ಕರ್ನಾಟಕದ 5 ಜಿಲ್ಲೆಗಳಲ್ಲಿ ಭಾರಿ ಗಾಳಿ ಮಳೆಯ ಮುನ್ಸೂಚನೆ ; ಆರೆಂಜ್‌ ಅಲರ್ಟ್‌ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜುಲೈ 30 ಮತ್ತು 31ರಂದು ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಈ ಮೂರು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಮಳೆಯ ಜೊತೆಗೆ ಗಂಟೆಗೆ 30ರಿಂದ 40 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆ ಇದೆ ಎಂದೂ ಐಎಂಡಿ ತಿಳಿಸಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಜಿಲ್ಲೆಗಳಿಗೆ ಜುಲೈ 30 ಮತ್ತು 31ರಂದು ಆರೆಂಜ್‌ ಅಲರ್ಟ್‌ ನೀಡಲಾಗಿದೆ.

ಅಲ್ಲದೆ,ಈ ದಿನಗಳಲ್ಲಿ ಕೊಡಗು  ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗಬಹುದು ಎಂದು ತಿಳಿಸಲಾಗಿದೆ.
ಜುಲೈ 31ರಂದು ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಧಾರವಾಡ ಹಾಗೂ ಬಾಗಲಕೋಟೆ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೀದರ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗಬಹುದು ಎಂದು ಹೇಳಲಾಗಿದೆ.

ಪ್ರಮುಖ ಸುದ್ದಿ :-   ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ : ಕರ್ನಾಟಕದಲ್ಲಿ 84.31 ಲಕ್ಷ ʼಎಎಸ್‍ಡಿಡಿಒʼ ಮತದಾರರು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement