ಭಟ್ಕಳ ; ಗಣೇಶ ಮೂರ್ತಿ ಮೆರವಣಿಗೆ ವೇಳೆ ಕಲ್ಲು ತೂರಾಟ ; ದೂರು – ಪ್ರತಿ ದೂರು ದಾಖಲು

ಭಟ್ಕಳ : ಗಣೇಶ ಮೂರ್ತಿ ಮೆರವಣಿಗೆ ವೇಳೆ ಕಲ್ಲು ತೂರಾಟ ; ದೂರು – ಪ್ರತಿ ದೂರು ದಾಖಲು
ಕಾರವಾರ: ಜಿಲ್ಲೆಯ ಭಟ್ಕಳದ ತಲಾಂದದಲ್ಲಿ ಬುಧವಾರ ತಡರಾತ್ರಿ ಸಾರ್ವಜನಿಕ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಎಫ್‌ಐಆರ್‌ಗಳು ದಾಖಲಾಗಿವೆ.
ಪ್ರಕರಣದ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ತಲಾಂದ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ವತಿಯಿಂದ ಗಣೇಶ ವಿಗ್ರಹವನ್ನು ವಿಸರ್ಜನೆಗೆ ಕೊಂಡೊಯ್ಯುತ್ತಿದ್ದ ವೇಳೆ, ಮೆರವಣಿಗೆ ಗುಳ್ಮಿ ರೈಲು ನಿಲ್ದಾಣ ರಸ್ತೆ ಹಾಗೂ ಮದರಸಾ ಮಾರ್ಗವಾಗಿ ಸಾಗುತ್ತಿದ್ದ ಸಂದರ್ಭದಲ್ಲಿ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ. ಬಳಿಕ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

ಈ ಸಂಬಂಧ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಮೆರವಣಿಗೆ ಸಾಗುತ್ತಿದ್ದ ವೇಳೆ ಮದರಸಾ ಹಾಗೂ ಪ್ರಾರ್ಥನಾ ಸ್ಥಳದ ಮೇಲೆ ಕಲ್ಲು ಎಸೆಯಲಾಗಿದ್ದು, ಕಟ್ಟಡದ ಕಿಟಕಿ ಗಾಜುಗಳಿಗೆ ಹಾನಿಯಾಗಿದೆ ಎಂದು ಆರೋಪಿಸಲಾಗಿದೆ.
ಇದರ ಬೆನ್ನಲ್ಲೇ ತಲಾಂದ ಗಣೇಶೋತ್ಸವ ಸಮಿತಿ ಅಧ್ಯಕ್ಷರು ಗುರುವಾರ ಮುಂಜಾನೆ ಪೊಲೀಸರಿಗೆ ಪ್ರತಿದೂರು ನೀಡಿದ್ದಾರೆ. ಮೆರವಣಿಗೆ ಸಾಗುತ್ತಿದ್ದ ಸಂದರ್ಭದಲ್ಲಿ ಕಟ್ಟಡವೊಂದರ ಮೇಲಿನಿಂದ ಕಲ್ಲುಗಳನ್ನು ಎಸೆಯಲಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಈ ಎರಡೂ ದೂರುಗಳ ಆಧಾರದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ಹಿನ್ನೆಲೆಯಲ್ಲಿ ಪ್ರದೇಶದಲ್ಲಿ ಪೊಲೀಸ್ ಬಂದೋಬಸ್ತ್‌ನ್ನು ಹೆಚ್ಚಿಸಲಾಗಿದೆ.

ಪ್ರಮುಖ ಸುದ್ದಿ :-   ಮತ್ತೆ 23 ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಿದ ಸರ್ಕಾರ ; ಒಟ್ಟು ತಾಲೂಕುಗಳ ಸಂಖ್ಯೆ 124ಕ್ಕೆ ಏರಿಕೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement