ಮಂಗಳೂರು: ಸ್ವಾತಂತ್ರ್ಯೋತ್ಸವದಂದು ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ನಡೆದ ‘ವಂದೇ ಮಾತರಂ’ ಗಾಯನಕ್ಕೆ ಸಂಬಂಧಿಸಿದ ವಿವಾದ ತೀವ್ರಗೊಂಡಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಮಂಗಳೂರಿನ ಉರ್ವಾ ಪೊಲೀಸ್ ಠಾಣೆಯಲ್ಲಿ ಭಾನುವಾರ ದೂರು ದಾಖಲಿಸಿದ್ದಾರೆ. ಸೋನಿಯಾ ಗಾಂಧಿ ವಂದೇ ಮಾತರಂಗೆ (Vande Mataram Row) ಅಪಮಾನ ಮಾಡಿದ್ದಾರೆಂದು ಆರೋಪಿಸಿ ಈ ದೂರು ನೀಡಲಾಗಿದೆ. ರಾಷ್ಟ್ರೀಯ ಗೀತೆಯ ಕುರಿತ ವಿವಾದದ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಸ್ವಾತಂತ್ರ್ಯೋತ್ಸವದ ಅಂಗವಾಗಿ ಶನಿವಾರ ನವದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ‘ವಂದೇ ಮಾತರಂ’ ಗಾಯನ ನಡೆಯುತ್ತಿದ್ದ ವೇಳೆ ಪಕ್ಷದ ಹಿರಿಯ ನಾಯಕರು ಪರಸ್ಪರ ಮಾತನಾಡುತ್ತಿರುವ ದೃಶ್ಯಗಳು ವೈರಲ್ ಆಗಿದ್ದವು. ಇದನ್ನು ಆಧರಿಸಿ ಬಿಜೆಪಿ ನಾಯಕರು ಕಾಂಗ್ರೆಸ್ ನಾಯಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರ ವರ್ತನೆಯಿಂದ ರಾಷ್ಟ್ರೀಯ ಗೀತೆಗೆ ಸಂಬಂಧಿಸಿದ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಬಿಜೆಪಿ ಆರೋಪಿಸಿದೆ.
ಉರ್ವಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ಬಿಜೆಪಿ ನಾಯಕ ವಿಕಾಸ ಪುತ್ತೂರು, ಈ ಪ್ರಕರಣದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS)ಯ ಸಂಬಂಧಿತ ಕಾನೂನುಗಳ ಅಡಿಯಲ್ಲಿ ಪೊಲೀಸರು ಸ್ವಯಂಪ್ರೇರಿತವಾಗಿ ಎಫ್‌ಐಆರ್ ದಾಖಲಿಸಬಹುದಾಗಿದೆ ಎಂದು ಅವರು ಹೇಳಿದ್ದಾರೆ.
ದೂರು ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ವಿಕಾಸ ಪುತ್ತೂರು, ವಂದೇ ಮಾತರಂ ನಮ್ಮ ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಸ್ಫೂರ್ತಿ ನೀಡಿದ ಗೀತೆಯಾಗಿದ್ದು, ಇದನ್ನು ಪೂರ್ಣವಾಗಿ ಹಾಡಲು ಬಿಡದೆ ಅರ್ಧಕ್ಕೆ ನಿಲ್ಲಿಸುವುದು 140 ಕೋಟಿ ಭಾರತೀಯರಿಗೆ ಮಾಡಿದ ಅಪಮಾನ. ಒಂದು ವೇಳೆ ಪೊಲೀಸರು ಪ್ರಭಾವಕ್ಕೆ ಒಳಗಾಗಿ ಎಫ್‌ಐಆರ್ ದಾಖಲಿಸದಿದ್ದರೆ, ನಾವು ಹೈಕೋರ್ಟ್ ಮೊರೆ ಹೋಗುತ್ತೇವೆ ಅಥವಾ ಖಾಸಗಿ ದೂರನ್ನು ದಾಖಲಿಸಿ ಕಾನೂನು ಹೋರಾಟ ಮುಂದುವರಿಸುತ್ತೇವೆ ಎಂದು ಎಚ್ಚರಿಸಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ