ರಾಯಚೂರು : ಗಣೇಶ ವಿಸರ್ಜನೆ ಮೆರವಣಿಗೆಯ ವೇಳೆ ಟ್ರ್ಯಾಕ್ಟರ್‌ನಿಂದ ಬಿದ್ದು ಇಬ್ಬರು ಬಾಲಕರು ಮೃತಪಟ್ಟಿದ್ದು, ಮತ್ತೊಬ್ಬರಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರು ನಗರದಲ್ಲಿ ಶನಿವಾರ ನಡೆದಿದೆ.
ನಗರದ ಎಂ. ಎರಣ್ಣ ವೃತ್ತದ ಬಳಿ ಗಣೇಶ ವಿಸರ್ಜನೆ ಮೆರವಣಿಗೆ ಸಾಗುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ಮೆರವಣಿಗೆಯಲ್ಲಿ ಭಾಗಿಯಾಗಿದ್ದ ಬಾಲಕರು ಟ್ರ್ಯಾಕ್ಟರ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ರಸ್ತೆ ಹಂಪ್ ದಾಟುವ ಸಂದರ್ಭದಲ್ಲಿ ವಾಹನ ಸಮತೋಲನ ಕಳೆದುಕೊಂಡಿದೆ. ಇದರಿಂದ ಟ್ರ್ಯಾಕ್ಟರ್‌ನಲ್ಲಿದ್ದ ಇಬ್ಬರು ಬಾಲಕರು ಕೆಳಗೆ ಬಿದ್ದಿದ್ದು, ವಾಹನದ ಚಕ್ರಗಳ ಅಡಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ, ತಲೆಗೆ ತೀವ್ರ ಪೆಟ್ಟಾಗಿದ್ದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯಗದರೂ ಪ್ರಯೋಜನವಾಗಲಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಮೃತರನ್ನು 16 ವರ್ಷದ ಸುಚಿತಕುಮಾರ ಮತ್ತು 14 ವರ್ಷದ ಚರಣಕುಮಾರ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ವಿಜಯಕುಮಾರ ಎಂಬ ಮತ್ತೊಬ್ಬ ಬಾಲಕ ಗಂಭೀರವಾಗಿ ಗಾಯಗೊಂಡಿದ್ದು, ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ರಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಬಾಲಕರ ಮೃತದೇಹಗಳನ್ನು ರಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಈ ಸಂಬಂಧ ರಾಯಚೂರು ನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.ಟ್ರ್ಯಾಕ್ಟರ್ ಹೇಗೆ ಸಮತೋಲನ ಕಳೆದುಕೊಂಡಿತು, ಬಾಲಕರು ಯಾವ ಸಂದರ್ಭಗಳಲ್ಲಿ ವಾಹನದಿಂದ ಕೆಳಗೆ ಬಿದ್ದರು ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ