ಬಿಜೆಪಿ ಹಿರಿಯ ನಾಯಕ-ಮಾಜಿ ಸಚಿವ ರಾಮಚಂದ್ರೇಗೌಡ ನಿಧನ

ಬೆಂಗಳೂರು: ಕರ್ನಾಟಕದ ಬಿಜೆಪಿಯ (BJP) ಹಿರಿಯ ನಾಯಕ ಹಾಗೂ ಮಾಜಿ ಸಚಿವ ರಾಮಚಂದ್ರೇಗೌಡ (88) ಅವರು ಇಂದು, ಮಂಗಳವಾರ (ಜುಲೈ 14) ಮುಂಜಾನೆ ನಿಧನರಾಗಿದ್ದಾರೆ.
ಕಳೆದ ಒಂದು ತಿಂಗಳಿನಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರಾಮಚಂದ್ರೇಗೌಡ (Ramachandre Gowda) ಅವರು ರಾಜಾಜಿನಗರದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.
ಕರ್ನಾಟಕದಲ್ಲಿ ಬಿಜೆಪಿ ಪಕ್ಷವನ್ನು ತಳಮಟ್ಟದಿಂದ ಕಟ್ಟಿ ಬೆಳೆಸುವಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (Yediyurappa) ಅವರಿಗೆ ಹೆಗಲಿಗೆ ಹೆಗಲು ಕೊಟ್ಟಿದ್ದ ಪ್ರಮುಖ ನಾಯಕರಲ್ಲಿ ರಾಮಚಂದ್ರೇಗೌಡರು ಒಬ್ಬರಾಗಿದ್ದರು. ಪಕ್ಷದ ಆರಂಭದ ದಿನಗಳಿಂದಲೂ ಸಂಘಟನೆಯಲ್ಲಿ ಸಕ್ರಿಯವಾಗಿದ್ದುಕೊಂಡು ಪಕ್ಷ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ರಾಮಚಂದ್ರೇಗೌಡರು 1938ರ ಡಿಸೆಂಬರ್ 13ರಂದು ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ಜನಿಸಿದರು. ಅವರು ಇಂಜಿನಿಯರಿಂಗ್ ಪದವೀಧರರಾಗಿದ್ದರು.

1953ರಲ್ಲಿ ಆರ್‌ಎಸ್‌ಎಸ್‌ ಸೇರುವ ಮೂಲಕ ತಮ್ಮ ಸಾರ್ವಜನಿಕ ಜೀವನ ಆರಂಭಿಸಿದ ಅವರು 1970ರಲ್ಲಿ ಬೆಂಗಳೂರು ನಗರ ಪಾಲಿಕೆಗೆ ಜನಸಂಘದ ಮೊದಲ ಕಾರ್ಪೊರೇಟರ್ ಆಗಿ ಆಯ್ಕೆಯಾಗಿದ್ದರು. ವಿಧಾನ ಮಂಡಳದ ಮೇಲ್ಮನೆಯ ಅತ್ಯಂತ ಪ್ರಭಾವಿ ನಾಯಕರಾಗಿದ್ದ ಇವರು, ಸತತವಾಗಿ ಬೆಂಗಳೂರು ಪದವೀಧರ ಕ್ಷೇತ್ರದಿಂದ ಐದು ಬಾರಿ ವಿಧಾನ ಪರಿಷತ್ (MLC) ಸದಸ್ಯರಾಗಿ ಆಯ್ಕೆಯಾಗಿದ್ದರು. ಅವರು ಸಚಿವರಾಗಿ ಉನ್ನತ ಶಿಕ್ಷಣ, ವೈದ್ಯಕೀಯ ಶಿಕ್ಷಣ, ರೇಷ್ಮೆ ಕೃಷಿ, ವಿಜ್ಞಾನ ಮತ್ತು ತಂತ್ರಜ್ಞಾನ, ಸಣ್ಣ ಉಳಿತಾಯ ಮತ್ತು ಗಣಿಗಾರಿಕೆ ಮತ್ತು ಭೂವಿಜ್ಞಾನ ಸೇರಿದಂತೆ ವಿವಿಧ ಖಾತೆಗಳನ್ನು ನಿರ್ವಹಿಸಿದ್ದರು. ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಬಿಜೆಪಿ-ಜನತಾದಳ (ಜಾತ್ಯತೀತ) ಅಂದಿನ ಸಮ್ಮಿಶ್ರ ಸರ್ಕಾರದಲ್ಲಿ ಸಣ್ಣ ಉಳಿತಾಯ, ಗಣಿಗಾರಿಕೆ ಮತ್ತು ಭೂವಿಜ್ಞಾನ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನದಂತಹ ಖಾಎತಗಳ ಸಚಿವರಾಗಿ ಕಾರ್ಯನಿರ್ವಹಿಸಿದರು. ನಂತರ, ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ, ಅವರು ವೈದ್ಯಕೀಯ ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದರು.

ಪ್ರಮುಖ ಸುದ್ದಿ :-   ಕರ್ನಾಟಕದ ಮುಜರಾಯಿ ದೇವಾಲಯಗಳ ಹುಂಡಿ ಹಣದ ಸುರಕ್ಷತೆಗೆ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

ಅವರು ಸಚಿವರಾಗಿದ್ದಾಗ ಕರ್ನಾಟಕವು ಲಾಟರಿಗಳ ಮೇಲೆ ನಿಷೇಧ ಹೇರಲು ಅವರು ಪ್ರಮುಖ ಪಾತ್ರ ವಹಿಸಿದ್ದರು. ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರದಲ್ಲಿ ವೈದ್ಯಕೀಯ ಶಿಕ್ಷಣ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. 2010 ರಲ್ಲಿ ವೈದ್ಯಕೀಯ ಕಾಲೇಜುಗಳ ನೇಮಕಾತಿ ಹಗರಣ ಕೇಳಿಬಂದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೆ ಕಾನೂನು ಹೋರಾಟದ ನಂತರ ಹೈಕೋರ್ಟ್ ಈ ಪ್ರಕರಣದಲ್ಲಿ ಅವರಿಗೆ ಸಂಪೂರ್ಣ ಕ್ಲೀನ್ ಚಿಟ್ ನೀಡಿ ದೋಷಮುಕ್ತಗೊಳಿಸಿತ್ತು. ಇದರ ನಂತರ, ಅವರನ್ನು ಕರ್ನಾಟಕ ರಾಜ್ಯ ಯೋಜನಾ ಮಂಡಳಿಯ ಉಪಾಧ್ಯಕ್ಷರನ್ನಾಗಿ ನೇಮಿಸಲಾಯಿತು, ಅಲ್ಲಿ ಅವರು ಸಾರ್ವಜನಿಕ ಆಡಳಿತಕ್ಕೆ ಕೊಡುಗೆ ನೀಡುವುದನ್ನು ಮುಂದುವರೆಸಿದರು.
ಸುಮಾರು ಐದು ದಶಕಗಳ ಕಾಲ ಸಕ್ರಿಯ ರಾಜಕೀಯದಲ್ಲಿದ್ದ ರಾಮಚಂದ್ರೇಗೌಡರು ವಯೋಸಹಜ ಕಾರಣಗಳಿಂದ 2018 ರಲ್ಲಿ ಸಕ್ರಿಯ ರಾಜಕಾರಣದಿಂದ ನಿವೃತ್ತಿ ಘೋಷಿಸಿದ್ದರು.

ಪ್ರಮುಖ ಸುದ್ದಿ :-   ಪೋಕ್ಸೋ ಪ್ರಕರಣ: ವಚನಾನಂದ ಶ್ರೀಗಳಿಗೆ ಜಾಮೀನು ಮಂಜೂರು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement