ಬೆಂಗಳೂರು: ಟ್ರಾಫಿಕ್ನಲ್ಲಿ ತಮ್ಮ ವಾಹನ ನಿಲ್ಲಿಸಿದ ಕಾರಣಕ್ಕೆ ಕರ್ತವ್ಯದಲ್ಲಿದ್ದ ಸಂಚಾರ ಪೊಲೀಸ್ ಸಿಬ್ಬಂದಿ ಜೊತೆ ವಾಗ್ವಾದ ನಡೆಸಿ, ಅವರ ಕಾಲರ್ ಹಿಡಿದು ಹಲ್ಲೆಗೆ ಮುಂದಾದ ಆರೋಪದ ಮೇಲೆ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಗೊಟ್ಟಿಗೆರೆ ಮಂಜು ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಪೊಲೀಸರ ಪ್ರಕಾರ, ಬೆಂಗಳೂರಿನ ಗೊಟ್ಟಿಗೆರೆ ಜಂಕ್ಷನ್ನಲ್ಲಿ ಹುಳಿಮಾವು ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ಅರುಣ ಎಂಬವರು ಕರ್ತವ್ಯದಲ್ಲಿದ್ದರು. ಈ ವೇಳೆ ಸಂಚಾರ ದಟ್ಟಣೆ ನಿಯಂತ್ರಣ ಮಾಡುವ ಉದ್ದೇಶದಿಂದ ಅವರು ಹ್ಯಾಂಡ್ ಸಿಗ್ನಲ್ (ಕೈ ಸನ್ನೆ) ಮೂಲಕ ವಾಹನಗಳನ್ನು ನಿಲ್ಲಿಸುತ್ತಿದ್ದರು. ಆಗ ಅದೇ ಮಾರ್ಗವಾಗಿ ಬಂದ ಜೆಡಿಎಸ್ ಮುಖಂಡ ಗೊಟ್ಟಿಗೆರೆ ಮಂಜುನಾಥ ಅವರ ವಾಹನವನ್ನೂ ನಿಲ್ಲಿಸುವಂತೆ ಸಿಗ್ನಲ್ ನೀಡಿದ್ದಾರೆ. ಇದರಿಂದ ಅಸಮಾಧಾನಗೊಂಡ ಮಂಜು, ತಮ್ಮ ವಾಹನವನ್ನು ಏಕೆ ನಿಲ್ಲಿಸಲಾಗಿದೆ ಎಂದು ಪ್ರಶ್ನಿಸಿ ಪೊಲೀಸ್ ಸಿಬ್ಬಂದಿಯೊಂದಿಗೆ ವಾಗ್ವಾದಕ್ಕಿಳಿದಿದ್ದಾರೆ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎನ್ನಲಾಗಿದೆ.
ವಾಗ್ವಾದದ ವೇಳೆ ಮಂಜು ಅವರು ಅರುಣ ಅವರ ಕಾಲರ್ ಹಿಡಿದು ಹಲ್ಲೆ ನಡೆಸಲು ಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೆ, ಪೊಲೀಸ್ ಸಿಬ್ಬಂದಿಗೆ ಒದೆಯಲು ಕೂಡ ಪ್ರಯತ್ನಿಸಿದ್ದಾರೆ ಎನ್ನಲಾಗಿದೆ. ಈ ಸಂಪೂರ್ಣ ಘಟನೆ ಸಾರ್ವಜನಿಕರ ಸಮ್ಮುಖದಲ್ಲೇ ನಡೆದಿದ್ದು, ಸುತ್ತಮುತ್ತಲಿದ್ದ ಜನರು ಮಧ್ಯಪ್ರವೇಶಿಸಿ ಪರಿಸ್ಥಿತಿ ಮತ್ತಷ್ಟು ಉಲ್ಬಣಗೊಳ್ಳುವುದನ್ನು ತಡೆದಿದ್ದಾರೆ ಎಂದು ತಿಳಿದುಬಂದಿದೆ.
ಈ ಘಟನೆ ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಘಟನೆಯ ನಂತರ ಹುಳಿಮಾವು ಠಾಣೆಯಲ್ಲಿ ಕರ್ತವ್ಯಕ್ಕೆ ಅಡ್ಡಿ ಹಾಗೂ ಹಲ್ಲೆ ಆರೋಪದಡಿ ಪ್ರಕರಣ ದಾಖಲಾಗಿತ್ತು. ಇದರ ನಂತರ ಮಂಜು ಪರಾರಿಯಾಗಿದ್ದರು. ತನಿಖೆ ಚುರುಕುಗೊಳಿಸಿದ ಪೊಲೀಸರು, ನಗರದ ಖಾಸಗಿ ಹೋಟೆಲ್ ಒಂದರಲ್ಲಿ ಅಡಗಿ ಕುಳಿತಿದ್ದ ಆರೋಪಿಯನ್ನು ನಿನ್ನೆ ರಾತ್ರಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ಬಳಿಕ ಪೊಲೀಸರು ಭಾನುವಾರ ತಡರಾತ್ರಿ ಮಂಜು ಅವರನ್ನು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಪ್ರಸ್ತುತ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ.


ನಿಮ್ಮ ಕಾಮೆಂಟ್ ಬರೆಯಿರಿ