ಪಾಟ್ನಾ : ಜುಲೈ 25ರಂದು ನಡೆದ ‘ಬಿಹಾರ ಬಂದ್ʼ ವೇಳೆ ಸಿವಾನ್ ಜಿಲ್ಲೆಯಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ವೈರಲ್ ಆದ ವಿಡಿಯೊವನ್ನು ಗಂಭೀರವಾಗಿ ಪರಿಗಣಿಸಿದ ಬಿಹಾರ ಪೊಲೀಸ್ ಇಲಾಖೆಯು ಸಂಬಂಧಿತ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿದೆ.
ರಾಜ್ಯವ್ಯಾಪಿ ನಡೆದ ಬಿಹಾರ ಬಂದ್ ವೇಳೆ ವಿವಿಧ ವಿದ್ಯಾರ್ಥಿ ಸಂಘಟನೆಗಳು ಹಲವು ಜಿಲ್ಲೆಗಳಲ್ಲಿ ಬೃಹತ್ ಪ್ರತಿಭಟನೆಗಳನ್ನು ನಡೆಸಿದವು. ಈ ಸಂದರ್ಭದಲ್ಲಿ ಅನೇಕ ಕಡೆಗಳಲ್ಲಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಘರ್ಷಣೆಗಳು ನಡೆದಿರುವುದು ವರದಿಯಾಗಿದೆ.
ಅಧಿಕೃತ ಮಾಹಿತಿಯ ಪ್ರಕಾರ, ಪ್ರತಿಭಟನೆ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗುಂಡು ಹಾರಿಸಿರುವುದಾಗಿ ಹೇಳಲಾದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಬಿಹಾರ ಪೊಲೀಸ್ ಮುಖ್ಯ ಕಚೇರಿಯು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣವೇ ಅಮಾನತು ಆದೇಶ ಹೊರಡಿಸಿದೆ.
ಈ ಘಟನೆದಲ್ಲಿ ಗಾಯಗೊಂಡ ಮೂವರು ಪ್ರತಿಭಟನಾಕಾರರು ಪಾಟ್ನಾದ ಜಯಪ್ರಭಾ ಮೆದಾಂತ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಗಾಯಗೊಂಡವರಲ್ಲಿ 15 ವರ್ಷದ ಮೊಹಮ್ಮದ್ ಆರಿಫ್ ಕೂಡ ಸೇರಿದ್ದಾರೆ. ಕುಟುಂಬದವರ ಮಾಹಿತಿ ಪ್ರಕಾರ, ಅವರು ಸ್ಥಳೀಯ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು, ಬಂದ್ ಹಿನ್ನೆಲೆಯಲ್ಲಿ ಅಂಗಡಿ ಮುಚ್ಚಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ನಡೆದ ಗದ್ದಲದ ಮಧ್ಯೆ ಕುತ್ತಿಗೆಗೆ ಗುಂಡು ತಗುಲಿತ್ತು. ಬಳಿಕ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಗುಂಡನ್ನು ಯಶಸ್ವಿಯಾಗಿ ಹೊರತೆಗೆದಿದ್ದು, ಬಾಲಕನ ಆರೋಗ್ಯ ಸ್ಥಿತಿ ಈಗ ಸ್ಥಿರವಾಗಿದೆ ಎಂದು ವರದಿಗಳು ತಿಳಿಸಿವೆ.
ಬಿಹಾರದ ವಿಧಾನಸಭೆಯ ವಿಪಕ್ಷದ ನಾಯಕ ತೇಜಸ್ವಿ ಯಾದವ್, ಘಟನೆಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಘಟನೆಯ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಅವರು, ಪೊಲೀಸ್ ಸಿಬ್ಬಂದಿ ವಿದ್ಯಾರ್ಥಿಗಳತ್ತ ಗುಂಡು ಹಾರಿಸುತ್ತಿರುವ ದೃಶ್ಯಗಳು ಅದರಲ್ಲಿ ದಾಖಲಾಗಿವೆ ಎಂದು ತಿಳಿಸಿದ್ದಾರೆ.
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೂಡ ಈ ಘಟನೆಯನ್ನು ಪ್ರಸ್ತಾಪಿಸಿದ್ದು, “ಪ್ರತಿಭಟನಾ ನಿರತ ವಿದ್ಯಾರ್ಥಿಗಳ ವಿರುದ್ಧ ದೆಹಲಿಯಲ್ಲಿ ಪೆಲೆಟ್ ಗನ್ ಹಾಗೂ ಬಿಹಾರದಲ್ಲಿ ಎಕೆ-47 ಬಳಕೆ ಮಾಡಿರುವುದು ಒಂದೇ ರೀತಿಯ ಪ್ರವೃತ್ತಿಯಾಗಿದೆ” ಎಂದು ಟೀಕಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಪೊಲೀಸ್ ಅಧಿಕಾರಿಗಳು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಪೊಲೀಸ್ ಇಲಾಖೆಯ ಪ್ರಮುಖ ಜವಾಬ್ದಾರಿಯಾಗಿದ್ದು, ನಿಗದಿತ ನಿಯಮಾವಳಿಗಳ ಉಲ್ಲಂಘನೆಯನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಹೇಳಿದ್ದಾರೆ. ಘಟನೆಯ ಬಗ್ಗೆ ಸಮಗ್ರ ಇಲಾಖಾ ತನಿಖೆಗೆ ಆದೇಶಿಸಲಾಗಿದ್ದು, ತನಿಖಾ ವರದಿ ಆಧರಿಸಿ ಮುಂದಿನ ಶಿಸ್ತು ಹಾಗೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಇದೇ ವೇಳೆ, ಪ್ರತಿಭಟನೆ ವೇಳೆ ಶಸ್ತ್ರಾಸ್ತ್ರ ಬಳಕೆ ಪೊಲೀಸ್ ನಿಯಮಾವಳಿಗಳಿಗೆ ಅನುಗುಣವಾಗಿತ್ತೇ ಅಥವಾ ಇಲ್ಲವೇ ಎಂಬುದನ್ನು ತನಿಖೆ ಮೂಲಕ ಪರಿಶೀಲಿಸಲಾಗುವುದು. ಅದರ ಆಧಾರದ ಮೇಲೆ ಅಗತ್ಯವಿದ್ದಲ್ಲಿ ಹೆಚ್ಚುವರಿ ಶಿಸ್ತು ಕ್ರಮ ಅಥವಾ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಿಹಾರ ಬಂದ್ ಅಂಗವಾಗಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಗಾಂಧಿ ಮೈದಾನದತ್ತ ತೆರಳಿದ್ದರು. ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗುತ್ತಿದ್ದ ವೇಳೆ ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ವಾಗ್ವಾದ ಉಂಟಾಗಿ, ಪರಿಸ್ಥಿತಿ ಉದ್ವಿಗ್ನಗೊಂಡು ಘರ್ಷಣೆಗೆ ತಿರುಗಿದ ಪರಿಣಾಮ ಈ ಘಟನೆ ಸಂಭವಿಸಿದೆ.


ನಿಮ್ಮ ಕಾಮೆಂಟ್ ಬರೆಯಿರಿ