ನವದೆಹಲಿ : ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 4,000 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡುವಂತೆಕಾವೇರಿ ನೀರು ನಿಯಂತ್ರಣ ಸಮಿತಿ (CWRC ಶಿಫಾರಸು ಮಾಡಿದೆ.
ಗುರುವಾರ ದೆಹಲಿಯಲ್ಲಿ ಸಿಡಬ್ಲ್ಯೂಆರ್ಸಿ ಮುಖ್ಯಸ್ಥ ವಿನೀತ್ ಗುಪ್ತಾ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಶಿಫಾರಸು ಮಾಡಲಾಗಿದೆ. ಈ ಹಿಂದೆ ಸೆಪ್ಟೆಂಬರ್ 8ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಕರ್ನಾಟಕವು ಪ್ರತಿದಿನ 6,000 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡಬೇಕು ಎಂದು ನಿರ್ದೇಶನ ನೀಡಿತ್ತು. ಕಾವೇರಿ ಜಲಾನಯನ ಪ್ರದೇಶದಲ್ಲಿ ಕಡಿಮೆ ಒಳಹರಿವು ಹಾಗೂ ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ಪರಿಗಣಿಸಿಲ್ಲ ಎಂದು ಕರ್ನಾಟಕ ಸರ್ಕಾರವು ಹಿಂದಿನ ಆದೇಶಕ್ಕೆ ಆಕ್ಷೇಪ ವ್ಯಕ್ತಪಡಿಸಿತ್ತು. ಈ ಸಂಬಂಧ ರಾಜ್ಯದ ಜಲಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಅವರು ಸೆಪ್ಟೆಂಬರ್ 15ರಂದು ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಆ ಮನವಿಯಲ್ಲಿ ಕಾವೇರಿ ಜಲಾನಯನ ಪ್ರದೇಶದ ನಾಲ್ಕು ಪ್ರಮುಖ ಜಲಾಶಯಗಳಲ್ಲಿ ಒಟ್ಟಾರೆ 55 ಟಿಎಂಸಿ ಅಡಿ ನೀರು ಮಾತ್ರ ಲಭ್ಯವಿದೆ ಎಂದು ಅವರು ಉಲ್ಲೇಖಿಸಿದ್ದರು. ಜೊತೆಗೆ, ಕಳೆದ ಒಂದು ತಿಂಗಳ ಅವಧಿಯಲ್ಲಿ ಜಲಾಶಯಗಳಿಗೆ ಹರಿದುಬರುವ ನೀರಿನ ಪ್ರಮಾಣ ಶೇ.87ರಷ್ಟು ಕುಸಿದಿದೆ ಎಂಬ ಮಾಹಿತಿಯನ್ನೂ ನೀಡಿದ್ದರು.
ಕಾಕಾವೇರಿ ನೀರು ನಿಯಂತ್ರಣ ಸಮಿತಿ (CWRC ಗುರುವಾರ (ಸೆ.24) ಸಭೆಯಲ್ಲಿ 4,000 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡುವಂತೆ ನಿರ್ದೇಶನ ನೀಡಿದೆ.
ಇದನ್ನು ಪ್ರಶ್ನಿಸುತ್ತೇವೆ….
ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 4,000 ಕ್ಯೂಸೆಕ್ ಕಾವೇರಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ನಿರ್ದೇಶನವನ್ನು ರಾಜ್ಯ ಸರ್ಕಾರ ಪ್ರಶ್ನಿಸಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ತಿಳಿಸಿದ್ದಾರೆ. ಕರ್ನಾಟಕದಲ್ಲಿ ನೀರಿನ ಬಿಕ್ಕಟ್ಟು ಎದುರಾಗಿರುವ ಹಿನ್ನೆಲೆಯಲ್ಲಿ ರೈತರ ಹಿತಾಸಕ್ತಿಗೆ ಯಾವುದೇ ಧಕ್ಕೆಯಾಗದಂತೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಅವರು ಸ್ಪಷ್ಟಪಡಿಸಿದರು.
ಸಿಡಬ್ಲ್ಯುಆರ್ಸಿ ನೀಡಿರುವ ಆದೇಶದ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಜಲಾಶಯಗಳಿಗೆ ಹರಿದುಬರುತ್ತಿರುವ ನೀರಿನ ಪ್ರಮಾಣ ಗಣನೀಯವಾಗಿ ಕುಸಿದಿರುವುದು ಹಾಗೂ ಮಳೆಯ ಅಭಾವದಿಂದ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವುದು ಕಷ್ಟಕರವಾಗಿದೆ ಎಂದು ಹೇಳಿದರು.
ಚಿತ್ರದುರ್ಗ ಜಿಲ್ಲೆಯ ಸಿರಿಗೆರೆ ಮಠದ ಹೆಲಿಪ್ಯಾಡ್ ಸಮೀಪ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಿಡಬ್ಲ್ಯುಆರ್ಸಿ ಕಾವೇರಿ ನೀರು ಬಿಡುಗಡೆ ಕುರಿತು ಆದೇಶ ನೀಡಿರುವ ಮಾಹಿತಿ ನನಗೆ ಬಂದಿದೆ. ಆದರೆ ರಾಜ್ಯದಲ್ಲಿ ನೀರಿನ ಬಿಕ್ಕಟ್ಟಿನ ಪರಿಸ್ಥಿತಿ ಇರುವುದರಿಂದ ತಮಿಳುನಾಡಿಗೆ ನೀರು ಬಿಡುವುದು ಕಷ್ಟವಾಗಿದೆ. ನಾವು ಈ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸುತ್ತಿದ್ದೇವೆ. ನೀರಿನ ಲಭ್ಯತೆ ಇದ್ದರೆ ನೀರು ಬಿಡುಗಡೆ ಮಾಡುತ್ತೇವೆ” ಎಂದು ಮುಖ್ಯಮಂತ್ರಿ ಹೇಳಿದರು.


ನಿಮ್ಮ ಕಾಮೆಂಟ್ ಬರೆಯಿರಿ