಗೂ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಜುಲೈ 1 ರಿಂದ ಜುಲೈ 3ರವರೆಗೂ ಸತತವಾಗಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಜೂನ್ ಕೊನೆಯ ವಾರ ಹಾಗೂ ಜುಲೈ ಮೊದಲ ವಾರದಲ್ಲಿ ಮಳೆ ಹೆಚ್ಚಾಗಲಿದೆ. ಜೂನ್ 28 ಹಾಗೂ 29ರಂದು ಗುಡುಗು ಹಾಗೂ ಸಿಡಿಲಿನ ಮುನ್ಸೂಚನೆ (ಗ್ರೀನ್ ಅಲರ್ಟ್) ನೀಡಲಾಗಿದೆ. ಜೂನ್ 30 ರಿಂದ ಜುಲೈ 3ರವರೆಗೆ ದಕ್ಷಿಣ ಒಳನಾಡಿನ ಹಲವೆಡೆ ಮಳೆಯ ತೀವ್ರತೆ ಹೆಚ್ಚಾಗಲಿದ್ದು, ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ. ಈ ವೇಳೆ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.


ನಿಮ್ಮ ಕಾಮೆಂಟ್ ಬರೆಯಿರಿ