ಕಾರವಾರ: ಮಡಗಾಂವ್ (ಗೋವಾ)-ಮಂಗಳೂರು ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲನ್ನು ಇದೀಗ ಬೆಂಗಳೂರಿನ ವರೆಗೆ ವಿಸ್ತರಿಸಲಾಗಿದೆ.
ಈ ಕುರಿತು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಪತ್ರದ ಮೂಲಕ ತಮಗೆ ಮಾಹಿತಿ ನೀಡಿದ್ದನ್ನು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
“ಬೆಂಗಳೂರು ಮತ್ತು ಮಡಗಾಂವ್ ನಡುವೆ ಹೊಸದಾಗಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚಾರ ಆರಂಭಿಸಬೇಕು ಎಂದು 11.03.2026ರಂದು ರೈಲ್ವೆ ಸಚಿವರನ್ನು ಭೇಟಿ ಮಾಡಿ ಲಿಖಿತ ಮನವಿ ಸಲ್ಲಿಸಿದ್ದೆ. ನಮ್ಮ ಭಾಗದ ಜನರ ಈ ನ್ಯಾಯಯುತ ಬೇಡಿಕೆಯನ್ನು ಕೇಂದ್ರ ಸರ್ಕಾರ ಹಾಗೂ ರೈಲ್ವೆ ಸಚಿವಾಲಯ ಗಂಭೀರವಾಗಿ ಪರಿಗಣಿಸಿದೆ. ಇದೀಗ ಪರಿಷ್ಕೃತ ವೇಳಾಪಟ್ಟಿಯೊಂದಿಗೆ ವಂದೇ ಭಾರತ್ ರೈಲು ಸೇವೆಯನ್ನು ವಿಸ್ತರಿಸಲಾಗಿದ್ದು, ರೈಲು ಸಂಖ್ಯೆ 26655/26656 ಯಶವಂತಪುರ–ಮಂಗಳೂರು–ಮಡಗಾಂವ್ ವಂದೇ ಭಾರತ್ ಎಕ್ಸ್ಪ್ರೆಸ್ ಸಂಚರಿಸಲಿದೆ.
ಈ ರೈಲು ಮಡಗಾಂವ್ನಿಂದ ಪ್ರಾರಂಭವಾಗಿ ಕಾರವಾರ, ಗೋಕರ್ಣ ಕ್ರಾಸ್ ಹಾಗೂ ಮುರ್ಡೇಶ್ವರ ಮಾರ್ಗವಾಗಿ ಮಂಗಳೂರನ್ನು ಸಂಪರ್ಕಿಸಿ ರಾಜಧಾನಿ ಬೆಂಗಳೂರು (ಯಶವಂತಪುರ) ತಲುಪಲಿದೆ” ಎಂದು ಕಾಗೇರಿ ತಿಳಿಸಿದ್ದಾರೆ.
ಈ ರೈಲಿನ ವಿಸ್ತರಣೆಯಿಂದ ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಕನ್ನಡ ಭಾಗದ ಜನರಿಗೆ ಬೆಂಗಳೂರಿಗೆ ವೇಗದ ಮತ್ತು ಆರಾಮದಾಯಕ ಪ್ರಯಾಣದ ಸೌಲಭ್ಯ ದೊರೆಯಲಿದೆ. ಜೊತೆಗೆ ಪ್ರಸಿದ್ಧ ತೀರ್ಥಕ್ಷೇತ್ರಗಳಿಗೆ ಭೇಟಿ ನೀಡುವ ಭಕ್ತಾದಿಗಳಿಗೆ ಹಾಗೂ ಈ ಭಾಗದ ಪ್ರವಾಸೋದ್ಯಮದ ಅಭಿವೃದ್ಧಿಗೆ ಇದು ಮಹತ್ತರ ನೆರವಾಗಲಿದೆ ಎಂದು ಅವರು ಹೇಳಿದ್ದಾರೆ.
ತಮ್ಮ ಮನವಿಗೆ ಸ್ಪಂದಿಸಿ ಈ ಮಹತ್ವದ ಕೊಡುಗೆ ನೀಡಿದ ಪ್ರಧಾನಿ ನರೇಂದ್ರ ಮೋದಿ, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ