ಕಲ್ಲು ಕ್ವಾರಿ: ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ರೂ.ದಂಡ

ಹಾವೇರಿ: ಪರವಾನಗಿ ನಿಯಮಗಳನ್ನು ಉಲ್ಲಂಘಿಸಿ ಕಲ್ಲು ಗಣಿಗಾರಿಕೆ ನಡೆಸಿದ್ದ ಆರೋಪದಡಿ, ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ರಾಜ್ಯದ ಸಕ್ಕರೆ  ಹಾಗೂ ಜವಳಿ ಕಾತೆ ಸಚಿವ ರುದ್ರಪ್ಪ ಲಮಾಣಿ ಅವರಿಗೆ ಸುಮಾರು ₹3 ಕೋಟಿ ದಂಡ ವಿಧಿಸಲಾಗಿದೆ ಎಂದು ತಿಳಿದುಬಂದಿದೆ.
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಹುಣಸಿಕಟ್ಟಿ ಬಳಿಯಲ್ಲಿ ಕ್ವಾರಿ ನಡೆಸಲು ರುದ್ರಪ್ಪ ಲಮಾಣಿ ಅವರು ಹಲವು ವರ್ಷಗಳ ಹಿಂದೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ಪರವಾನಗಿ ಪಡೆದುಕೊಂಡಿದ್ದಾರೆ. ಅಲ್ಲಿ ಕ್ವಾರಿಯನ್ನೂ ನಡೆಸುತ್ತಿದ್ದಾರೆ.
ಅಲ್ಲಿ ಅನುಮತಿಸಲಾದ ಮಿತಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಕಲ್ಲು ಗಣಿಗಾರಿಕೆ ನಡೆಸುವ ಮೂಲಕ ನಿಯಮಗಳನ್ನು ಉಲ್ಲಂಘಿಸಿರುವುದು ಕಂಡುಬಂದಿದೆ. ಹೀಗಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು, ರುದ್ರಪ್ಪ ಲಮಾಣಿ ಅವರಿಗೆ ಈ ಸಂಬಂಧ ನೋಟಿಸ್ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಆರು ತಿಂಗಳೊಳಗೆ ಸುಮಾರು ₹ 3 ಕೋಟಿ ದಂಡವನ್ನು ಪಾವತಿಸಬೇಕು ಎಂದು ಸೂಚಿಸಿದ್ದಾರೆ. ಮೂರು ಕಂತುಗಳನ್ನು ದಂಡ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿದುಬಂದಿದೆ.
ಕಲ್ಲು ಕ್ವಾರಿ ಪ್ರದೇಶದಲ್ಲಿ ನಿಯಮ ಉಲ್ಲಂಘನೆಯಾಗಿದೆಯೇ ಎಂಬುದನ್ನ ಪರಿಶೀಲಿಸಲು ಡ್ರೋಣ್‌ ಮೂಲಕ ಸಮೀಕ್ಷೆ ನಡೆಸಲಾಗಿದೆ. ಕರ್ನಾಟಕ ರಿಮೋಟ್ ಸೆನ್ಸಿಂಗ್ ಅಪ್ಲಿಕೇಶನ್ಸ್ ಸೆಂಟರ್ (KRSAC) ಮೂಲಕ ನಡೆಸಲಾದ ಸಮೀಕ್ಷೆಯ ವೇಳೆ ನಿಯಮ ಉಲ್ಲಂಘನೆಗಳು ಕಂಡುಬಂದಿವೆ. ಈ ಹಿನ್ನೆಲೆಯಲ್ಲಿ ಕಲ್ಲು ಕ್ವಾರಿ ಹಾಗೂ ಕ್ರಷರ್‌ ಮಾಲೀಕರಿಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ದಂಡ ವಿಧಿಸಿದೆ.
ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement