ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ ಮಾಡಿದ್ದ ಸರ್ಕಾರದ ಆದೇಶ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು : ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡ (ST) ಗಳ ಮೀಸಲಾತಿ ಹೆಚ್ಚಿಸಿ ಬಸವರಾಜ ಬೊಮ್ಮಾಯಿ ನೇತೃತ್ವದ ಹಿಂದಿನ ಬಿಜೆಪಿ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ.
 ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಒಟ್ಟು ಮೀಸಲು ಪ್ರಮಾಣವನ್ನು ಶೇ.50ರಿಂದ 56ಕ್ಕೆ ಹೆಚ್ಚಿಸಿ ಜಾರಿಗೆ ತರಲಾಗಿದ್ದ ‘ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ ಕಾಯಿದೆ- 2022’ರ  ಸೆಕ್ಷನ್‌ 3 ಮತ್ತು 4 ಅನ್ನು ರದ್ದುಪಡಿಸಿ ಹೈಕೋರ್ಟ್ ಸೋಮವಾರ ಮಹತ್ವದ ತೀರ್ಪು ನೀಡಿದೆ ಎಂದು ಬಾರ್‌ ಎಂಡ್‌ ಬೆಂಚ್‌ ವರದಿ ಮಾಡಿದೆ.
ಈ ಕಾಯಿದೆಯ ಸೆಕ್ಷನ್ 3ರಡಿ ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಶೇ.15ರಿಂದ 17ಕ್ಕೆ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಶೇ. 3ರಿಂದ ಶೇ.7ಕ್ಕೆ ಹೆಚ್ಚಿಸುವ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣವನ್ನು ಶೇ.50 ರಿಂದ 56ಕ್ಕೆ ಹೆಚ್ಚಿಸಿದ್ದ ‘ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ಕಾಯಿದೆ- 2022’ ಅನ್ನು 2023ರ ಜನವರಿ 13ರಂದು ಜಾರಿಗೆ ತಂದು ಅಂದಿನ ಬಿಜೆಪಿ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿತ್ತು.
ಕಾಯಿದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ರಾಯಚೂರಿನ ಡಾ.ಅಂಬೇಡ್ಕರ್‌ ಪರಿಶಿಷ್ಟ ಜಾತಿಗಳ ಒಕ್ಕೂಟದ ರಾಜ್ಯಾಧ್ಯಕ್ಷ ಮಹೇಂದ್ರ ಕುಮಾರ್‌ ಮಿತ್ರಾ ಮತ್ತು ಇತರರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಕೆ ಎಸ್ ಹೇಮಲೇಖಾ ಅವರ ವಿಭಾಗೀಯ ಪೀಠ ಪ್ರಕಟಿಸಿದೆ.
ಕಾಯಿದೆಯ ಸೆಕ್ಷನ್ 3ರಡಿ ಎಸ್‌ಸಿ ವರ್ಗಗಳ ಮೀಸಲಾತಿಯನ್ನು ಶೇ.15ರಿಂದ 17ಕ್ಕೆ ಹೆಚ್ಚಿಸಿದ್ದ ಹಾಗೂ ಎಸ್‌ಟಿ ವರ್ಗಗಳ ಮೀಸಲಾತಿಯನ್ನು ಶೇ. 3ರಿಂದ ಶೇ.7ಕ್ಕೆ ಹೆಚ್ಚಿಸುವ ಮೂಲಕ ಒಟ್ಟು ಮೀಸಲಾತಿಯನ್ನು ಶೇ.50ರ ಮಿತಿಯನ್ನು ದಾಟಿ ಶೇ.56ಕ್ಕೆ ಹೆಚ್ಚಿಸಿರುವುದು ಸಂವಿಧಾನದ 14 ಮತ್ತು 15ನೇ ವಿಧಿಯ ಉಲ್ಲಂಘನೆಯಾಗಿದೆ. ಆದ ಕಾರಣ ಕಾಯಿದೆಯ ಸೆಕ್ಷನ್ 3 ಮತ್ತು 4ನ್ನು ರದ್ದುಪಡಿಸಲಾಗುತ್ತಿದೆ ಎಂದು ಪೀಠ ಆದೇಶದಲ್ಲಿ ತಿಳಿಸಿದೆ.
ಮೀಸಲಾತಿ ಪ್ರಮಾಣ ಶೇ.50ರ ಗರಿಷ್ಠ ಮಿತಿಯ ವಿಷಯಕ್ಕೆ ಬಂದರೆ, ಸಂವಿಧಾನದ 16ನೇ ವಿಧಿಯ ಉಪ ವಿಧಿ (4)ರ ಅಡಿಯಲ್ಲಿನ ಮೀಸಲಾತಿಗೆ ಅನ್ವಯವಾಗುವಂತೆಯೇ, ಸಂವಿಧಾನದ 15ನೇ ವಿಧಿಯ ಉಪ ವಿಧಿ (4)ರ ಅಡಿಯಲ್ಲಿನ ಮೀಸಲಾತಿಗೂ ಇದು ಸಮಾನವಾಗಿ ಅನ್ವಯಿಸುತ್ತದೆ. ಆದ್ದರಿಂದ, ಅಸಾಧಾರಣ ಸಂದರ್ಭಗಳಲ್ಲಿ ವಿನಾಯಿತಿಗೆ ಅರ್ಹ ಹಾಗೂ ಬಲವಾದ ಕಾರಣ ಸಾಬೀತುಪಡಿಸದ ಹೊರತು ರಾಜ್ಯವು ಈ ಮಿತಿಯನ್ನು ಮೀರುವುದನ್ನು ಅನುಮತಿಸುವುದು ಅರ್ಹವಲ್ಲ ಎಂದು ಪೀಠ ತೀರ್ಪಿನಲ್ಲಿ ಹೇಳಿದೆ.
ಸಂವಿಧಾನದ ವಿಧಿ 338ರ ಉಪ ವಿಧಿ (9) ಮತ್ತು ವಿಧಿ 338ಎರ ಉಪ ವಿಧಿ (9)ರ ಪ್ರಕಾರ, ಪರಿಶಿಷ್ಟ ಜಾತಿಗಳು ಅಥವಾ ಪರಿಶಿಷ್ಟ ಪಂಗಡಗಳ ಮೇಲೆ ಪರಿಣಾಮ ಬೀರುವ ಎಲ್ಲಾ ಪ್ರಮುಖ ನೀತಿ ವಿಷಯಗಳ ಕುರಿತು ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಮತ್ತು ಪರಿಶಿಷ್ಟ ಪಂಗಡಗಳ ಆಯೋಗದೊಂದಿಗೆ ಸಮಾಲೋಚನೆ ನಡೆಸುವಂತೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳಿಗೆ ಸೂಚಿಸಲಾಗಿದೆ. ಪ್ರಸ್ತುತ ಪ್ರಕರಣದಲ್ಲಿ ಈ ಕಾಯ್ದೆಯನ್ನು ಜಾರಿಗೆ ತರುವ ಮೊದಲು ರಾಜ್ಯ ಸರ್ಕಾರವು ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗ ಹಾಗೂ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗದೊಂದಿಗೆ ಸಮಾಲೋಚನೆಯೇ ನಡೆಸಿಲ್ಲ ಎಂದು ಪೀಠ ತೀರ್ಪಿನಲ್ಲಿ ಆಕ್ಷೇಪಿಸಿದೆ.
ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement