ಯಲ್ಲಾಪುರ : ಕ್ರೂಸರ್-ಲಾರಿ ಮುಖಾಮುಖಿ ಡಿಕ್ಕಿ, 6 ಮಂದಿ ಸಾವು

ಕಾರವಾರ : ಭೀಕರ ರಸ್ತೆ ಅಪಘಾತ ಸ್ಥಳದಲ್ಲೇ ಆರು ಮಂದಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದ ಬಳಗಾರ ಸಮೀಪ ಅಂಕೋಲಾ–ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಗುರುವಾರ ಬೆಳಗಿನ ಜಾವ ಸಂಭವಿಸಿದೆ ಎಂದು ವರದಿಯಾಗಿದೆ.
ಪ್ರವಾಸಿಗರಿದ್ದ ತೂಫಾನ್ ಕ್ರೂಸರ್ ಮತ್ತು ಲಾರಿಯ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.
ಅಪಘಾತದ ತೀವ್ರತೆ ಎಷ್ಟಿತ್ತೆಂದರೆ ತೂಫಾನ್ ವಾಹನ ಸಂಪೂರ್ಣವಾಗಿ ನುಜ್ಜುಗುಜ್ಜಾಗಿತ್ತು. ವಾಹನದೊಳಗೆ ಸಿಲುಕಿದ್ದವರನ್ನು ಹೊರತೆಗೆದುಕೊಳ್ಳಲು ರಕ್ಷಣಾ ಕಾರ್ಯಾಚರಣೆ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು. ಚಾಲಕ ಸೇರಿ ಒಟ್ಟು ಒಂಬತ್ತು ಮಂದಿ ವಾಹನದಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.

ಮೃತರನ್ನು ವಾಹನದ ಚಾಲಕ ಸಂಜಯ ಅಂಗಡಿ, ಬಸಪ್ಪ, ಅಭಿಷೇಕ ಈಶ್ವರ, ಅಕ್ಷಯ, ಅಭಿಷೇಕ ಹಾಗೂ ಮಂಜುನಾಥ ಚುಳಕಿ ಎಂದು ಗುರುತಿಸಲಾಗಿದೆ.ಮತ್ತೊಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಯಗೊಂಡ ಶಿವರಾಜ ದುರ್ಗಪ್ಪ ಮಡಿವಾಳ, ಚನ್ನಬಸು ಹಾಗೂ ಸಚಿನ್‌ ಎಂಬವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರೆಲ್ಲರೂ ಧಾರವಾಡ ಮೂಲದವರಾಗಿದ್ದು, ಸ್ವಿಗ್ಗಿ ಸಂಸ್ಥೆಯಲ್ಲಿ ಪಾರ್ಟ್‌ಟೈಮ್ ಕೆಲಸ ಮಾಡುತ್ತಿದ್ದವರು ಎನ್ನಲಾಗಿದೆ. ಗೆಳೆಯರ ಗುಂಪು ಧರ್ಮಸ್ಥಳ ಹಾಗೂ ಮಂಗಳೂರು ಕಡೆ ಪ್ರವಾಸಕ್ಕೆ ಹೊರಟಿದ್ದ ವೇಳೆ ಅರಬೈಲ್ ಘಟ್ಟದ ತಿರುವಿನಲ್ಲಿ ಎದುರಿನಿಂದ ಬಂದ ಲಾರಿ ಅವರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.
ಘಟನಾ ಸ್ಥಳಕ್ಕೆ ಯಲ್ಲಾಪುರ ಠಾಣೆ ಪೊಲೀಸರು ಹಾಗೂ ಹೆದ್ದಾರಿ ಗಸ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಸಂಬಂಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಮುಖ ಸುದ್ದಿ :-   ಶಿರಸಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ʼಮಾಧ್ಯಮ ಶ್ರೀʼ ಪ್ರಶಸ್ತಿಗೆ ಪತ್ರಕರ್ತ ರವಿ ನಾಯ್ಕ ಆಯ್ಕೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement