ನವದೆಹಲಿ : ದೆಹಲಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ನೇತೃತ್ವದಲ್ಲಿ ಅಡಕೆ ಸಾಗಣೆ ಸಮಸ್ಯೆ ಕುರಿತು ಚರ್ಚಿಸಲು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಜೊತೆ ಮಹತ್ವದ ಸಭೆ ನಡೆಯಿತು.
ಸಭೆಯಲ್ಲಿ ಅಡಕೆ ಟಾಸ್ಕ್ ಪೋರ್ಸ್ ಅಧ್ಯಕ್ಷರಾದ ಅರಗ ಜ್ಞಾನೇಂದ್ರ, ಸಂಸದರಾದ ಕ್ಯಾಪ್ಟನ್ ಬ್ರಿಜೇಶ ಚೌಟ, ಬಿ. ವೈ. ರಾಘವೇಂದ್ರ, ಕೋಟ ಶ್ರೀನಿವಾಸ ಪೂಜಾರಿ ಸೇರಿದಂತೆ ರಾಜ್ಯದ ಪ್ರಮುಖ ಅಡಕೆ ಬೆಳೆಯುವ ಸಹಕಾರಿ ಸಂಘಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು.
ಇತ್ತೀಚೆಗೆ ಮಹಾರಾಷ್ಟ್ರದಲ್ಲಿ ಅಡಕೆ ಲಾರಿಗಳನ್ನು ತಡೆಹಿಡಿದಿರುವುದರಿಂದ ಲಕ್ಷಾಂತರ ಅಡಕೆ ಬೆಳೆಗಾರರು, ಸಹಕಾರಿ ಸಂಸ್ಥೆಗಳು ಹಾಗೂ ವ್ಯಾಪಾರಿಗಳಿಗೆ ಉಂಟಾಗಿರುವ ಸಂಕಷ್ಟದ ಪರಿಸ್ಥಿತಿಯ ಸಂಪೂರ್ಣ ಘಟನೆಯ ವಿವರವನ್ನು ಈ ಸಭೆಯು ಮಹಾರಾಷ್ಟ್ರದ ಮುಖ್ಯಮಂತ್ರಿಗಳ ಗಮನಕ್ಕೆ ತಂದಿತು.
ವಿಷಯದ ಗಂಭೀರತೆ ಅರಿತ ಮಹಾರಾಷ್ಟ್ರದ ಮುಖ್ಯಮಂತ್ರಿ ಫಡ್ನವೀಸ್ ಅವರು, ಮುಂಬರುವ ದಿನಗಳಲ್ಲಿ ಸೂಕ್ತ ದಾಖಲೆಗಳಿರುವ ಅಡಕೆ ಸಾಗಣೆಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಅಡಕೆ ಬೆಳೆ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಲಕ್ಷಾಂತರ ರೈತ ಕುಟುಂಬಗಳ ಜೀವನಾಧಾರವಾಗಿದ್ದು, ಅಡಕೆ ಬೆಳೆಗಾರರ ಹಿತಾಸಕ್ತಿಯ ರಕ್ಷಣೆಗಾಗಿ ನಮ್ಮ ಪ್ರಯತ್ನಗಳು ನಿರಂತರವಾಗಿ ಮುಂದುವರೆಯಲಿದೆ ಎಂದು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ