ಮಂಗಳೂರು : ನಗರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ನಾಗುರಿ ಪ್ರದೇಶದಲ್ಲಿ ಮನೆಯೊಂದರ ಮೇಲೆ ಗುಡ್ಡ ಕುಸಿದು ಬಿದ್ದು ಇಬ್ಬರು ಬಾಲಕಿಯರು ಸೇರಿದಂತೆ ಮೂವರು ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಭೂಕುಸಿತ ಉಂಟಾದ ಪರಿಣಾಮ ಮಣ್ಣು ಕುಸಿದು ಮನೆ ಮೇಲೆ ಬಿದ್ದಿದೆ. ಪರಿಣಾಮ ಮನೆಯಲ್ಲಿದ್ದ ಆರು ಜನ ಮಣ್ಣಿನಡಿ ಸಿಲುಕಿಕೊಂಡಿದ್ದರು. ಈ ಪೈಕಿ ಓರ್ವ ಪುರುಷ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ರಕ್ಷಣೆ ಮಾಡಲಾಗಿದೆ. ಇನ್ನುಳಿದಂತೆ ಓರ್ವ ಮಹಿಳೆ ಹಾಗೂ ಇಬ್ಬರು ಹೆಣ್ಣು ಮಕ್ಕಳು ಮೃತಪಟ್ಟಿದ್ದಾರೆ.
ಗರೋಡಿಯ ಮಾರಿಯಲ್ ಹೌಸ್‌ನಲ್ಲಿ ಬುಧವಾರ ಬೆಳಿಗ್ಗೆ 5ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎನ್ನಲಾಗಿದ್ದು, ನಿರಂತರ ಮಳೆಯಿಂದಾಗಿ ಕಾಂಪೌಂಡ್ ಗೋಡೆ ಕುಸಿದು ಬಿದ್ದಿದೆ. ನಾಲ್ಕು ಕುಟುಂಬಗಳು ಕಾಂಪೌಂಡ್ ಗೋಡೆಯ ಕೆಳಗೆ ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿದ್ದರು ಎಂದು ಹೇಳಲಾಗಿದೆ.
ಈ ದುರ್ಘಟನೆಯಲ್ಲಿ ಮೃತಪಟ್ಟವರನ್ನು ಅನಾಮಿಕ ಚೌರಾಸಿಯಾ (8), ಪರಿ(3) ಶಾಂತ, (46 ) ಎಂದು ಗುರುತಿಸಲಾಗಿದೆ. ಬಿಹಾರ ಮೂಲದ ಕುಟುಂಬ ಕಳೆದ ಎಂಟು ವರ್ಷಗಳಿಂದ ನಾಲ್ವರು ಹೆಣ್ಣು ಮಕ್ಕಳಿರುವ ಕುಟುಂಬದವರು ವಾಸವಿದ್ದಾರೆ. ಘಟನೆಯಲ್ಲಿ ಕುಟುಂಬದ ಇಬ್ಬರು ಹೆಣ್ಣು ಮಕ್ಕಳನ್ನು ರಕ್ಷಿಸಲಾಗಿದೆ. ಆದರೆ, ಅನಾಮಿಕಾ ಮತ್ತು ಪರಿ ಅವಶೇಷಗಳ ಅಡಿಯಲ್ಲಿ ಸಿಲುಕಿ ಮೃತಪಟ್ಟಿದ್ದಾರೆ.
ಮತ್ತೊಂದು ಬಾಡಿಗೆ ಮನೆಯಲ್ಲಿ ಕಳೆದ 20 ವರ್ಷಗಳಿಂದ ವಾಸಿಸುತ್ತಿರುವ ಬಿಹಾರ ಮೂಲದ ಬಾಲಕೃಷ್ಣ (48) ಅವರನ್ನು ರಕ್ಷಿಸಲಾಗಿದೆ. ಆದರೆ ಅವರ ಪತ್ನಿ ಶಾಂತಾ (46) ಅವಶೇಷಗಳ ಅಡಿಯಲ್ಲಿ ಸಿಲುಕಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯ ಪೊಲೀಸರು, ಅಗ್ನಿಶಾಮಕ ದಳ ಮತ್ತು ಎನ್.ಡಿ.ಆರ್.ಎಫ್ ಸಿಬ್ಬಂದಿ ಜಂಟಿಯಾಗಿ ಅತ್ಯಂತ ವೇಗವಾಗಿ ಕಾರ್ಯಾಚರಣೆ ನಡೆಸಿದರು.


ನಿಮ್ಮ ಕಾಮೆಂಟ್ ಬರೆಯಿರಿ