ಕೆಪಿಎಸ್‌ಸಿ ನೇಮಕಾತಿ ಹಗರಣದ ತನಿಖೆಗೆ ಎಸ್‌ಐಟಿ ರಚನೆ ; ಹೈಕೋರ್ಟ್​​ನಿಂದ ಆದೇಶ

ಬೆಂಗಳೂರು: ಕರ್ನಾಟಕ ರಾಜ್ಯ ಲೋಕಸೇವಾ ಆಯೋಗ (KPSC) ಮೂಲಕ ಪಶುವೈದ್ಯಾಧಿಕಾರಿಗಳು ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ತನಿಖೆಗೆ ವಿಶೇಷ ತನಿಖಾ ತಂಡ (SIT) ರಚಿಸುವಂತೆ ಕರ್ನಾಟಕ ಹೈಕೋರ್ಟ್ ಸೋಮವಾರ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ತನಿಖೆ ಆರಂಭವಾದ ದಿನದಿಂದ 100 ದಿನಗಳೊಳಗೆ ಅಂತಿಮ ವರದಿಯನ್ನು ಹೈಕೋರ್ಟ್‌ಗೆ ಸಲ್ಲಿಸಬೇಕು. ಅಲ್ಲದೆ, ತನಿಖೆ ಪ್ರಾರಂಭವಾದ ನಂತರ ಪ್ರತಿ 30 ದಿನಗಳಿಗೊಮ್ಮೆ ಪ್ರಗತಿ ವರದಿಯನ್ನು ನ್ಯಾಯಾಲಯದ ಮುಂದೆ ಸಲ್ಲಿಸಬೇಕು ಎಂದು ಎಸ್‌ಐಟಿಗೆ ನಿರ್ದೇಶಿಸಲಾಗಿದೆ.
ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠವು ಈ ಆದೇಶ ನೀಡಿದ್ದು, ಪ್ರಕರಣದ ತನಿಖೆಯನ್ನು ರಾಜ್ಯ ಅಪರಾಧ ತನಿಖಾ ದಳ (CID)ದಿಂದ ಕೇಂದ್ರ ತನಿಖಾ ದಳ (CBI)ಗೆ ವರ್ಗಾಯಿಸಬೇಕೆಂಬ ಮನವಿಯನ್ನು ತಿರಸ್ಕರಿಸಿದೆ. ಇದರ ಬದಲಾಗಿ ರಾಜ್ಯದಲ್ಲೇ ವಿಶೇಷ ತನಿಖಾ ತಂಡ ರಚಿಸಿ ತನಿಖೆ ನಡೆಸುವಂತೆ ಸೂಚಿಸಿದೆ.
ಸಿಬಿಐ (CBI) ಈ ಹಿಂದೆ ಕೆಲವು ಪ್ರಕರಣಗಳ ತನಿಖೆ ಪೂರ್ಣಗೊಳಿಸಲು ಸಾಕಷ್ಟು ಸಮಯ ತೆಗೆದುಕೊಂಡಿರುವುದನ್ನು ಪರಿಗಣಿಸಿದ ನ್ಯಾಯಾಲಯ, ನೇಮಕಾತಿ ಪ್ರಕ್ರಿಯೆಯಲ್ಲಿ ಸಂವಿಧಾನಾತ್ಮಕವಾಗಿ ಖಾತರಿಪಡಿಸಿರುವ ಅರ್ಹತೆ (Merit) ಮತ್ತು ಸಮಾನತೆಯ ಆಶಯದ ಪಾವಿತ್ರ್ಯವನ್ನು ಶೀಘ್ರವಾಗಿ ಮರುಸ್ಥಾಪಿಸುವ ಅಗತ್ಯವಿದೆ ಎಂದು ಒತ್ತಿಹೇಳಿದೆ.

ಮೂರು ಕ್ರಿಮಿನಲ್ ಅರ್ಜಿಗಳು ಹಾಗೂ ಎರಡು ರಿಟ್ ಅರ್ಜಿಗಳನ್ನು ಒಟ್ಟುಗೂಡಿಸಿ ವಿಚಾರಣೆ ನಡೆಸಿದ ಸಂದರ್ಭದಲ್ಲಿ ಹೈಕೋರ್ಟ್ ಎಸ್‌ಐಟಿ ರಚನೆಗೆ ಆದೇಶಿಸಿದೆ. ಶಾಸಕ ಬಸನಗೌಡ ಪಾಟೀಲರು ಹಾಗೂ ಪಶು ವೈದ್ಯರೊಬ್ಬರು ರಿಟ್‌ ಅರ್ಜಿ ಸಲ್ಲಿಸಿದ್ದರು. ಕೆಪಿಎಸ್‌ಸಿ ನೇಮಕಾತಿಗಳಲ್ಲಿನ ಅಕ್ರಮಗಳ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಅವರು ನ್ಯಾಯಾಲಯವನ್ನು ಕೋರಿದ್ದರು.
ವಿಧಾನಸಭಾ ಸದಸ್ಯರು ಸಲ್ಲಿಸಿದ್ದ ಅರ್ಜಿಯಲ್ಲಿ, ಕೆಪಿಎಸ್‌ಸಿ ಅಧ್ಯಕ್ಷರ ಪುತ್ರಿಯರು 3ಬಿ ವರ್ಗದ ಮೀಸಲಾತಿ ಅಡಿಯಲ್ಲಿ ಸರ್ಕಾರಿ ಉದ್ಯೋಗಕ್ಕೆ ಆಯ್ಕೆಯಾಗಿದ್ದು, ಈ ಆಯ್ಕೆ ಪ್ರಕ್ರಿಯೆಯಲ್ಲಿ ಕೆಪಿಎಸ್‌ಸಿ ಅಧ್ಯಕ್ಷರೂ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿತ್ತು.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಎಸ್‌ಸಿ ನೇಮಕಾತಿಯಲ್ಲಿ ಅಂತಿಮ ಆಯ್ಕೆ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದ ಕೆಲವು ಅಭ್ಯರ್ಥಿಗಳೂ ಹೈಕೋರ್ಟ್ ಮೆಟ್ಟಿಲೇರಿದ್ದರು. ನೇಮಕಾತಿಯಲ್ಲಿ ವಿಫಲರಾದ ಇತರ ಅಭ್ಯರ್ಥಿಗಳ ದೂರಿನ ಆಧಾರದ ಮೇಲೆ ತಮ್ಮ ವಿರುದ್ಧ ಕ್ರಿಮಿನಲ್ ಪ್ರಕರಣಗಳು ದಾಖಲಾಗಿರುವುದನ್ನು ಪ್ರಶ್ನಿಸಿದ್ದ ಅವರು, ಆ ಪ್ರಕರಣಗಳನ್ನು ರದ್ದುಪಡಿಸುವಂತೆ ಹಾಗೂ ಅಂತಿಮ ಆಯ್ಕೆ ಪಟ್ಟಿಯ ಮಾನ್ಯತೆಯನ್ನು ಮರುಸ್ಥಾಪಿಸುವಂತೆ ಮನವಿ ಮಾಡಿದ್ದರು.
ಈ ನೇಮಕಾತಿ ಅಕ್ರಮಗಳಿಗೆ ಸಂಬಂಧಿಸಿದ ಮೂಲ ಅಪರಾಧಗಳ ಆಧಾರದ ಮೇಲೆ ʼಜಾರಿ ನಿರ್ದೇಶನಾಲಯ (ED)ʼವು ಈಗಾಗಲೇ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ, 2002 (PMLA) ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಿರುವುದನ್ನೂ ನ್ಯಾಯಾಲಯ ಗಮನಿಸಿದೆ. ಎಸ್‌ಐಟಿ ಮತ್ತು ಜಾರಿ ನಿರ್ದೇಶನಾಲಯ ಪರಸ್ಪರ ಸಹಕಾರದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ನ್ಯಾಯಾಲಯ ನಿರ್ದೇಶಿಸಿದೆ.

ಪ್ರಮುಖ ಸುದ್ದಿ :-   ಕೊಪ್ಪಳ : ಕೋತಿ ತಳ್ಳಿದ್ದಕ್ಕೆ ನೆಲಕ್ಕೆ ಬಿದ್ದು ವೃದ್ಧೆ ಸಾವು; ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಎಸ್‌ಐಟಿ ತಂಡದ ರಚನೆ
ನ್ಯಾಯಾಲಯದ ಆದೇಶದಂತೆ ರಚಿಸಲಾಗಿರುವ ಎಸ್‌ಐಟಿಗೆ ಪೊಲೀಸ್ ಮಹಾನಿರ್ದೇಶಕ (DGP) ಅಲೋಕಕುಮಾರ, ಎಸ್‌ಐಟಿ ಮುಖ್ಯಸ್ಥರಾಗಿರಲಿದ್ದಾರೆ. ತಂಡದಲ್ಲಿ ಇರುವ ಇತರ ಸದಸ್ಯರೂ ಐಪಿಎಸ್‌ ಅಧಿಕಾರಿಗಳಾಗಿದ್ದಾರೆ. ಫೋರೆನ್ಸಿಕ್ ಸೈನ್ಸ್ ಲ್ಯಾಬೊರೇಟರಿ ನಿರ್ದೇಶಕಿ ದಿವ್ಯಾ ಗೋಪಿನಾಥ, ಡಿಸಿಪಿ ಅನೂಪ ಶೆಟ್ಟಿ, ಪೊಲೀಸ್ ಅಧೀಕ್ಷಕ ಕುಶಾಲ್ ಚೌಕ್ಸೆ ಹಾಗೂ ಡಿಸಿಪಿ ಶಮಾ ಮಿಶ್ರಾ ತಂಡದಲ್ಲಿ ಇರಲಿದ್ದಾರೆ.
ಈವರೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಹಾಗೂ ಸಂಬಂಧಪಟ್ಟ ವ್ಯಾಪ್ತಿಯ ಪೊಲೀಸರು ಸಂಗ್ರಹಿಸಿರುವ ಎಲ್ಲ ಸಾಕ್ಷ್ಯಾಧಾರಗಳು, ದಾಖಲೆಗಳು ಮತ್ತು ಇತರ ಮಾಹಿತಿಯನ್ನು ನ್ಯಾಯಾಲಯದ ಆದೇಶದ ಒಂದು ವಾರದೊಳಗೆ ಎಸ್‌ಐಟಿಗೆ ಹಸ್ತಾಂತರಿಸಬೇಕು ಎಂದು ಸೂಚಿಸಿದೆ.
ತನಿಖೆಗೆ ಅಗತ್ಯವಿರುವ ಸಂಪೂರ್ಣ ಸಹಕಾರ ನೀಡುವಂತೆ ಎಲ್ಲ ಸರ್ಕಾರಿ ಇಲಾಖೆಗಳು, ತನಿಖಾ ಸಂಸ್ಥೆಗಳು, ಸಾರ್ವಜನಿಕ ಪ್ರಾಧಿಕಾರಗಳು ಮತ್ತು ಅಧಿಕಾರಿಗಳಿಗೆ ನ್ಯಾಯಾಲಯ ನಿರ್ದೇಶನ ನೀಡಿದೆ. ಅಗತ್ಯವಿರುವ ತಾಂತ್ರಿಕ ನೆರವು, ಸಿಬ್ಬಂದಿ ಹಾಗೂ ಇತರ ಸಂಪನ್ಮೂಲಗಳನ್ನು ಎಸ್‌ಐಟಿಗೆ ಒದಗಿಸುವಂತೆಯೂ ಸೂಚಿಸಲಾಗಿದೆ.
ಅಲ್ಲದೆ, ತನಿಖೆ ಆರಂಭವಾದ ದಿನದಿಂದ 100 ದಿನಗಳೊಳಗೆ ಅಂತಿಮ ವರದಿಯನ್ನು ಹೈಕೋರ್ಟ್‌ಗೆ ಸಲ್ಲಿಸಬೇಕು. ಹಾಗೂ ತನಿಖೆ ಪ್ರಾರಂಭವಾದ ನಂತರ ಪ್ರತಿ 30 ದಿನಗಳಿಗೊಮ್ಮೆ ತನಿಖೆಯ ಪ್ರಗತಿಯ ವರದಿಯನ್ನು ನ್ಯಾಯಾಲಯದ ಮುಂದೆ ಸಲ್ಲಿಸಬೇಕು ಎಂದು ಎಸ್‌ಐಟಿಗೆ ನಿರ್ದೇಶಿಸಲಾಗಿದೆ.
ಪ್ರಕರಣದಲ್ಲಿ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳನ್ನು ರದ್ದುಪಡಿಸುವಂತೆ ಸಲ್ಲಿಸಿರುವ ಅರ್ಜಿಗಳನ್ನು ಎಸ್‌ಐಟಿ ಅಂತಿಮ ವರದಿ ಸಲ್ಲಿಸಿದ ಬಳಿಕ ಹೈಕೋರ್ಟ್ ಪರಿಗಣಿಸಲಿದೆ. ಪ್ರಕರಣದ ಮುಂದಿನ ವಿಚಾರಣೆ 2027ರ ಜನವರಿ 5ರಂದು ನಡೆಯಲಿದೆ.

ಪ್ರಮುಖ ಸುದ್ದಿ :-   ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement