ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಬೆಚ್ಚಿಬೀಳಿಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಜಿಲ್ಲೆಯ ಹೊನ್ನಾವರ ತಾಲೂಕಿನ ಮಂಕಿ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ಅಭಿನಂದನ ಅವರನ್ನು ಪೋಕ್ಸೊ (POCSO) ಕಾಯ್ದೆಯಡಿ ಭಟ್ಕಳ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಅಪ್ರಾಪ್ತ ಬಾಲಕಿಗೆ ಪಿಎಸ್ಐ ಅಭಿನಂದನ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಸಂತ್ರಸ್ತೆ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ಪೊಲೀಸರು ಪೋಕ್ಸೊ ಕಾಯ್ದೆ ಸೇರಿದಂತೆ ಸಂಬಂಧಿತ ಕಾನೂನು ವಿಧಿಗಳಡಿ ಪ್ರಕರಣ ದಾಖಲಿಸಿಕೊಂಡ ನಂತರ ಈ ಬೆಳವಣಿಗೆಯಾಗಿದೆ ಎಂದು ಹೇಳಲಾಗಿದೆ.
ದೂರು ದಾಖಲಾಗುತ್ತಿದ್ದಂತೆಯೇ ಭಟ್ಕಳ ನಗರ ಠಾಣೆ ಪೊಲೀಸರು ತನಿಖೆ ಆರಂಭಿಸಿ, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಬಳಿಕ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗಟ್ಟಲು ಜಾರಿಯಲ್ಲಿರುವ ಪೋಕ್ಸೊ (POCSO) ಕಾಯ್ದೆ ಅಡಿಯಲ್ಲಿ ದಾಖಲಾಗುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗುತ್ತದೆ. ಪೊಲೀಸರು ತನಿಖೆ ಮುಂದುವರಿಸಿದ್ದು, ಆರೋಪದ ಕುರಿತು ಹೆಚ್ಚಿನ ಮಾಹಿತಿ ಹಾಗೂ ಸಾಕ್ಷ್ಯಗಳನ್ನು ಸಂಗ್ರಹಿಸುವ ಕಾರ್ಯ ನಡೆಯುತ್ತಿದೆ.


ನಿಮ್ಮ ಕಾಮೆಂಟ್ ಬರೆಯಿರಿ