ಲಕ್ನೋ: ಭಾರತದ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟರ್ ರಿಂಕು ಸಿಂಗ್ ಹಾಗೂ ಸಮಾಜವಾದಿ ಪಕ್ಷದ ಸಂಸದೆ ಪ್ರಿಯಾ ಸರೋಜ ಅವರ ವಿವಾಹಕ್ಕೆ ದಿನಾಂಕ ನಿಗದಿಯಾಗಿದೆ. ಡಿಸೆಂಬರ್ 4ರಂದು ಲಕ್ನೋದ ರಾಮಡಾ ಹೋಟೆಲ್ನಲ್ಲಿ ರಿಂಕು ಸಿಂಗ್ ಹಾಗೂ ಪ್ರಿಯಾ ಸರೋಜ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.
ರಿಂಕು ಸಿಂಗ್ ಮತ್ತು ಪ್ರಿಯಾ ಸರೋಜ ಜೂನ್ 8, 2025ರಂದು ಲಕ್ನೋದಲ್ಲೇ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ವಾಸ್ತವವಾಗಿ, ಈ ಜೋಡಿಯ ವಿವಾಹವನ್ನು 2026ರ ಜೂನ್ನಲ್ಲಿ ನಡೆಸಲು ನಿರ್ಧರಿಸಲಾಗಿತ್ತು. ಆದರೆ ರಿಂಕು ಸಿಂಗ್ ಅವರ ತಂದೆ ನಿಧನರಾದ ಹಿನ್ನೆಲೆಯಲ್ಲಿ ಎರಡೂ ಕುಟುಂಬಗಳ ಒಪ್ಪಿಗೆಯೊಂದಿಗೆ ವಿವಾಹವನ್ನು ಮುಂದೂಡಲಾಗಿತ್ತು. ಇದೀಗ ಡಿಸೆಂಬರ್ 4ರಂದು ದಿನಾಂಕ ನಿಗದಿಯಾಗಿದ್ದು, ವಿವಾಹ ಸಮಾರಂಭದಲ್ಲಿ ಹಲವು ಗಣ್ಯರು ಭಾಗವಹಿಸುವ ನಿರೀಕ್ಷೆಯಿದೆ.
ಐಪಿಎಲ್ನಲ್ಲಿ ಐದು ಸಿಕ್ಸರ್ಗಳಿಂದ ಖ್ಯಾತಿ
ರಿಂಕು ಸಿಂಗ್ ಅವರ ಕ್ರಿಕೆಟ್ ವೃತ್ತಿಜೀವನದಲ್ಲಿ ಐಪಿಎಲ್ 2023 ಮಹತ್ವದ ತಿರುವು ನೀಡಿತು. ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಪರ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಕೊನೆಯ ಓವರ್ನಲ್ಲಿ ಸತತ ಐದು ಸಿಕ್ಸರ್ ಸಿಡಿಸಿ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟ ಬಳಿಕ ರಿಂಕು ದೇಶಾದ್ಯಂತ ಭಾರಿ ಖ್ಯಾತಿ ಗಳಿಸಿದರು.
ತಮ್ಮ ಸ್ಫೋಟಕ ಬ್ಯಾಟಿಂಗ್ ಹಾಗೂ ಒತ್ತಡದ ಸಂದರ್ಭಗಳಲ್ಲಿ ಪಂದ್ಯವನ್ನು ಗೆಲುವಿನತ್ತ ಕೊಂಡೊಯ್ಯುವ ಸಾಮರ್ಥ್ಯದಿಂದ ರಿಂಕು ಶೀಘ್ರದಲ್ಲೇ ಭಾರತ ತಂಡದಲ್ಲಿ ಸ್ಥಾನ ಪಡೆದರು. ಟಿ20 ಮಾದರಿಯಲ್ಲಿ ಫಿನಿಷರ್ ಪಾತ್ರದಲ್ಲಿ ಗಮನಾರ್ಹ ಪ್ರದರ್ಶನ ನೀಡಿದ ಅವರು, ತಂಡದ ಪ್ರಮುಖ ಆಟಗಾರರ ಪೈಕಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ.
ರಿಂಕು 2024 ಮತ್ತು 2026ರ ಟಿ20 ವಿಶ್ವಕಪ್ ವಿಜೇತ ಭಾರತ ತಂಡದ ಭಾಗವಾಗಿದ್ದರು. ಇದುವರೆಗೆ ಅವರು ಭಾರತ ಪರ 48 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು, 36.94ರ ಸರಾಸರಿಯಲ್ಲಿ 702 ರನ್ ಗಳಿಸಿದ್ದಾರೆ. ಇದರಲ್ಲಿ ಮೂರು ಅರ್ಧಶತಕಗಳು ಸೇರಿವೆ.


ನಿಮ್ಮ ಕಾಮೆಂಟ್ ಬರೆಯಿರಿ