ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪಟ್ಟಣದ ರಾಮತೀರ್ಥ ತಿರುವಿನ ಸಮೀಪ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಗುಡ್ಡ ಕುಸಿತ ಸಂಭವಿಸಿದೆ. ಕಳೆದ ಎರಡು ದಿನಗಳಿಂದ ತಾಲೂಕಿನಾದ್ಯಂತ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಹೆದ್ದಾರಿ ಪಕ್ಕದಲ್ಲಿದ್ದ ಗುಡ್ಡದ ಮಣ್ಣು ಸಡಿಲಗೊಂಡು ಗುರುವಾರ ರಸ್ತೆಯ ಮೇಲೆ ಕುಸಿದು ಬಿದ್ದಿದೆ ಎಂದು ವರದಿಯಾಗಿದೆ.
ಅದೃಷ್ಟವಶಾತ್ ಆ ಸಂದರ್ಭದಲ್ಲಿ ಯಾವುದೇ ವಾಹನ ಸಂಚಾರ ಮಾಡದ ಕಾರಣ ಸಂಭವನೀಯ ಅವಘಡ ತಪ್ಪಿದೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದ ಗುಡ್ಡದ ಮಣ್ಣು ಸಡಿಲಗೊಂಡಿದ್ದರಿಂದ ಅದು ಕುಸಿದು ಬಿದ್ದಿದೆ. ಮಣ್ಣು ರಸ್ತೆಗೆ ಬಿದ್ದ ಹಿನ್ನೆಲೆಯಲ್ಲಿ ಹೆದ್ದಾರಿಯ ಒಂದು ಬದಿಯಲ್ಲಿ ವಾಹನ ಸಂಚಾರ ಕೆಲಕಾಲ ಸ್ಥಗಿತಗೊಂಡಿತ್ತು. ಹೆದ್ದಾರಿ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಯಂತ್ರಗಳ ಸಹಾಯದಿಂದ ಮಣ್ಣನ್ನು ತೆರವುಗೊಳಿಸಿ ಸಂಚಾರವನ್ನು ಪುನಃ ಆರಂಭಿಸಿದರು.
ಮಳೆ ಮಾತ್ರವಲ್ಲದೆ, ಹೆದ್ದಾರಿ ಅಗಲೀಕರಣ ಕಾಮಗಾರಿ ವೇಳೆ ಗುಡ್ಡವನ್ನು ಅವೈಜ್ಞಾನಿಕವಾಗಿ ಕತ್ತರಿಸಿರುವುದರಿಂದಲೂ ಇಂತಹ ಘಟನೆಗಳು ನಡೆಯುತ್ತಿವೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ