ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟ; ರಾಜೀನಾಮೆಗೆ ಮುಂದಾದ ಇಬ್ಬರು ಶಾಸಕರು

ಬೆಂಗಳೂರು: ಸೋಮವಾರ ಸಂಜೆ ನಡೆಯಲಿರುವ ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ಮುನ್ನವೇ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಅಸಮಾಧಾನ ಭುಗಿಲೆದ್ದಿದೆ. ಸಚಿವ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಇಬ್ಬರು ಶಾಸಕರು ಸೋಮವಾರ ರಾಜೀನಾಮೆ ನೀಡುವುದಾಗಿ ಪ್ರಕಟಿಸಿದ್ದು, ಪಕ್ಷದೊಳಗಿನ ಅಸಮಾಧಾನ ಬಹಿರಂಗವಾಗಿದೆ.
ಇಂಡಿ ಕ್ಷೇತ್ರದ ಹಿರಿಯ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ ಹಾಗೂ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಸಚಿವ ಸ್ಥಾನ ನಿರಾಕರಿಸಿದ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.
ಸಚಿವ ಸ್ಥಾನ ನೀಡುವುದಾಗಿ ಪಕ್ಷ ಭರವಸೆ ನೀಡಿದ್ದರೂ ಅದನ್ನು ಈಡೇರಿಸಲಿಲ್ಲ ಎಂದು ಆರೋಪಿಸಿದ ಯಶವಂತರಾಯಗೌಡ ಪಾಟೀಲ, ಪಕ್ಷ ತನ್ನ ಮಾತು ಉಳಿಸಿಕೊಳ್ಳಲು ವಿಫಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನೊಂದೆಡೆ, ಬೇಳೂರು ಗೋಪಾಲಕೃಷ್ಣ ಅವರು, “ಕಾಂಗ್ರೆಸ್‌ನಲ್ಲಿ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗಷ್ಟೇ ಪ್ರಾಮುಖ್ಯತೆ ಸಿಗುತ್ತಿದೆ” ಎಂದು ತೀವ್ರ ಅಸಮಾಧಾನ ಹೊರಹಾಕಿದ್ದಾರೆ.
ಇಲ್ಲದೆ ಕಾಂಗ್ರೆಸ್‌ ಶಾಸಕ ಮೈಸೂರಿನ ತನ್ವೀರ್‌ ಸೇಠ್‌ ಸಹ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದ್ದು, ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರಿಗೆ ಮಂತ್ರಿಗಿರಿ ನೀಡಲಾಗಿದೆ ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ.
ಇದೇ ವೇಳೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನೇತೃತ್ವದ ಸಚಿವ ಸಂಪುಟದ ಬಹುನಿರೀಕ್ಷಿತ ವಿಸ್ತರಣೆಯಲ್ಲಿ ಪ್ರಮಾಣವಚನ ಸ್ವೀಕರಿಸಲಿರುವ 20 ಸಚಿವರ ಅಂತಿಮ ಪಟ್ಟಿಗೆ ಕಾಂಗ್ರೆಸ್ ಹೈಕಮಾಂಡ್ ಅನುಮೋದನೆ ನೀಡಿದೆ ಎಂದು ಮೂಲಗಳು ತಿಳಿಸಿವೆ.

ಪ್ರಮುಖ ಸುದ್ದಿ :-   ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ವಾರ ಕಾಲ ಭಾರೀ ಮಳೆ ಸಾಧ್ಯತೆ : ಮುನ್ಸೂಚನೆ

34 ಸದಸ್ಯರ ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ 20 ಸ್ಥಾನಗಳನ್ನು ಈ ವಿಸ್ತರಣೆಯಲ್ಲಿ ಭರ್ತಿ ಮಾಡಲಾಗುತ್ತಿದೆ. ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭವು ಸಂಜೆ 5 ಗಂಟೆಗೆ ಲೋಕಭವನದ ಗ್ಲಾಸ್ ಹೌಸ್‌ನಲ್ಲಿ ನಡೆಯಲಿದೆ.

ಸಚಿವ ಸಂಪುಟಕ್ಕೆ ಮಾಜಿ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರನ್ನು ಸೇರ್ಪಡೆಗೊಳಿಸಿರುವ ಹಿನ್ನೆಲೆಯಲ್ಲಿ, ರೋಣ ಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲ ಅವರು ಕರ್ನಾಟಕ ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಆಯ್ಕೆಯಾಗಲಿದ್ದಾರೆ. ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಅವರು ಉಪಸಭಾಧ್ಯಕ್ಷರಾಗಿ ನೇಮಕವಾಗಲಿದ್ದಾರೆ.
ವಿಧಾನ ಪರಿಷತ್ತಿನಲ್ಲಿ ಹಿರಿಯ ಸದಸ್ಯ ಸಲೀಂ ಅಹ್ಮದ್ ಅವರು ನೂತನ ಸಭಾಪತಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದು, ನಟಿ-ರಾಜಕಾರಣಿ ಹಾಗೂ ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ ಅವರು ಉಪಸಭಾಪತಿಯಾಗಿ ನೇಮಕವಾಗಲಿದ್ದಾರೆ.
ಸಚಿವ ಸಂಪುಟ ವಿಸ್ತರಣೆಗೆ ಮುನ್ನವೇ ಇಬ್ಬರು ಶಾಸಕರ ರಾಜೀನಾಮೆ ಘೋಷಣೆ ಕಾಂಗ್ರೆಸ್‌ಗೆ ರಾಜಕೀಯ ಮುಜುಗರವನ್ನು ಉಂಟುಮಾಡಿದ್ದು, ಮುಂದಿನ ದಿನಗಳಲ್ಲಿ ಪಕ್ಷದೊಳಗಿನ ಅಸಮಾಧಾನ ಯಾವ ಸ್ವರೂಪ ಪಡೆಯಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement