ಬೆಂಗಳೂರು : ಕೇಂದ್ರ ಸರ್ಕಾರವು ಅಧಿಕೃತ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ʼವಂದೇ ಮಾತರಂʼನ ಎಲ್ಲಾ ಆರು ಚರಣಗಳನ್ನು ಕಡ್ಡಾಯವಾಗಿ ಹಾಡುವಂತೆ ನಿರ್ದೇಶನ ನೀಡಿರುವ ಬೆನ್ನಲ್ಲೇ, ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಹೊಸ ಆದೇಶ ಹೊರಡಿಸಿದ್ದು, ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ಸೂಚಿಸಿದೆ.
ಆದರೆ ರಾಷ್ಟ್ರಪತಿ, ಪ್ರಧಾನಮಂತ್ರಿ ಅಥವಾ ರಾಜ್ಯಪಾಲರು ಭಾಗವಹಿಸುವ ಕಾರ್ಯಕ್ರಮಗಳು ಹಾಗೂ ಕೇಂದ್ರ ಸರ್ಕಾರದ ಪ್ರತಿನಿಧಿಗಳು ಹಾಜರಿರುವ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎಲ್ಲಾ ಆರು ಚರಣಗಳನ್ನು ಹಾಡಬೇಕು ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. ರಾಜ್ಯ ಸರ್ಕಾರದ ಉಳಿದ ಅಧಿಕೃತ ಕಾರ್ಯಕ್ರಮಗಳಲ್ಲಿ ಮಾತ್ರ ಆರಂಭದ ಎರಡು ಚರಣಗಳಿಗೆ ಸೀಮಿತಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಆದೇಶದಲ್ಲಿ, “ಗೃಹ ವ್ಯವಹಾರಗಳ ಸಚಿವಾಲಯವು ರಾಷ್ಟ್ರೀಯ ಗೀತೆ ವಂದೇ ಮಾತರಂನ ಅಧಿಕೃತ ಆವೃತ್ತಿ ಹಾಗೂ ವಿವಿಧ ಸರ್ಕಾರಿ ಮತ್ತು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಅದನ್ನು ಹಾಡುವ ಅಥವಾ ನುಡಿಸುವ ಕುರಿತು ಸಂದರ್ಭಾನುಸಾರ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಹೊರಡಿಸಿದೆ” ಎಂದು ಉಲ್ಲೇಖಿಸಲಾಗಿದೆ.ಕೇಂದ್ರ ಸರ್ಕಾರದ ಮಾರ್ಗಸೂಚಿಗಳಲ್ಲಿ ವಂದೇ ಮಾತರಂನ ಸಾಮೂಹಿಕ ಗಾಯನ ಮತ್ತು ವಾದನಕ್ಕೆ ಸಂಬಂಧಿಸಿದ ಸಂದರ್ಭಗಳನ್ನು ಪ್ರತ್ಯೇಕವಾಗಿ ನಿರ್ದಿಷ್ಟಪಡಿಸಲಾಗಿದೆ. ರಾಜ್ಯದಲ್ಲಿ ನಡೆಯುವ ವಿವಿಧ ಸರ್ಕಾರಿ ಕಾರ್ಯಕ್ರಮಗಳು ಹಾಗೂ ಸಮಾರಂಭಗಳ ಸ್ವರೂಪ ಮತ್ತು ಸಂದರ್ಭಕ್ಕೆ ಅನುಗುಣವಾಗಿ ವಂದೇ ಮಾತರಂನ ಗಾಯನ ಅಥವಾ ವಾದನದಲ್ಲಿ ಏಕರೂಪತೆ, ಗೌರವ ಮತ್ತು ಸೂಕ್ತ ಶಿಷ್ಟಾಚಾರ ಕಾಪಾಡುವ ಅಗತ್ಯವನ್ನು ಸರ್ಕಾರ ಪರಿಗಣಿಸಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈ ನಿರ್ಧಾರವನ್ನು ರಾಜ್ಯ ಸಚಿವ ಸಂಪುಟದಲ್ಲಿ ಚರ್ಚೆ ನಡೆಸಿದ ಬಳಿಕ ಕೈಗೊಳ್ಳಲಾಗಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ಇತ್ತೀಚಿನ ದಿನಗಳಲ್ಲಿ ವಂದೇ ಮಾತರಂ ಗಾಯನವು ರಾಷ್ಟ್ರವ್ಯಾಪಿ ಚರ್ಚೆ ಮತ್ತು ವಿವಾದದ ಕೇಂದ್ರಬಿಂದುವಾಗಿತ್ತು. ಜುಲೈ ತಿಂಗಳಲ್ಲಿ ಸಂಸತ್ತು ರಾಷ್ಟ್ರೀಯ ಗೌರವ ಅವಮಾನ ತಡೆ (ತಿದ್ದುಪಡಿ) ಕಾಯ್ದೆ–2026 ಅನ್ನು ಅಂಗೀಕರಿಸಿದ ಬಳಿಕ ಇದು ಮತ್ತಷ್ಟು ತೀವ್ರಗೊಂಡಿತ್ತು.
ಈ ತಿದ್ದುಪಡಿ ಕಾಯ್ದೆಯ ಮೂಲಕ ರಾಷ್ಟ್ರಗೀತೆ ವಂದೇ ಮಾತರಂಗೆ, ರಾಷ್ಟ್ರಗಾನ ಜನ ಗಣ ಮನಕ್ಕೆ ಇರುವಂತೆಯೇ ಕಾನೂನುಬದ್ಧ ರಕ್ಷಣೆ ನೀಡಲಾಗಿದೆ. ಅಲ್ಲದೆ ರಾಷ್ಟ್ರಗೀತೆಯನ್ನು ಅವಮಾನಿಸುವುದು, ಅಪಮಾನಿಸುವುದು ಅಥವಾ ಅದರ ಗೌರವಕ್ಕೆ ಧಕ್ಕೆ ತರುವ ಕೃತ್ಯಗಳಿಗೆ ಗರಿಷ್ಠ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಅವಕಾಶವನ್ನು ಕಾಯ್ದೆ ಒದಗಿಸಿದೆ.
ಆಗಸ್ಟ್ 15ರಂದು ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಂದೇ ಮಾತರಂ ಗಾಯನದ ಕುರಿತು ಪ್ರಶ್ನೆಗಳು ಎದ್ದ ನಂತರ ವಿವಾದ ಮತ್ತಷ್ಟು ತೀವ್ರಗೊಂಡಿತು. ಬಳಿಕ ಆಗಸ್ಟ್ 19ರಂದು ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯಲ್ಲಿ ಪಕ್ಷದ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವ ನಿರ್ಧಾರ ಕೈಗೊಳ್ಳಲಾಯಿತು.
ಈಗ ರಾಜ್ಯದ ಕಾಂಗ್ರೆಸ್ ಸರ್ಕಾರವು ರಾಜ್ಯದ ಅಧಿಕೃತ ಕಾರ್ಯಕ್ರಮಗಳಿಗೆ ಪ್ರತ್ಯೇಕ ಮಾರ್ಗಸೂಚಿ ಜಾರಿಗೊಳಿಸಿರುವುದು ವಂದೇ ಮಾತರಂ ಕುರಿತ ರಾಜಕೀಯ ಹಾಗೂ ಸಾರ್ವಜನಿಕ ಚರ್ಚೆಗೆ ಕಾರಣವಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ