ಬೆಳಗಾವಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಪತ್ನಿ ಹಾಗೂ ಆಕೆಯ ಪ್ರಿಯಕರ ಸೇರಿ ಹತ್ಯೆ ಮಾಡಿ, ಶವವನ್ನು ಹೊಲದಲ್ಲಿ ಮುಚ್ಚಿಟ್ಟು, ಪತಿ ಕಾಣೆಯಾಗಿದ್ದಾನೆ ಎಂದು ನಂಬಿಸಿ ದೂರು ನೀಡಿದ್ದ ಪ್ರಕರಣವನ್ನು ಜಿಲ್ಲೆಯ ಖಡಕಲಾಟ ಪೊಲೀಸರು ಆರು ತಿಂಗಳ ಬಳಿಕ ಭೇದಿಸಿದ್ದಾರೆ.
ಮೃತನನ್ನು ರಾಘು ಗಾವಡೆ (40) ಎಂದು ಗುರುತಿಸಲಾಗಿದ್ದು, ಆತನ ಪತ್ನಿ ಬಂಗಾರಿ ಗಾವಡೆ ಹಾಗೂ ಆಕೆಯ ಪ್ರಿಯಕರ ರಾಮಾ ರಾಣಗೆ ಪ್ರಕರಣದ ಆರೋಪಿಗಳಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಬಂಗಾರಿ ಗಾವಡೆಗೆ ರಾಮಾ ರಾಣಗೆ ಜೊತೆ ಅಕ್ರಮ ಸಂಬಂಧದ ಶಂಕೆ ವ್ಯಕ್ತವಾಗಿದೆ. ಈ ಸಂಬಂಧಕ್ಕೆ ಪತಿ ರಾಘು ಗಾವಡೆ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಇಬ್ಬರೂ ಸೇರಿ ಆತನನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದರು. ಕೂಲಿ ಕೆಲಸ ಹಾಗೂ ಕುರಿ ಕಾಯುವ ಕೆಲಸ ಮಾಡುತ್ತಿದ್ದ ರಾಘು ಅವರನ್ನು ಹೊಲಕ್ಕೆ ಕರೆಸಿಕೊಂಡ ಪತ್ನಿಯು ಪ್ರಿಯಕರನ ಜೊತೆ ಸೇರಿ ಹತ್ಯೆ ಮಾಡಿದ್ದಾಳೆ ಎಂದು ಆರೋಪಿಸಲಾಗಿದೆ. ಬಳಿಕ ಶವವನ್ನು ಸಾಗಿಸಿ ಹೊಲದಲ್ಲಿ ಮುಚ್ಚಿಟ್ಟಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹತ್ಯೆಯ ಬಳಿಕ ರಾಘು ಕುರಿ ಕಾಯಲು ಬೇರೆ ಜಿಲ್ಲೆಗೆ ತೆರಳಿದ್ದಾನೆ ಎಂದು ಪತ್ನಿ ಕುಟುಂಬಸ್ಥರನ್ನು ನಂಬಿಸಿದ್ದಳು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಆರಂಭದಲ್ಲಿ ಖಡಕಲಾಟ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.
ಆದರೆ, ಹಲವು ದಿನಗಳು ಕಳೆದರೂ ರಾಘು ವಾಪಸ್ ಬಾರದ ಹಿನ್ನೆಲೆಯಲ್ಲಿ ಆತನ ಸಹೋದರ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ಚುರುಕುಗೊಳಿಸಿದರು. ತನಿಖೆಯ ವೇಳೆ ಪ್ರಕರಣದ ಸತ್ಯಾಂಶ ಬೆಳಕಿಗೆ ಬಂದಿದ್ದು, ಪತ್ನಿ ಬಂಗಾರಿ ವಿಚಾರಣೆಯಲ್ಲಿ ಹತ್ಯೆಯ ಬಗ್ಗೆ ಬಾಯ್ಬಿಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಆಕೆಯ ಹೇಳಿಕೆಯ ಆಧಾರದ ಮೇಲೆ ಪ್ರಿಯಕರ ರಾಮಾ ರಾಣಗೆಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ. ಖಡಕಲಾಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ