ಬೆಂಗಳೂರು : ಬೆಂಗಳೂರು ಉತ್ತರ ಹೊರವಲಯದ ದೊಡ್ಡಬಳ್ಳಾಪುರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದನಾ ಸಂಪರ್ಕ ಹೊಂದಿರುವ ಗ್ಯಾಂಗ್‌ಸ್ಟರ್‌ಗಳ ಜೊತೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ 28 ವರ್ಷದ ಏರ್ ಕಂಡೀಷನರ್ ಮೆಕ್ಯಾನಿಕ್‌ನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಇಸ್ಲಾಂಪುರ ನಿವಾಸಿ ಎಸ್. ಸಯ್ಯದ್ ಅಬುಬಕರ್ ಎಂದು ಗುರುತಿಸಲಾಗಿದೆ. ಕಳೆದ ಎರಡು ವರ್ಷಗಳಿಂದ ಆತ ಪಾಕಿಸ್ತಾನ ಮೂಲದ ಗ್ಯಾಂಗ್‌ಸ್ಟರ್‌ಗಳು ಹಾಗೂ ಅಂತಾರಾಷ್ಟ್ರೀಯ ಅಪರಾಧ ಜಾಲದೊಂದಿಗೆ ಸಂಪರ್ಕದಲ್ಲಿದ್ದನೆಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಕೇರಳ ಮತ್ತು ದೆಹಲಿಯಲ್ಲಿ ತರಬೇತಿ ಪಡೆದಿದ್ದ ಆತ, ಸ್ಥಳೀಯ ಮಸೀದಿಯೊಂದರಲ್ಲಿ ಬೋಧಕನಾಗಿಯೂ ಕಾರ್ಯನಿರ್ವಹಿಸುತ್ತಿದ್ದನೆಂದು ತಿಳಿದುಬಂದಿದೆ.
ಕೇಂದ್ರ ತನಿಖಾ ಸಂಸ್ಥೆಯಿಂದ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ಪಟ್ಟಣ ಪೊಲೀಸರು ಗುರುವಾರ ಅಬುಬಕರ್‌ನನ್ನು ಬಂಧಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಆತ ಸಯ್ಯದ್‌ಅಬುಬಕರ್313 (‘sayedabudakar313’) ಹೆಸರಿನ ಇನ್‌ಸ್ಟಾಗ್ರಾಂ ಖಾತೆಯನ್ನು ಹೊಂದಿದ್ದು, ‘Hammadmemon333’ ಎಂಬ ಖಾತೆಯಿಂದ ಹಂಚಲಾಗುತ್ತಿದ್ದ ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳ ರೀಲ್ಸ್‌ಗಳಿಗೆ ಲೈಕ್ ಮಾಡುತ್ತಿದ್ದ ಎಂಬುದು ಬೆಳಕಿಗೆ ಬಂದಿದೆ.
ಅಷ್ಟೇ ಅಲ್ಲದೆ, ಗ್ಯಾಂಗ್‌ಸ್ಟರ್‌ಗಳ ವಿಡಿಯೊಗಳನ್ನು ತನ್ನ ಇನ್‌ಸ್ಟಾಗ್ರಾಂ ಸ್ಟೇಟಸ್‌ನಲ್ಲಿ ಹಂಚಿಕೊಳ್ಳುತ್ತಿದ್ದ ಆತ, ತನ್ನ ವೈಯಕ್ತಿಕ ಮಾಹಿತಿಗಳನ್ನೂ ‘Hammadmemon333’ ಖಾತೆಗೆ ಕಳುಹಿಸಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿಯ ಮೊಬೈಲ್ ಫೋನ್‌ನಲ್ಲಿ ಪಿಸ್ತೂಲ್‌ಗಳ ಚಿತ್ರಗಳೂ ಪತ್ತೆಯಾಗಿವೆ.
ಬಂಧಿತನ ಬಳಿಯಿಂದ ಹಲವು ಮೊಬೈಲ್ ಫೋನ್‌ಗಳು, ಸಿಮ್ ಕಾರ್ಡ್‌ಗಳು ಹಾಗೂ ಅನುಮಾನಾಸ್ಪದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಸ್ಥಳೀಯ ಜಾಲವನ್ನು ಬಳಸಿಕೊಂಡು ಅಕ್ರಮ ಚಟುವಟಿಕೆಗಳಿಗೆ ನೆರವು ನೀಡುವುದು ಅಥವಾ ಹಣಕಾಸು ವ್ಯವಹಾರಗಳನ್ನು ಸುಗಮಗೊಳಿಸುವ ಉದ್ದೇಶವನ್ನು ಆತ ಹೊಂದಿದ್ದನೆಂಬ ಶಂಕೆಯೂ ವ್ಯಕ್ತವಾಗಿದೆ.
ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಕೇಂದ್ರ ತನಿಖಾ ಸಂಸ್ಥೆಗಳ ಅಧಿಕಾರಿಗಳು ಆರೋಪಿಯನ್ನು ಸುದೀರ್ಘ ವಿಚಾರಣೆಗೆ ಒಳಪಡಿಸಿದ್ದಾರೆ. ಕರ್ನಾಟಕ ಅಥವಾ ದೇಶದ ಇತರ ಭಾಗಗಳಲ್ಲಿ ಆತನಿಗೆ ಸಹಾಯ ಮಾಡಿದವರ ಬಗ್ಗೆ ಮಾಹಿತಿ ಸಂಗ್ರಹಿಸಲು ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಲಾಗಿದೆ.
ಈ ಸಂಬಂಧ ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 113(3) ಅಡಿಯಲ್ಲಿ ಭಯೋತ್ಪಾದನಾ ಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಕರಣ ಹಾಗೂ ರಾಷ್ಟ್ರೀಯ ಏಕತೆಗೆ ಧಕ್ಕೆ ಉಂಟುಮಾಡುವ ಆರೋಪಗಳಿಗೆ ಸಂಬಂಧಿಸಿದ BNS ಕಲಂ 197(2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ಎಲ್ಲಾ ಆಯಾಮಗಳ ಕುರಿತು ಪೊಲೀಸರು ಮತ್ತು ಕೇಂದ್ರ ತನಿಖಾ ಸಂಸ್ಥೆಗಳು ತನಿಖೆ ಮುಂದುವರಿಸಿವೆ.


ನಿಮ್ಮ ಕಾಮೆಂಟ್ ಬರೆಯಿರಿ