ಎಲ್ಲರಿಗೂ ಸ್ವಾತಂತ್ರ್ಯೋತ್ಸವದ ಶುಭಾಶಯಗಳು

ಕೆಪಿಎಸ್‌ಸಿ ಅಧ್ಯಕ್ಷರ ಹುದ್ದೆಯಿಂದ ಶಿವಶಂಕರಪ್ಪ ಸಾಹುಕಾರ ಅಮಾನತುಗೊಳಿಸಿದ್ದ ರಾಜ್ಯಪಾಲರ ಆದೇಶ ರದ್ದುಗೊಳಿಸಿದ ಹೈಕೋರ್ಟ್‌

ಬೆಂಗಳೂರು : ಅಧಿಕಾರ ದುರುಪಯೋಗ ಹಾಗೂ ಸ್ವಜನಪಕ್ಷಪಾತದ ಆರೋಪದಡಿ ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ ಅವರನ್ನು ಅಮಾನತುಗೊಳಿಸಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಮಂಗಳವಾರ ರದ್ದುಪಡಿಸಿದೆ.
ಕೆಪಿಎಸ್‌ಸಿ ಅಧ್ಯಕ್ಷ ಹುದ್ದೆಯಿಂದ ಅಮಾನತುಗೊಳಿಸಿ ರಾಜ್ಯಪಾಲರು ಹೊರಡಿಸಿದ್ದ ಆದೇಶ ಪ್ರಶ್ನಿಸಿ ಶಿವಶಂಕರಪ್ಪ ಎಸ್. ಸಾಹುಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಸೂರಜ ಗೋವಿಂದರಾಜ ಅವರ ಏಕಸದಸ್ಯ ಪೀಠವು ಮಂಗಳವಾರ ಪ್ರಕಟಿಸಿತು ಎಂದು ಬಾರ್‌ & ಬೆಂಚ್‌ ವರದಿ ಮಾಡಿದೆ.
ಸಂವಿಧಾನದ 317(2)ನೇ ವಿಧಿಯ ಅಡಿ ಅಧಿಕಾರ ಚಲಾಯಿಸಿ ಶಿವಶಂಕರಪ್ಪ ಸಾಹುಕಾರ ಅವರನ್ನು ಅಮಾನತುಪಡಿಸಿ ರಾಜ್ಯಪಾಲರು 2026ರ ಜುಲೈ 10ರಂದು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್‌ ರದ್ದುಪಡಿಸಿದ್ದು, ಈ ಆದೇಶದ ಪ್ರತಿ ದೊರೆತ 7 ದಿನಗಳ ಒಳಗೆ ಅರ್ಜಿದಾರರನ್ನು ಆಯೋಗದ ಅಧ್ಯಕ್ಷರ ಹುದ್ದೆಗೆ ಮರುನಿಯೋಜಿಸಲು ಪ್ರತಿವಾದಿಗಳಿಗೆ ನಿರ್ದೇಶಿಸಿದೆ.
ಹುದ್ದೆ ಮರುಸ್ಥಾಪನೆಯಾದ ನಂತರ ಅರ್ಜಿದಾರರು ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲು ಅರ್ಹರಾಗಿರುತ್ತಾರೆ ಎಂದು‌ ನ್ಯಾಯಾಲಯ ಹೇಳಿದೆ.

ಇದೇ ವೇಳೆ, ಅರ್ಜಿದಾರರು ತಮ್ಮ ಪುತ್ರಿಯರ ವಿರುದ್ಧ ಆಯೋಗ ಕೈಗೊಳ್ಳಲು ಉದ್ದೇಶಿಸಿರುವ ಕ್ರಮಕ್ಕೆ ಸಂಬಂಧಿಸಿದಂತೆ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಾಗಲಿ, ಕ್ರಮ ಕೈಗೊಳ್ಳುವುದಾಗಲಿ ಅಥವಾ ಬೇರೆಯವರಿಂದ ಯಾವುದೇ ನಿರ್ದಿಷ್ಟ ರೀತಿಯಲ್ಲಿ ಕ್ರಮ ಕೈಗೊಳ್ಳುವಂತೆ ಮಾಡುವುದಾಗಲಿ ಮಾಡಬಾರದು ಪೀಠವು ಅವರಿಗೆ ನಿರ್ಬಂಧ ವಿಧಿಸಿದೆ.
ನ್ಯಾಯಾಲಯ ನೀಡಿರುವ ಈ ತೀರ್ಪು ಅರ್ಜಿದಾರರ ಅಮಾನತು ಆದೇಶದ ಸಾಂವಿಧಾನಿಕ ಸಿಂಧುತ್ವವನ್ನು ಮಾತ್ರ ನಿರ್ಧರಿಸುತ್ತದೆಯೇ ಹೊರತು ಅರ್ಜಿದಾರರು ಅಥವಾ ಅವರ ಪುತ್ರಿಯರ ವಿರುದ್ಧದ ಆರೋಪಗಳ ಸತ್ಯಾಸತ್ಯತೆಯನ್ನು ಯಾವುದೇ ರೀತಿಯಲ್ಲಿ ನಿರ್ಧರಿಸುವುದಿಲ್ಲ ಎಂದು ಹೈಕೋರ್ಟ್‌ ಆದೇಶದಲ್ಲಿ ಸ್ಪಷ್ಟಪಡಿಸಿದೆ. ಅಗತ್ಯವಿದ್ದಲ್ಲಿ ಸಂವಿಧಾನ ಮತ್ತು ಈ ತೀರ್ಪಿನಲ್ಲಿ ಉಲ್ಲೇಖಿಸಿರುವ ಕಾನೂನಿಗೆ ಅ‌ನುಸಾರವಾಗಿ ಅಂದರೆ, ಸಂವಿಧಾನದ 317(2)ನೇ ವಿಧಿ ಅಡಿಯಲ್ಲಿ ಅಮಾನತು ಆದೇಶವನ್ನು ಸಚಿವ ಸಂಪುಟದ ಪೂರ್ವ ಸಲಹೆ ಮತ್ತು ಶಿಫಾರಸಿನ ಮೇರೆಗಷ್ಟೇ ಮಾಡಬಹುದಾಗಿದೆ ಎಂಬುದನ್ನು ಕಟ್ಟುನಿಟ್ಟಾಗಿ ಅನುಸರಿಸಿ ಹೊಸದಾಗಿ ಕಾನೂನು ಪ್ರಕ್ರಿಯೆ ಮುಂದುವರಿಸಲು ಸಕ್ಷಮ ಪ್ರಾಧಿಕಾರಕ್ಕೆ ಮುಕ್ತ ಅವಕಾಶವಿರುತ್ತದೆ ಎಂದು ಹೇಳಿದೆ.

ಪ್ರಮುಖ ಸುದ್ದಿ :-   ಪ್ರಿಯಕರನ ಜೊತೆ ಸೇರಿ ಗಂಡ, 4 ವರ್ಷದ ಮಗನನ್ನು ಉಸಿರುಗಟ್ಟಿಸಿ ಕೊಂದ ಪತ್ನಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement