ಉಡುಪಿ : ಜಿಲ್ಲೆಯ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಮುದರಂಗಡಿಯ ಡೇವಿಡ್ ಡಿಸೋಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಉತ್ತರ ಪ್ರದೇಶದ ಥಾಣಾ ಪಿಲ್ವಾ ನಿವಾಸಿ ರಾಜು (42) ಎಂಬಾತನನ್ನು ಬೈಂದೂರು ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಂತರ ಮತ್ತೊಬ್ಬ ಆರೋಪಿ ಉತ್ತರಾಖಂಡ ಮೂಲದ ಅಜಯ ರಸ್ತೋಗಿ ಅಲಿಯಾಸ್ ಅನ್ಮೋಲ್ (23) ಎಂಬಾತನನ್ನು ಕುಮಟಾದಲ್ಲಿ ಹಾಗೂ ಇನ್ನೊಬ್ಬ ಆರೋಪಿ ಬಿಹಾರ ಮೂಲದ ಜಿಯಾಹುಲ್ ವಜೂಲ್ ಶೇಖ್ ಅಲಿಯಾಸ್ ದೀಪಕ (38) ಎಂಬಾತನನ್ನು ಭಟ್ಕಳದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಉದ್ಯಮಿ ಡೇವಿಡ್ ಡಿಸೋಜಾ ಅವರು ಕಾಪು ತಾಲೂಕಿನ ಮುದರಂಗಡಿಯಲ್ಲಿರುವ ಸೆಂಟ್ ಕ್ಷೇವಿಯರ್ ಚರ್ಚ್ ಕಾಂಪ್ಲೆಕ್ಸ್ನಲ್ಲಿ ಪ್ರಿನ್ಸ್ ಎಂಟರ್ಪ್ರೈಸಸ್ ನಡೆಸುತ್ತಿದ್ದರು. ಅವರು ಕಚೇರಿಯಿಂದ ತಮ್ಮ ಥಾರ್ ವಾಹನದತ್ತ ಹೋಗುತ್ತಿದ್ದಾಗ ಬೈಕ್ನಲ್ಲಿ ಬಂದ ಆರೋಪಿಗಳು ಅವರ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಡೇವಿಡ್ ಡಿಸೋಜಾ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಪರೀಕ್ಷಿಸಿದ ವೈದ್ಯರು ಅವರು ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದರು.
ಈ ಸಂಬಂಧ ಶಿರ್ವ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 66/2026, ಕಲಂ 103, 3(5) ಬಿಎನ್ಎಸ್ ಹಾಗೂ ಕಲಂ 3, 25 ಆರ್ಮ್ಸ್ ಆ್ಯಕ್ಟ್ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿಗಳು ಸೆರೆ ಸಿಕ್ಕಿದ್ದು ಹೇಗೆ…?
ಪ್ರಕರಣದ ತನಿಖೆ ನಡೆಸುತ್ತಿದ್ದ ವೇಳೆ ಕೃತ್ಯದಲ್ಲಿ ನೇರವಾಗಿ ಭಾಗಿಯಾಗಿದ್ದ ಮೂವರು ಆರೋಪಿಗಳು ಬಸ್ನಲ್ಲಿ ಭಟ್ಕಳದ ಕಡೆಗೆ ತೆರಳುತ್ತಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತು. ಈ ಹಿನ್ನೆಲೆಯಲ್ಲಿ ಬೈಂದೂರಿನ ಒತ್ತಿನೆಣೆ ಎಂಬಲ್ಲಿ ಆರೋಪಿಗಳು ಪ್ರಯಾಣಿಸುತ್ತಿದ್ದ ಬಸ್ ಅನ್ನು ಪೊಲೀಸರು ತಡೆದು ತಪಾಸಣೆ ನಡೆಸಲು ಮುಂದಾದರು. ಈ ವೇಳೆ ಬಸ್ನಲ್ಲಿದ್ದ ಮೂವರು ಆರೋಪಿಗಳು ಕೆಳಗಿಳಿದು ಪರಾರಿಯಾಗಲು ಯತ್ನಿಸಿದರು.
ಆರೋಪಿಗಳನ್ನು ಬೆನ್ನಟ್ಟಿ ಹಿಡಿಯುವ ವೇಳೆ ರಾಜು ಎಂಬಾತ ಕಾಪು ಪೊಲೀಸ್ ಠಾಣೆಯ ಪಿಎಸ್ಐ ತೇಜಸ್ವಿ ಅವರನ್ನು ದೂಡಿ ಹಾಕಿ, ತನ್ನ ಬಳಿಯಿದ್ದ ಪಿಸ್ತೂಲ್ನಿಂದ ಗುಂಡು ಹಾರಿಸಿ ಪರಾರಿಯಾಗಲು ಯತ್ನಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಆತ್ಮರಕ್ಷಣೆಗಾಗಿ ಪೊಲೀಸರು ರಾಜುವಿನ ಕಾಲಿಗೆ ಗುಂಡು ಹಾರಿಸಿ, ಆತನನ್ನು ಹಾಗೂ ಆತನ ಬಳಿಯಿದ್ದ ಪಿಸ್ತೂಲ್ ಅನ್ನು ವಶಕ್ಕೆ ಪಡೆದಿದ್ದಾರೆ.
ಡೇವಿಡ್ ಡಿಸೋಜಾ ಅವರನ್ನು ತನ್ನ ಪಿಸ್ತೂಲ್ನಿಂದ ಗುಂಡು ಹಾರಿಸಿ ಕೊಲೆ ಮಾಡಿದ ಆರೋಪವೂ ರಾಜುವಿನ ಮೇಲಿದೆ.
ಪೊಲೀಸರ ಮೇಲೆ ಗುಂಡು ಹಾರಿಸಿ ಗಾಯಗೊಳಿಸಿದ ಹಾಗೂ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ರಾಜು ವಿರುದ್ಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಸೇರಿದಂತೆ ಪ್ರಕರಣ ದಾಖಲಾಗಿದೆ.
ಈ ವೇಳೆ ಪರಾರಿಯಾಗಿದ್ದ ಇನ್ನಿಬ್ಬರು ಆರೋಪಿಗಳ ಪೈಕಿ ಅಜಯ ರಸ್ತೋಗಿಯನ್ನು ಕುಮಟಾ ಪೊಲೀಸರ ಸಹಕಾರದಿಂದ ಕುಮಟಾದಲ್ಲಿ ಹಾಗೂ ದೀಪಕ ಎಂಬಾತನನ್ನು ಭಟ್ಕಳ ಪೊಲೀಸರ ಸಹಕಾರದಿಂದ ಭಟ್ಕಳದಲ್ಲಿ ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಕೃತ್ಯಕ್ಕೆ ಬಳಸಿಕೊಂಡು ಬಳಿಕ ಎರ್ಮಾಳ್ನಲ್ಲಿ ಬಿಟ್ಟುಹೋಗಿದ್ದ ಬೈಕ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳನ್ನು ವಶಕ್ಕೆ ಪಡೆಯುವ ಕಾರ್ಯಾಚರಣೆ ವೇಳೆ ಕಾಪು ಪೊಲೀಸ್ ಠಾಣೆಯ ಪಿಎಸ್ಐ ತೇಜಸ್ವಿ ಗಾಯಗೊಂಡಿದ್ದು, ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಗೊಂಡಿರುವ ಆರೋಪಿ ರಾಜು ಕೂಡ ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿದುಬಂದಿದೆ.
ಕೊಲೆ ಕೃತ್ಯಕ್ಕೆ ಸಹಕರಿಸಿದವರು, ಹಣಕಾಸಿನ ನೆರವು ನೀಡಿದವರು ಹಾಗೂ ಆರೋಪಿಗಳಿಗೆ ಆಶ್ರಯ ನೀಡಿದವರ ಕುರಿತು ತನಿಖೆ ಮುಂದುವರಿದಿದೆ.


ನಿಮ್ಮ ಕಾಮೆಂಟ್ ಬರೆಯಿರಿ