ಬೆಂಗಳೂರು: ನೀಟ್ (NEET) ವಿಚಾರದಲ್ಲಿ ರಾಜಕೀಯ ಮಾಡುತ್ತಿರುವ ಕಾಂಗ್ರೆಸ್ ರಾಜ್ಯದ ಪ್ರಮುಖ ಸಮಸ್ಯೆಗಳನ್ನು ನಿರ್ಲಕ್ಷಿಸುತ್ತಿದೆ ಎಂದು ಆರೋಪಿಸಿ ಕೆಪಿಸಿಸಿ (KPCC) ಕಚೇರಿಯತ್ತ ಮೆರವಣಿಗೆ ನಡೆಸಿದ ಕರ್ನಾಟಕದ ಬಿಜೆಪಿ ನಾಯಕರನ್ನು ಬುಧವಾರ ಪೊಲೀಸರು ವಶಕ್ಕೆ ಪಡೆದರು.
ಬೆಂಗಳೂರಿನ ಕಂಟೋನ್ಮೆಂಟ್ ಹಾಗೂ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ರಾಜ್ಯ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ನಾಯಕರ ಪ್ರತಿಭಟನೆ ವೇಳೆ ಕೆಪಿಸಿಸಿ ಕಚೇರಿ ಮುಂದೆ ಬಂದ ದಾವಣಗೆರೆ ಜಿಲ್ಲೆಯ ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಬಿ.ಪಿ. ಹರೀಶ ಅವ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದರು.
ಕೆಪಿಸಿಸಿ ಕಚೇರಿ ಮುತ್ತಿಗೆಗೆ ನಿರ್ಧರಿಸಿದ್ದ ಬಿಜೆಪಿ ನಾಯಕರನ್ನು ಪೊಲೀಸರು ಕಂಟೋನ್ಮೆಂಟ್ ಪ್ರದೇಶದ ಬಳಿಯೇ ತಡೆದು ವಶಕ್ಕೆ ಪಡೆದಿದ್ದರು. ಆದರೆ, ಶಾಸಕ ಬಿ.ಪಿ. ಹರೀಶ ಅವರು ನೇರವಾಗಿ ಕೆಪಿಸಿಸಿ ಕಚೇರಿಯ ಮುಂಭಾಗಕ್ಕೇ ಆಗಮಿಸಿದ್ದರು. ಶಾಸಕರು ಕಾರಿನಿಂದ ಇಳಿಯುತ್ತಿದ್ದಂತೆ ಕಚೇರಿಯಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರು ಅವರ ವಿರುದ್ಧ ಬೃಹತ್ ಪ್ರಮಾಣದಲ್ಲಿ ಧಿಕ್ಕಾರ ಕೂಗಿ ಅವರತ್ತ ಮೊಟ್ಟೆ ಎಸೆದಿದ್ದಾರೆ ಎಂದು ಹೇಳಲಾಗಿದೆ. ಬಳಿಕ ಪೊಲೀಸರು ಹರೀಶ ಅವರನ್ನು ಅಲ್ಲಿಂದ ಸುರಕ್ಷಿತವಾಗಿ ಕರೆದೊಯ್ದರು.
ಇನ್ನೊಂದೆಡೆ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ ಹಾಗೂ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಬಿಜೆಪಿ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ವಿಧಾನಸೌಧದಿಂದ ಕೆಪಿಸಿಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಆದರೆ ಕ್ಯಾಂಟೋನ್ಮೆಂಟ್ ಪ್ರದೇಶದ ಸಮೀಪ ಪೊಲೀಸರು ಮೆರವಣಿಗೆಯನ್ನು ತಡೆದು ಬಿಜೆಪಿ ನಾಯಕರನ್ನು ವಶಕ್ಕೆ ಪಡೆದರು.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್. ಅಶೋಕ ಅವರು, ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ಧ ಬಿಜೆಪಿ ಕೆಪಿಸಿಸಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದೆ ಎಂದು ಹೇಳಿದರು. ನೀಟ್ ವಿಚಾರದಲ್ಲಿ ಕಾಂಗ್ರೆಸ್ “ರಾಜಕೀಯ ನಾಟಕ” ಮಾಡುತ್ತಿದ್ದು, ಕರ್ನಾಟಕದ ಗಂಭೀರ ಸಮಸ್ಯೆಗಳತ್ತ ಗಮನ ಹರಿಸುತ್ತಿಲ್ಲ ಎಂದು ಅವರು ಆರೋಪಿಸಿದರು.
ಕಾಂಗ್ರೆಸ್ ನಾಯಕತ್ವವು ರಾಜ್ಯದ ಸಮಸ್ಯೆಗಳನ್ನು ಪರಿಹರಿಸುವ ಬದಲು ದೆಹಲಿಯಲ್ಲಿನ ಪ್ರತಿಭಟನೆಗಳತ್ತ ಗಮನ ಹರಿಸಿದೆ ಎಂದು ಟೀಕಿಸಿದ ಅವರು, ಕರ್ನಾಟಕದ ಬಹುತೇಕ ಭಾಗಗಳು ತೀವ್ರ ಬರಗಾಲದ ಸಂಕಷ್ಟ ಎದುರಿಸುತ್ತಿದ್ದರೂ ರಾಜ್ಯ ಸರ್ಕಾರ ಸಮರ್ಪಕವಾಗಿ ಸ್ಪಂದಿಸಿಲ್ಲ ಎಂದು ಅವರು ದೂರಿದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಸಚಿವರು ಹಾಗೂ ಕಾಂಗ್ರೆಸ್ ಶಾಸಕರು ರಾಜ್ಯದ ಸಮಸ್ಯೆಗಳಿಗಿಂತ ದೆಹಲಿಯ ರಾಜಕೀಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಆರೋಪಿಸಿದ ಅವರು, “ರಾಜ್ಯದ ಬಹುತೇಕ ಭಾಗ ಬರಪೀಡಿತವಾಗಿದೆ. ಈಗಾಗಲೇ 175 ತಾಲೂಕುಗಳು ಬರದಿಂದ ತತ್ತರಿಸಿವೆ. ಕೆಲವೇ ಜಿಲ್ಲೆಗಳು ಮಾತ್ರ ಪರಿಣಾಮದಿಂದ ಹೊರಗಿವೆ. ಆದರೆ ಕರ್ನಾಟಕದಲ್ಲಿ ಸರ್ಕಾರವೇ ಇಲ್ಲದಂತಾಗಿದೆ. ಸರ್ಕಾರ ತಕ್ಷಣವೇ ಬರ ಘೋಷಣೆ ಮಾಡಬೇಕು. ಪ್ರತಿಯೊಂದು ವಿಧಾನಸಭಾ ಕ್ಷೇತ್ರ ಹಾಗೂ ತಾಲೂಕಿಗೆ ಕುಡಿಯುವ ನೀರಿನ ಕಾಮಗಾರಿಗಳಿಗಾಗಿ ತಲಾ 20 ಕೋಟಿ ರೂ. ಅನುದಾನ ಬಿಡುಗಡೆ ಮಾಡಬೇಕು” ಎಂದು ಆಗ್ರಹಿಸಿದರು.
ಅಲ್ಲದೆ, ಬರ ಪರಿಸ್ಥಿತಿಯನ್ನು ಸಮರೋಪಾದಿಯಲ್ಲಿ ನಿಭಾಯಿಸಲು ತಾಲೂಕು ಮಟ್ಟದಲ್ಲಿ ಬರ ನಿರ್ವಹಣಾ ಕಾರ್ಯಪಡೆಗಳನ್ನು ರಚಿಸಬೇಕೆಂದು ಅವರು ಒತ್ತಾಯಿಸಿದರು.
ದೆಹಲಿಯಲ್ಲಿ ನೀಟ್ ವಿಚಾರವಾಗಿ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆಗಳ ಕುರಿತು ಮಾತನಾಡಿದ ಅಶೋಕ, ರಾಜಕೀಯ ಲಾಭ ಪಡೆಯುವ ಉದ್ದೇಶದಿಂದಲೇ ಕಾಂಗ್ರೆಸ್ ಈ ಹೋರಾಟ ನಡೆಸುತ್ತಿದೆ ಎಂದು ಆರೋಪಿಸಿದರು.
“ಪ್ರಧಾನಮಂತ್ರಿ ಕಚೇರಿ ಸಮೀಪದ ನಿರ್ಬಂಧಿತ ಪ್ರದೇಶದಲ್ಲಿ ಕಾಂಗ್ರೆಸ್ ನೀಟ್ ವಿಚಾರವಾಗಿ ಪ್ರತಿಭಟನೆ ನಡೆಸುತ್ತಿದೆ. ಇದು ಸಂಪೂರ್ಣ ರಾಜಕೀಯ ಪ್ರೇರಿತ ಪ್ರತಿಭಟನೆ. ರಾಹುಲ್ ಗಾಂಧಿಗೆ ಈ ಪ್ರತಿಭಟನೆಗಳಲ್ಲಿ ಭಾಗವಹಿಸಲು ಸಮಯ ಇದೆ. ಆದರೆ ಬೆಂಗಳೂರಿನಲ್ಲಿ ಆರ್ಸಿಬಿ ಸಂಭ್ರಮಾಚರಣೆ ವೇಳೆ ಮೃತಪಟ್ಟ 11 ಅಮಾಯಕರ ಬಗ್ಗೆ ಮಾತನಾಡಲು ಸಮಯವಿಲ್ಲ” ಎಂದು ಅವರು ವಾಗ್ದಾಳಿ ನಡೆಸಿದರು


ನಿಮ್ಮ ಕಾಮೆಂಟ್ ಬರೆಯಿರಿ